ಸಂಸದ ಶ್ರೀನಿವಾಸ್‌ಪ್ರಸಾದ್ ಅಂತಿಮಯಾತ್ರೆ

ಮೈಸೂರು,ಏ.೩೦:ನಿನ್ನೆ ನಿಧನರಾದ ಬಿಜೆಪಿ ಸಂಸದ ವಿ. ಶ್ರೀನಿವಾಸ್‌ಪ್ರಸಾದ್ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಭೌದ್ಧ ಧರ್ಮದ ವಿಧಿ-ವಿಧಾನದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ. ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಪಾರ್ಥೀವ ಶರೀರವನ್ನು ಅಶೋಕಪುರಂನ ಎನ್‌ಟಿಎಂ ಶಾಲೆಯ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಗಣ್ಯಾತಿಗಣ್ಯರು ಅಗಲಿದ ನಾಯಕನ ಅಂತಿಮ ದರ್ಶನ ಪಡೆದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ಶ್ರೀನಿವಾಸ್‌ಪ್ರಸಾದ್ ನಿಧನದ ಗೌರವಾರ್ಥ ಇಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಯಿತು.
ಈ ಮೊದಲೇ ನಿಗದಿಯಾಗಿರುವ ಪರೀಕ್ಷೆಗಳನ್ನೊರತುಪಡಿಸಿ ಅನುದಾನ ಪಡೆಯುವ ಎಲ್ಲ ವಿದ್ಯಾಸಂಸ್ಥೆಗಳಿಗೂ ರಜೆ ನೀಡಲಾಯಿತು.
ಅಂತಿಮ ದರ್ಶನ ಪಡೆದು ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ, ಶ್ರೀನಿವಾಸ್‌ಪ್ರಸಾದ್ ನಿಧನದಿಂದ ತುಂಬಾ ಆಘಾತವಾಗಿದೆ. ಅವರು ಸಮಾಜಕ್ಕಾಗಿ ಹೋರಾಟ ನಡೆಸಿದ್ದರು. ಧೈರ್ಯದಿಂದ ಮುನ್ನುಗ್ಗಿದ್ದ ಪ್ರಾಮಾಣಿಕ ರಾಜಕಾರಣಿಯಾಗಿದ್ದರು ಎಂದರು.
ಡಾ. ಬಾಬಾಸಾಹೇಬ್ ಅಂಬೇಡ್ಕರ್ ತತ್ವದಲ್ಲಿ ನಂಬಿಕೆ ಇಟ್ಟು ಸ್ವಾಭಿಮಾನದಿಂದ ಬದುಕಿದ ರಾಜಕಾರಣಿಯಾಗಿದ್ದರು. ಅನಾರೋಗ್ಯದಿಂದ ನಮ್ಮನ್ನು ಅಗಲಿದ್ದಾರೆ.ಅವರ ಕುಟುಂಬಕ್ಕೆ ನೋವು ತಡೆಯುವ ಶಕ್ತಿ ಭರಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.
ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ರಾಜಕೀಯ ಪಕ್ಷಗಳ ಮುಖಂಡರು ಪಾಲ್ಗೊಂಡು ಅಗಲಿದ ನಾಯಕನಿಗೆ ಶ್ರದ್ಧಾಂಜಲಿ ಸಮರ್ಪಿಸಿದರು.