ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಕಾರ್ಯಕ್ರಮ

ಧಾರವಾಡ, ಜು.19: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಆಗಸ್ಟ್ 15 ರವರೆಗೆ ನಡೆಯುವ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಿ. ಸಿ ಕರಿಗೌಡರ ಚಾಲನೆ ನೀಡಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ಷಯರೋಗವು ಸೂಕ್ಷ್ಮ ರೋಗಾಣುವಿನಿಂದ ಬರುತ್ತದೆ. ಕ್ಷಯರೋಗಿಯು ಕೆಮ್ಮಿದಾಗ ಅಥವಾ ಸೀನುವಾಗ ರೋಗಾಣುಗಳು ಗಾಳಿಯ ಮೂಲಕ ಆರೋಗ್ಯವಂತ ವ್ಯಕ್ತಿಯ ಶ್ವಾಸಕೋಶ ಸೇರಿ ಸೋಂಕು ಉಂಟಾಗುತ್ತದೆ. ಎರಡು ವಾರ ಅಥವಾ ಅದಕ್ಕಿಂತ ಮೇಲ್ಪಟ್ಟು ಸತತವಾದ ಕೆಮ್ಮು, ಜ್ವರ, ಎದೆಯಲ್ಲಿ ನೋವು ಉಂಟಾಗುವುದು, ತೂಕ ಕಡಿಮೆಯಾಗುವುದು, ಹಸಿವೆಯಾಗದಿರುವುದು, ಕಫದಲ್ಲಿ ರಕ್ತ ಬೀಳುವುದು, ಕತ್ತು ಮತ್ತು ಕಂಕುಳದಲ್ಲಿ ಗಡ್ಡೆಯಾಗುವುದು ಕ್ಷಯರೋಗದ ಲಕ್ಷಣಗಳಾಗಿದ್ದು, ತಕ್ಷಣ ಸಮೀಪದ ಸರಕಾರಿ ಆಸ್ಪತ್ರೆಗೆ ಹೋಗಿ ಕಫ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕ್ಷಯರೋಗ ಚಿಕಿತ್ಸೆ ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಉಚಿತವಾಗಿ ದೊರೆಯುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಿಮ್ಮ ಆರೋಗ್ಯ ನಮ್ಮ ಬದ್ಧತೆ ಎಂಬ ಸಂಕಲ್ಪದೊಂದಿಗೆ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಮಾಹಿತಿ ಇರುವ ಪೋಸ್ಟರ್ ಬಿಡುಗಡೆ ಮಾಡಿದರು.

       ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ಅಯ್ಯನಗೌಡ ಪಾಟೀಲ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಬಿ. ನಿಂಬಣ್ಣವರ, ಜಿಲ್ಲಾ ಕುಷ್ಟರೋಗ ನಿರ್ಮೂಲನಾ ಅಧಿಕಾರಿ ಡಾ.ಶಶಿ ಪಾಟೀಲ, ತಾಲೂಕಾ ಆರೋಗ್ಯಾಧಿಕಾರಿ ಡಾ.ತನುಜಾ ಕೆ.ಎನ್ ಹಾಗೂ ಇತರರು ಭಾಗವಹಿಸಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್. ಪಾತ್ರೋಟ ಸ್ವಾಗತಿಸಿ, ವಂದಿಸಿದರು.