ಸಚಿನ್‌ಗೆ ಕೊರೊನಾ ಆಸ್ಪತ್ರೆಗೆ ದಾಖಲು

ಮುಂಬೈ.ಏ.೨- ಕೊರೊನಾ ಸೋಂಕಿನಿಂದ ಬಳಲುತ್ತಿರುವ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವೈದ್ಯರ ಸಲಹೆ ಮೇರೆಗೆ ಮುನ್ನೆಚ್ಚೆರಿಕೆ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅವರು ಟ್ವೀಟ್ ಮಾಡಿದ್ದಾರೆ. ತಾವು ಆಸ್ಪತ್ರೆಗೆ ದಾಖಲಾಗಿದ್ದು, ಕೆಲವು ದಿನಗಳ ನಂತರ ಆಸ್ಪತ್ರೆಯಿಂದ ಮನೆಗೆ ತೆರಳುವುದಾಗಿ ಹೇಳಿರುವ ಅವರು, ತಮ್ಮ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಅಭಿಮಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಎಲ್ಲರೂ ಎಚ್ಚರಿಕೆ ವಹಿಸಿ ಸುರಕ್ಷಿತವಾಗಿರುವಂತೆ ಅವರು ಮನವಿ ಮಾಡಿದ್ದಾರೆ.
ಮಾ. ೨೭ ರಂದು ಸಚಿನ್‌ಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರು ಮನೆಯಲ್ಲೇ ಕ್ವಾರಂಟೈನ್‌ಗೆ ಒಳಪಟ್ಟಿದ್ದರು. ವೈದ್ಯರ ಸಲಹೆ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.