ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಪ್ರಚಾರ

ಬೆಂಗಳೂರು,ಮೇ ೪:ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಇಂದು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿ ಮತಯಾಚಿಸಿದರು.
ಕ್ಷೇತ್ರದ ಹಲವೆಡೆ ಮನೆ ಮನೆಗೆ ತೆರಳಿದ ಅವರು, ಅಭಿವೃದ್ಧಿಯ ಕಾರ್ಯಸೂಚಿಯನ್ನು ಮುಂದಿಟ್ಟು ಮತ ಕೋರಿದರು. ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಸರ್ಕಾರ ಇದ್ದರೆ ಅಭಿವೃದ್ಧಿ ವೇಗ ಪಡೆಯುತ್ತದೆ. ಹಾಗಾಗಿ, ಬಿಜೆಪಿಯನ್ನು ಬೆಂಬಲಿಸಿ ಎಂದು ಮನವಿ ಮಾಡಿದ ಅವರು, ಡಬಲ್ ಇಂಜಿನ್ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಟ್ಟು, ಆರ್ಶೀವಾದ ಕೋರಿದರು.
ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ. ಮತ್ತೆ ನನಗೆ ಆರ್ಶೀವಾದ ಮಾಡಿದರೆ ಬಾಕಿ ಇರುವ ಅಭಿವೃದ್ಧಿ ಕೆಲಸಗಳನ್ನು ಪೂರ್ಣಗೊಳಿಸುತ್ತೇನೆ ಎಂದು ಅವರು ಮತದಾರರಿಗೆ ಭರವಸೆ ನೀಡಿದರು.
ಕಾಂಗ್ರೆಸ್ ಸರ್ಕಾರ ಬಜರಂಗದಳವನ್ನು ನಿಷೇದಿಸುವ ಮಾತುಗಳನ್ನಾಡಿರುವುದು ಬಹುಜನರ ಭಾವನೆಗಳಿಗೆ ಘಾಸಿಯುಂಟು ಮಾಡಿದೆ. ಈ ತಪ್ಪನ್ನು ಸರಿಪಡಿಸಿಕೊಂಡು ಕಾಂಗ್ರೆಸ್ ಪಕ್ಷ ಜನರ ಕ್ಷಮೆ ಕೇಳಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು. ಬಹುಸಂಖ್ಯಾತರು ರೊಚ್ಚಿಗೆದ್ದರೆ ಕಾಂಗ್ರೆಸ್ ಕಸದಬುಟ್ಟಿ ಸೇರುತ್ತದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷೆ ಕಾವೇರಿ ಕೇದಾರನಾಥ್ ಸೇರಿದಂತೆ ಬಿಜೆಪಿಯ ನೂರಾರು ಕಾರ್ಯಕರ್ತರು ಸಚಿವ ಅಶ್ವತ್ಥ ನಾರಾಯಣ ಅವರಿಗೆ ಸಾಥ್ ನೀಡಿ ಪ್ರಚಾರದಲ್ಲಿ ಭಾಗಿಯಾದರು.

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣರವರು ಮಲ್ಲೇಶ್ವರದಲ್ಲಿ ಪ್ರಚಾರ ನಡೆಸಿ ಮತಯಾಚನೆ ಮಾಡಿದರು. ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.