ಸಚಿವ ಮಿಶ್ರಾ ವಜಾಕ್ಕೆ ರಾಷ್ಟ್ರಪತಿಗೆ ಕಾಂಗ್ರೆಸ್ ಮನವಿ

ನವದೆಹಲಿ,ಅ.೧೩- ಉತ್ತರಪ್ರದೇಶದ ಲಖೀಂಪುರ ಖೇರಿಯಲ್ಲಿ ರೈತರ ಮೇಲಿನ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕಾಂಗ್ರೆಸ್ ನಿಯೋಗ ಮನವಿ ಸಲ್ಲಿಸಿದೆ.
ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸುಪ್ರೀಂಕೋರ್ಟ್ ಹಾಲಿ ನ್ಯಾಯಾಧೀಶರಿಂದ ಸ್ವತಂತ್ರ ತನಿಖೆ ನಡೆಸುವಂತೆಯೂ ರಾಹುಲ್ ಗಾಂಧಿ ನೇತೃತ್ವದ ನಿಯೋಗ ಮನವಿ ರಾಷ್ಟ್ರಪತಿ ಅವರಿಗೆ ಮಾಡಿದೆ.
ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕರಾದ ಗುಲಾಮ್ ನಬಿ ಆಜಾದ್, ಎ.ಕೆ ಆಂಟನಿ, ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕ ಗಾಂಧಿ ಮತ್ತು ಕೆಸಿ ವೇಣುಗೋಪಾಲ್ ನೇತೃತ್ವದ ಏಳು ಮಂದಿ ನಿಯೋಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆ.
ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಉತ್ತರಪ್ರದೇಶದಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಯುತ ತನಿಖೆ ನಡೆಯಬೇಕಾದರೆ ಕೇಂದ್ರ ಗೃಹ ಖಾತೆ ಸಚಿವ ಅದೇ ಮಿಶ್ರ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.
ರೈತರ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿರುವ ಘಟನೆ ಅತ್ಯಂತ ಖಂಡನಾರ್ಹ. ಆರೋಪಿಯ ತಂದೆ ಕೇಂದ್ರ ಗೃಹ ಖಾತೆ ಸಚಿವರಾಗಿರುವ ಹಿನ್ನೆಲೆಯಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆ ನಡೆಸಲು ಸಾಧ್ಯವಿಲ್ಲ ಹೀಗಾಗಿ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಮನವಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಮಾತನಾಡಿ, ರೈತರ ಮೇಲಿನ ದಾಂದಲೆ ಮತ್ತು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.

ಅಮಾಯಕರನ್ನು ಹತ್ಯೆ ಮಾಡುವ ಮೂಲಕ ಉತ್ತರ ಪ್ರದೇಶ ಸರ್ಕಾರ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಅವರು ಇದೇ ಸಂದರ್ಭದಲ್ಲಿ ದೂರಿದರು.

ಈ ವಿಷಯದ ಕುರಿತು ಸರ್ಕಾರದ ಜೊತೆ ಮಾತುಕತೆ ನಡೆಸುವುದಾಗಿ ರಾಷ್ಟ್ರಪತಿಗಳು ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು.

ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಇಬ್ಬರು ನ್ಯಾಯಾಧೀಶರಿಂದ ತನಿಖೆ ನಡೆಸುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಅಕ್ಟೋಬರ್ ೩ರಂದು ಉತ್ತರಪ್ರದೇಶದ ಲಖೀಂಪುರ ಖೇರಿಯಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿಸಿದ ಹಿನ್ನೆಲೆಯಲ್ಲಿ ನಾಲ್ಕು ಮಂದಿ ರೈತರು ಓರ್ವ ಪತ್ರಕರ್ತ ಮತ್ತು ಮೂರು ನಾಗರಿಕರು ಸೇರಿದಂತೆ ೮ ಮಂದಿ ಮೃತಪಟ್ಟ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಲಾಗಿದೆ.

ಕಳೆದ ಶನಿವಾರ ಆಶಿಶ್ ಮಿಶ್ರಾ ಅವರನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ವಜಾ ಮಾಡದಿದ್ದರೆ ಉತ್ತರಪ್ರದೇಶ ಸೇರಿದಂತೆ ದೇಶಾದ್ಯಂತ ಹೋರಾಟ ಮುಂದುವರೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಕೆಲವೇ ತಿಂಗಳಲ್ಲಿ ಉತ್ತರ ಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಕೇಂದ್ರ ಸಚಿವ ಅಜಯ್ ಮಿಶ್ರ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಹಿಂದೆ-ಮುಂದೆ ನೋಡುತ್ತದೆ.

ಒಂದು ವೇಳೆ ಕ್ರಮಕೈಗೊಂಡರೆ ಬ್ರಾಹ್ಮಣ ಸಮುದಾಯದ ಮತಗಳು ಕೈತಪ್ಪುವ ಭೀತಿಯಲ್ಲಿ ಬಿಜೆಪಿ ನಾಯಕರು ಇದ್ದಾರೆ