ಸಡಗರ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸೋಣ- ದಿವ್ಯಪ್ರಭು ಜಿ.ಆರ್.ಜೆ.

ಸಂಜೆವಾಣಿ ವಾರ್ತೆ
ಚಿತ್ರದುರ್ಗ ಆ. ೮;   ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಆ. 15 ರಂದು ಜಿಲ್ಲೆಯಲ್ಲಿ ಸಡಗರ, ಸಂಭ್ರಮದೊಂದಿಗೆ ಹಬ್ಬದ ವಾತಾವರಣದಲ್ಲಿ ವಿಜೃಂಭಣೆಯಿಂದ ಆಚರಿಸೋಣ, ಈ ನಿಟ್ಟಿನಲ್ಲಿ ಅಧಿಕಾರಿಗಳು, ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಸೂಚನೆ ನೀಡಿದರು.ಜಿಲ್ಲಾ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕುರಿತಂತೆ ಸಿದ್ಧತೆಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಭಾರತದ ಸ್ವಾತಂತ್ರ್ಯ ದಿನಾಚರಣೆ ಎಂಬುದು ನಮ್ಮ ದೇಶದ ರಾಷ್ಟ್ರೀಯ ಹಬ್ಬ, ಇದರಲ್ಲಿ ಸಾರ್ವಜನಿಕರು, ಎಲ್ಲ ಅಧಿಕಾರಿಗಳು ಸಕ್ರಿಯವಾಗಿ, ಸಂತೋಷದಿಂದ ಹೆಮ್ಮೆಯಿಂದ ಭಾಗವಹಿಸೋಣ, ಜವಾಬ್ದಾರಿಯುತ ಭಾರತೀಯ ಪ್ರಜೆಯಾಗಿ ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಹಬ್ಬದಲ್ಲಿ ಪಾಲ್ಗೊಂಡು, ಸ್ವಾತಂತ್ರ್ಯದ ಮಹತ್ವವನ್ನು ಅರಿತುಕೊಳ್ಳುವಂತಾಗಬೇಕು ಎಂದರು.ಆ. 15 ರಂದು ಬೆಳಿಗ್ಗೆ 08 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಲಿದ್ದು, ಬೆಳಿಗ್ಗೆ 09 ಗಂಟೆಗೆ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ಆಯೋಜಿಸಲಾಗುವುದು.  ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು.  ಸಮಾರಂಭಕ್ಕೆ ಶಿಷ್ಟಾಚಾರದಂತೆ ಎಲ್ಲ ಗಣ್ಯಮಾನ್ಯರು, ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು, ವೇದಿಕೆ ನಿರ್ಮಾಣ, ಅಲಂಕಾರ ಸಮರ್ಪಕವಾಗಿರಬೇಕು.  ಸಮಾರಂಭದ ಪ್ರಮುಖ ಆಕರ್ಷಣೆಯಾಗಿರುವ ಪರೇಡ್ ನಲ್ಲಿ ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕದಳ, ಸೇವಾದಳ, ಎನ್‍ಸಿಸಿ ಸೇರಿದಂತೆ ಸುಮಾರು 25 ಕ್ಕೂ ಹೆಚ್ಚು ತಂಡಗಳು ಭಾಗವಹಿಸಲಿದ್ದು, ಖಾಸಗಿ ಹಾಗೂ ಸರ್ಕಾರಿ ಶಾಲೆಗಳ ಮಕ್ಕಳು ಕೂಡ ಪರೇಡ್ ತಂಡದಲ್ಲಿ ಪಾಲ್ಗೊಳ್ಳಲಿವೆ.  ಈ ತಂಡಗಳಿಗೆ ಕನಿಷ್ಟ ಮೂರು ದಿನಗಳ ಕಾಲ ತರಬೇತಿ ನೀಡಬೇಕು, ತರಬೇತಿಗೆ ಹಾಜರಾಗುವ ಮಕ್ಕಳಿಗೆ ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮ ಸಂದರ್ಭದಲ್ಲಿ ಏರ್ಪಡಿಸುವ ಸಾಂಸ್ಕøತಿಕ ಕಾರ್ಯಕ್ರಮಗಳು ಅರ್ಥಪೂರ್ಣವಾಗಿರಬೇಕು. ಎಲ್ಲ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ, ಪ್ರತಿಯೊಂದು ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಕೈಗೊಳ್ಳಬೇಕು.  ಎಲ್ಲ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆಯ ಜಿಲ್ಲಾ ಮಟ್ಟದ ಸಮಾರಂಭದಲ್ಲಿ ಪಾಲ್ಗೊಳ್ಳಬೇಕು, ಗೈರು ಹಾಜರಾಗುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು, ಈ ನಿಟ್ಟಿನಲ್ಲಿ ಕಾರ್ಯಕ್ರಮ ಸ್ಥಳದಲ್ಲಿ ಹಾಜರಾತಿ ಪಡೆಯುವ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯನ್ನು ಯಶಸ್ವಿಯಾಗಿ ಆಯೋಜಿಸಲು ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ ವೇದಿಕೆ, ಸ್ವಾಗತ, ಸಾಂಸ್ಕøತಿಕ ಸೇರಿದಂತೆ ಹಲವು ಉಪಸಮಿತಿಗಳನ್ನು ರಚಿಸಲಾಗಿದ್ದು, ಅದಕ್ಕೆ ಅನುಗುಣವಾಗಿ ಆಯಾ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಬೇಕು.  ಜನಪ್ರತಿನಿಧಿಗಳು, ಗಣ್ಯರು, ಮಾಧ್ಯಮದವರು ಸೇರಿದಂತೆ ಎಲ್ಲರಿಗೂ ಸಮರ್ಪಕವಾಗಿ ಆಸನ ವ್ಯವಸ್ಥೆಯನ್ನು ಕಲ್ಪಿಸಬೇಕು ಶಾಲಾ ಮಕ್ಕಳಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಿಹಿ ತಿನಿಸು ವಿತರಿಸುವಂತಾಗಲು, ಆ. 14 ರಂದೇ ಆಯಾ ಶಾಲೆಗಳಿಗೆ ಸಿಹಿ ತಿನಿಸು ತಲುಪಬೇಕು.  ನಗರದ ಪ್ರಮುಖ ವೃತ್ತಗಳು, ಸರ್ಕಾರಿ ಕಟ್ಟಡಗಳು ವಿದ್ಯುತ್ ದೀಪಾಲಂಕಾರ ಮಾಡಬೇಕು.  ವಿವಿಧ ಇಲಾಖೆಗಳ ಕಚೇರಿಗಳಲ್ಲೂ ಕೈಗೊಳ್ಳಲಾಗುವ ರಾಷ್ಟ್ರ ಧ್ವಜಾರೋಹಣ ಸಂದರ್ಭದಲ್ಲಿ ಆರೋಹಣ ಹಾಗೂ ಅವರೋಹಣಕ್ಕೆ ಸರ್ಕಾರ ನಿಗದಿಪಡಿಸಿರುವ ನಿಯಮಗಳನ್ನು ಸರಿಯಾಗಿ  ಪಾಲಿಸಬೇಕು.  ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ. 15 ರಂದು ಬೆಳಿಗ್ಗೆ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಹಾಗೂ ಅಂದು ಸಂಜೆ ನಗರದ ತ.ರಾ.ಸು ರಂಗಮಂದಿರದಲ್ಲಿ ಏರ್ಪಡಿಸಲಾಗುವ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಸಮಿತಿಯು ಮೊದಲೇ ಸ್ಕ್ರೀನಿಂಗ್‍ಗೆ ಒಳಪಡಿಸಿ, ಅರ್ಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು.  ಎಲ್ಲ ಅಧಿಕಾರಿಗಳು ತಮ್ಮ ಕುಟುಂಬ ಸಮೇತ ತ.ರಾ.ಸು. ರಂಗಮಂದಿರದಲ್ಲಿ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ ಆನಂದಿಸುವಂತಾಗಬೇಕು ಎಂದು ಹೇಳಿದರು.ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಆಹಾರ ಇಲಾಖೆ ಜಂಟಿನಿರ್ದೇಶಕ ಮಧುಸೂಧನ್, ಡಿಡಿಪಿಐ ರವಿಶಂಕರ್ ರೆಡ್ಡಿ, ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕ ಬಿ. ಆನಂದ್, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಅಧಿಕಾರಿ ಗಣೇಶ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.