ಸದಾಶಿವ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ


ಹಿರಿಯೂರು.ಅ.೨೦: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿ ಸುಮಾರು ಎಂಟು ವರ್ಷಗಳೇ ಕಳೆದಿದ್ದರೂ ಈ ವರದಿಯನ್ನು ಜಾರಿಗೊಳಿಸುವಲ್ಲಿ ಆಳುವ ಸರ್ಕಾರಗಳು ವಿಫಲವಾಗಿವೆ ಎಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷ ರಾಮಚಂದ್ರ ಹೇಳಿದರು. ನಗರದ ತಾಲ್ಲೂಕು ಕಚೇರಿ ಮುಂಭಾಗದ ಆವರಣದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಮ್ಮಿಕೊಳ್ಳಲಾಗಿದ್ದ ಧರಣ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ್ ಮಾತನಾಡಿ ಶತ ಶತಮಾನಗಳಿಂದಲೂ ದೌರ್ಜನ್ಯ, ದಬ್ಬಾಳಿಕೆ, ಶೋಷಣೆಯನ್ನು ಅನುಭವಿಸಿಕೊಂಡು ಬರುತ್ತಿದ್ದರೂ ದಲಿತರ ಪರ ಯಾರಿಗೂ ಕಾಳಜಿಯಿಲ್ಲ. ಹಾಗಾಗಿ ದೇಶಕ್ಕೆ ಸ್ವಾತಂತ್ರ ಬಂದು ಎಪ್ಪತ್ತು ವರ್ಷಗಳಾಗಿದ್ದರೂ ಇನ್ನು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು. ಸರ್ಕಾರ ಕೊಡಲೇ ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಮೂಲಕ ನಮ್ಮ ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಚಂದ್ರಪ್ಪಘಾಟ್, ಅಲ್ಪಸಂಖ್ಯಾತರ ಅಧ್ಯಕ್ಷರಾದ ಮೋಹ್ಸೀನ್, ತಾಲ್ಲೂಕು ಉಪಾಧ್ಯಕ್ಷರಾದ ಸಿಕಂದರ್, ತಾಲ್ಲೂಕು ಕಾರ್ಯಾಧ್ಯಕ್ಷರಾದ ನರಸಿಂಹಸ್ವಾಮಿ, ಯುವ ಘಟಕದ ಅಧ್ಯಕ್ಷರಾದ ರಾಘವೇಂದ್ರ, ಯುವ ಘಟಕದ ಅಧ್ಯಕ್ಷ ಸಾಬ್‌ಜಾನ್ ಹಾಗೂ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
-ಫೋಟೊ-೧೩