ಸಫಾಯಿ ಕರ್ಮಚಾರಿಗಳ ಮಕ್ಕಳ ಶಿಕ್ಷಣ-ಆರೋಗ್ಯ-ಕೌಶಲ್ಯಾಭಿವೃದ್ದಿಗೆ ಒತ್ತು :ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಕೋಟೆ

ವಿಜಯಪುರ:ಫೆ.24: ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ವೇತನ ಪಾವತಿಯಾಗಬೇಕು. ವೇತನದಲ್ಲಿ ಇಎಸ್‍ಐ, ಕಡಿತಗೊಂಡಿರುವ ಮಾಹಿತಿಯನ್ನು ಸಹ ಪ್ರತಿ ತಿಂಗಳು ಪೌರಕಾರ್ಮಿಕರಿಗೆ ಒದಗಿಸುವಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಕೋಟೆ ಹೇಳಿದರು.
ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡ ಪೌರಕಾರ್ಮಿಕರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೌರಕಾರ್ಮಿಕರಿಗೆ ಪ್ರತಿ ತಿಂಗಳು ಆರೋಗ್ಯ ತಪಾಸಣೆಗೊಳಪಡಿಸಬೇಕು. ಪೌರಕಾರ್ಮಿಕರನ್ನು ಅಧ್ಯಯನಕ್ಕಾಗಿ ವಿದೇಶ ಪ್ರವಾಸ ಸಿಂಗಪೂರಕ್ಕೆ ಕಳುಹಿಸಿ ಅಲ್ಲಿನ ಸ್ವಚ್ಛತೆ ಕುರಿತು ಪೌರಕಾರ್ಮಿಕರಲ್ಲಿ ಅರಿವು ಮೂಡಿಸಿ, ಆ ಪದ್ಧತಿಯನ್ನು ಇಲ್ಲಿ ಅಳವಡಿಸಿಕೊಳ್ಳುವ ಕುರಿತಂತೆ ಈಗಾಗಲೇ ಸರ್ಕಾರದೊಂದಿಗೆ ಚರ್ಚಿಸಲಾಗಿದ್ದು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ವಿದೇಶ ಪ್ರವಾಸಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
24/7 ರಡಿ ಪೌರಕಾರ್ಮಿಕರ ಆರೋಗ್ಯ ಮತ್ತು ಅವರ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು. ನೇರ ಪಾವತಿದಾರ ನೇಮಕಾತಿಯಲ್ಲಿ ಪ್ರಥಮ ಆದ್ಯತೆ ನೀಡಬೇಕು. ಹಂತ ಹಂತವಾಗಿ ಎಲ್ಲ ಕಾರ್ಮಿಕರನ್ನು ಖಾಯಂಗೊಳಿಸಲು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೇರಿದಂತೆ ಸರ್ಕಾರದ ಹಂತದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪೌರ ಕಾರ್ಮಿಕರ ಜಿಲ್ಲಾ ಅಧ್ಯಕ್ಷ ಲಕ್ಷ್ಮಣ ಹಂದ್ರಾಳ ಅವರು ಮಾತನಾಡಿ, ಪೌರ ಕಾರ್ಮಿಕರಿಗೆ ಆರೋಗ್ಯ ಹಿತದೃಷ್ಟಿಯಿಂದ ರಜೆ ಸೌಲಭ್ಯ ಒದಗಿಸಬೇಕು. ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು. ನೇರ ಪಾವತಿದಾರ ಕಾರ್ಮಿಕರನ್ನು ಖಾಯಂಗೊಳಿಸಬೇಕು. ಕೆಲಸದ ಸಮಯದಲ್ಲಿ ವಿಶ್ರಾಂತಿಗಾಗಿ ಕೊಠಡಿ ನಿರ್ಮಾಣಕ್ಕೆ ಅವರು ಮನವಿ ಮಾಡಿಕೊಂಡರು.
ಪೌರಕಾರ್ಮಿಕರಿಗೆ ಯಾವುದೇ ಸಮಸ್ಯೆಗಳಿದ್ದಲ್ಲಿ ತಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಬೇಕು. ತಮ್ಮ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದ ಅಧಿಕಾರಿ, ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಜಿಲ್ಲಾ ಮಟ್ಟದಲ್ಲಿ ಪರಿಹಾರವಾಗದಿದ್ದಲ್ಲಿ ಸರ್ಕಾರ ಮಟ್ಟದಲ್ಲಿ ಚರ್ಚಿಸಿ ಪೌರಕಾರ್ಮಿಕರ ಎಲ್ಲ ಸಮಸ್ಯೆಗಳ ಪರಿಹಾರ ಕ್ರಮ ವಹಿಸಲಾಗುವುದು. ಪೌರ ಕಾರ್ಮಿಕರಿಗೆ ನಿಯಮಿತವಾಗಿ ಜಾಗೃತಿ ಕಾರ್ಯಾಗಾರಗಳನ್ನು ಏರ್ಪಡಿಸುವ ಮೂಲಕ ಅವರ ಸಮಸ್ಯೆಗಳಿಗೆ ಪರಿಹಾರ ದೊರಕಿಸಲು ಪ್ರಯತ್ನಿಸಬೇಕು ಎಂದು ಎಂದು ಆಯೋಗದ ಅಧ್ಯಕ್ಷರು ಸಲಹೆ ನೀಡಿದರು.
ಸಂವಾದ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಹಾಸಿಂಪೀರ ವಾಲೀಕಾರ, ಸಮಾಜ ಇಲಾಖೆ ಉಪನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ನಗರಾಭಿವೃದ್ದಿ ಕೋಶಧ ಯೋಜನಾ ನಿರ್ದೇಶಕ ರಾಜಶೇಖರ ಡಂಬಳ ಸೇರಿದಂತೆ ಇತರರು ಉಪಸ್ಥಿತರಿದ್ದರು.