ಸಮಗ್ರ ಅಭಿವೃದ್ಧಿಗೆ ವಿಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಿ


ದಾವಣಗೆರೆ,ಡಿ.03: ಗ್ರಾಮ ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಸಮಗ್ರ ಅಭಿವೃದ್ಧಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಅವರಿಗೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಮತ ನೀಡಬೇಕೆಂದು ಜಿಲ್ಲಾ ಉಸ್ತುವಾರಿ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಮನವಿ ಮಾಡಿದರು.ನಗರದ ಜಿಎಂಐಟಿ ಅತಿಥಿಗೃಹದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆ-ಚಿತ್ರದುರ್ಗ ವಿಧಾನ ಪರಿಷತ್ ಕ್ಷೇತ್ರದ ವ್ಯಾಪ್ತಿಗೆ ಬರುವ ದಾವಣಗೆರೆ ಜಿಲ್ಲೆಯಲ್ಲಿ 1,511 ಜನ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳಿದ್ದು, ಎಲ್ಲರೂ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಅವರಿಗೆ ಮತ ನೀಡಬೇಕೆಂದು ಕೋರಿದರು.ಕಾಂಗ್ರೆಸ್ ಅವಧಿಯಲ್ಲಿ ಗ್ರಾಮ ಪಂಚಾಯಿತಿಗಳಿಗೆ ಕೇವಲ 10 ಲಕ್ಷ ರೂ. ಅನುದಾನ ಬರುತಿತ್ತು. ಆದರೆ, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಸದೃಢ ಗ್ರಾಮ ಪಂಚಾಯಿತಿಗಳನ್ನಾಗಿ ರೂಪಿಸಲು ಪ್ರತಿ ಗ್ರಾಪಂಗೆ 30ರಿಂದ 80 ಲಕ್ಷ ರೂ. ಅನುದಾನ ನೀಡುತ್ತಿದ್ದಾರೆ. ಅಲ್ಲದೆ, ನಾನು ಗ್ರಾಪಂಗಳಿಗೆ ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ್ದೇನೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಚಿವರು, ಶಾಸಕರಿಗೂ ಇಲ್ಲದ ಚೆಕ್‌ಗೆ ಸಹಿ ಮಾಡುವ ಅಧಿಕಾರವನ್ನು ಗ್ರಾಪಂ ಅಧ್ಯಕ್ಷರಿಗೆ ನೀಡುವ ಮೂಲಕ ಅವರಿಗೆ ಶಕ್ತಿ ತುಂಬಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಕಾಂಗ್ರೆಸ್ ಅವಧಿಯಲ್ಲಿ ಗ್ರಾಪಂ ಸದಸ್ಯರಿಗೆ ಇದ್ದ 250 ರೂ. ಗೌರವ ಧನವನ್ನು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾದ ಮೇಲೆ 1 ಸಾವಿರ ರೂ.ಗೆ ಹೆಚ್ಚಳ ಮಾಡಿದ್ದು, ಮುಂದೆ ಈ ಗೌರವಧನವನ್ನು 3 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದರು.ಗ್ರಾಮ ಪಂಚಾಯಿತಿಗಳಲ್ಲಿ ಸುಲಭವಾಗಿ ಗ್ರಾಮೀಣ ಪ್ರದೇಶದ ಜನರಿಗೆ ಸೌಲಭ್ಯ ಸಿಗಬೇಕೆಂಬ ಕಾರಣಕ್ಕೆ ರಾಜ್ಯದಲ್ಲಿ ಗ್ರಾಪಂ ಮಟ್ಟದಲ್ಲಿ 7500 ಜನಮುಖಿ ಕೇಂದ್ರಗಳನ್ನು ತೆರೆಯಲಾಗಿದೆ. ಕೃಷಿಕರಿಗೆ ಕೃಷಿ ಸಮ್ಮಾನ್ ಯೋಜನೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಸದೃಢ ಗ್ರಾಪಂ ನಿರ್ಮಿಸಲು ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ಶ್ರಮಿಸುತ್ತಿವೆ. ಹೀಗಾಗಿ ಸ್ಥಳೀಯ ಸಂಸ್ಥೆಗಳಿAದ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಬೇಕೆAದು ಮನವಿ ಮಾಡಿದರು.ಸುದ್ದಿಗೋಷ್ಠಿಯಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಎಸ್.ವಿ.ರಾಮಚಂದ್ರ, ಪ್ರೊ.ಎನ್.ಲಿಂಗಣ್ಣ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್ ಹನಗನವಾಡಿ, ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್, ಪಾಲಿಕೆ ಮೇಯರ್ ಎಸ್.ಟಿ.ವೀರೇಶ್, ದೂಡಾ ಅಧ್ಯಕ್ಷ ದೇವರಮನಿ ಶಿವಕುಮಾರ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ.ಎ.ಎಚ್.ಶಿವಯೋಗಿಸ್ವಾಮಿ, ಮಾಜಿ ಶಾಸಕ ಬಸವರಾಜ ನಾಯ್ಕ, ಪಕ್ಷದ ಮುಖಂಡರಾದ ಬಿ.ಎಸ್.ಜಗದೀಶ್, ಡಿ.ಎಸ್.ಶವಶಂಕರ್, ಎಚ್.ಪಿ.ವಿಶ್ವಾಸ್ ಮತ್ತಿತರರು ಹಾಜರಿದ್ದರು.

——