ಸಮಸ್ಯೆಗಳ ಕುರಿತು ಧ್ವನಿ ಎತ್ತಲಿ: ಪಾಟೀಲ


ಲಕ್ಷ್ಮೇಶ್ವರ, ಡಿ 3: ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಚುನಾವಣೆಯಲ್ಲಿ ಆಯ್ಕೆಯಾಗುವ ವಿಧಾನಪರಿಷತ್ತಿನ ಸದಸ್ಯರುಗಳು ಸ್ಥಳೀಯ ಸಂಸ್ಥೆಗಳ ಹಿತವನ್ನು ಕಡೆಗಣಿಸಿ ಕೇವಲ ರಾಜ್ಯ ರಾಜಕೀಯದಲ್ಲಿ ತೊಡಗಿಸಿಕೊಂಡು ನಿರ್ಲಕ್ಷಿಸುತ್ತಿದ್ದಾರೆ ಎಂದು ಗೋನಾಳ ಗ್ರಾ.ಪಂ ಸದಸ್ಯ ಪದ್ಮರಾಜ್ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅವರು ಹೇಳಿಕೆಯೊಂದನ್ನು ನೀಡಿ ಚುನಾವಣೆಯಲ್ಲಿ ಗ್ರಾಮ ಪಂಚಾಯಿತಿ, ತಾಲೂಕ ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಪುರಸಭೆ, ಪಟ್ಟಣ ಪಂಚಾಯಿತಿ, ನಗರಸಭೆ, ಮಹಾನಗರ ಪಾಲಿಕೆಗಳ ಸದಸ್ಯರ ಮತಪಡೆದು ವಿಧಾನಪರಿಷತ್ತಿಗೆ ಆಯ್ಕೆಯಾಗುವ ಜನಪ್ರತಿನಿಧಿಗಳು ಸ್ಥಳೀಯ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಧ್ವನಿ ಎತ್ತಬೇಕು. ಕೇವಲ ಮಸೂದೆಗಳ ಗೆಲುವಿಗೆ ಮತ ಹಾಕುವುದಷ್ಟೇ ಮೀಸಲಾಗಿರುವುದು ಸ್ಥಳೀಯ ಸಂಸ್ಥೆಗಳಿಗೆ ಅನ್ಯಾಯವಾಗುತ್ತಿದೆ.
ಗ್ರಾಮ ಪಂಚಾಯತಿಗಳು ಆರ್ಥಿಕವಾಗಿ ಸಮಸ್ಯೆಗಳನ್ನು ಎದುರಿಸುತ್ತಿವೆ. ಗ್ರಾಮಪಂಚಾಯಿತಿಗಳಿಗೆ ಅಭಿವೃದ್ಧಿ ಅನುದಾನವಿಲ್ಲದೆ ನಾಗರಿಕ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸ್ಥಳೀಯ ಸಂಸ್ಥೆಗಳು ಅದರಲ್ಲೂ ಗ್ರಾಮಪಂಚಾಯಿತಿಗಳು ಹೆಣಗಾಡಬೇಕಾಗಿದೆ. ಆದ್ದರಿಂದ ಚುನಾಯಿತ ಪ್ರತಿನಿಧಿಗಳು ಗ್ರಾಮಪಂಚಾಯಿತಿಗಳಿಗೆ ಪ್ರತಿ ವರ್ಷ ಕನಿಷ್ಠ ಒಂದು ಕೋಟಿ ಅನುದಾನವನ್ನು ಅಭಿವೃದ್ಧಿಗಾಗಿ ನೀಡುವಂತೆ ಸರ್ಕಾರದ ಮೇಲೆ ಒತ್ತಡ ತರಬೇಕು.
ಸ್ಥಳೀಯ ಸಂಸ್ಥೆಗಳಲ್ಲಿ ಪುರಸಭೆ, ಪಟ್ಟಣ ಪಂಚಾಯಿತಿ, ನಗರಸಭೆ, ಮಹಾನಗರ ಪಾಲಿಕೆಗಳಿಗೆ ಸರ್ಕಾರ ಪ್ರತಿವರ್ಷ ಕೋಟ್ಯಂತರ ರೂಪಾಯಿ ಅಭಿವೃದ್ಧಿಗೆ ಅನುದಾನ ನೀಡುತ್ತದೆ. ಅದೇ ರೀತಿ ಗ್ರಾಮ ಪಂಚಾಯಿತಿಗಳಿಗೂ ಅನುದಾನ ನೀಡಬೇಕು. ಅಂದರೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಚಲಾಯಿಸಿದ ಮತಕ್ಕೆ ಬೆಲೆ ಇರುತ್ತದೆ. ಈ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಯಿಂದ ಆಯ್ಕೆಯಾಗುವ ಎಲ್ಲ ಜನಪ್ರತಿನಿಧಿಗಳು ಅಧಿವೇಶನದಲ್ಲಿ ಈ ಬಗ್ಗೆ ಧ್ವನಿ ಎತ್ತಬೇಕು ಎಂದು ಒತ್ತಾಯಿಸಿದ್ದಾರೆ.