ಸಮಸ್ಯೆಗಳ ಮುಕ್ತ ಸಮಾಜ ನಿರ್ಮಾಣಕ್ಕೆ ದಿಟ್ಟ ಹೆಜ್ಜೆ ಜನತಾ ದರ್ಶನ ಕಾರ್ಯಕ್ರಮ:ಶಾಸಕ ವಿಠ್ಠಲ ಕಟಕದೊಂಡ

ವಿಜಯಪುರ ಸೆ.26: ಸಂವಿಧಾನದ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಯೋಜನೆಗಳ ಲಾಭ ದೊರಕಿಸಿ, ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಮೂಲಕ ಸಮಸ್ಯೆಗಳ ಮುಕ್ತ ಸಮಾಜ ನಿರ್ಮಾಣಕ್ಕೆ ದಿಟ್ಟ ಹೆಜ್ಜೆಯನ್ನಿಟ್ಟು ಆರಂಭಿಸಿದ ಜನತಾ ದರ್ಶನ ಕಾರ್ಯಕ್ರಮದ ಪ್ರತಿಯೊಬ್ಬರೂ ಸದುಪಯೋಗ ಪಡೆದುಕೊಂಡು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಕೊಳ್ಳುವಂತೆ ನಾಗಠಾಣ ಮತಕ್ಷೇತ್ರದ ಶಾಸಕರಾದ ವಿಠ್ಠಲ ಕಟಕದೊಂಡ ಕರೆ ನೀಡಿದರು.
ಜಿಲ್ಲಾಡಳಿತದ ವತಿಯಿಂದ ಸೋಮವಾರದಂದು ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ ಜನತಾ ದರ್ಶನಕ್ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಸಮಾಜದ ಕಟ್ಟ ಕಡೆಯ ವ್ಯಕ್ತಿ ಸಮಸ್ಯೆಗೆ ಪರಿಹಾರ ದೊರಕಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿಶೇಷ ಕಾಳಜಿಯಿಂದ ರಾಜ್ಯದಾದ್ಯಂತ ಇಂದು ಏಕಕಾಲದಲ್ಲಿ ಜನತಾದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಟವನ್ನು ತಪ್ಪಿಸಿ ಒಂದೇ ವೇದಿಕೆಯಲ್ಲಿ ಸಮಸ್ಯೆಗೆ ಪರಿಹಾರ ಪಡೆಯುವ ನಿಟ್ಟಿನಲ್ಲಿ ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ನಡೆಯುವ ಜನತಾ ದರ್ಶನದಲ್ಲಿ ಹೆಚ್ಚಿನ ಜನರು ಭಾಗವಹಿಸಿ,ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಅವರು ಮಾತನಾಡಿ, ಸಮಾಜದ ಪ್ರತಿಯೊಂದು ಪ್ರಜೆ ನೆಮ್ಮದಿಯಿಂದ ಬದುಕಲು ಸಂವಿಧಾನದ ಆಶಯದಂತೆ ಸರ್ಕಾರ ಹಲವು ಯೋಜನೆ- ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಈ ಯೋಜನೆಗಳ ಲಾಭ ಪ್ರತಿಯೊಬ್ಬ ಕಟ್ಟೆಕಡೆಯ ವ್ಯಕ್ತಿಗೆ ದೊರಕಿಸುವ ನಿಟ್ಟಿನಲ್ಲಿ ಹಾಗೂ ಗ್ರಾಮ ಮಟ್ಟದ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ಕಲ್ಪಿಸಲು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಜಿಲ್ಲಾ ಮಟ್ಟದಲ್ಲಿಯೇ ಇತ್ಯರ್ಥವಾಗಬೇಕಾದ ಸಮಸ್ಯೆ-ದೂರುಗಳನ್ನು ಜಿಲ್ಲಾ ಹಂತದಲ್ಲಿಯೇ ಬಗೆ ಹರಿಸುವ ನಿಟ್ಟಿನಲ್ಲಿ ಈ ಜನತಾ ದರ್ಶನ ಅತ್ಯಂತ ಸೂಕ್ತವಾದ ಕಾರ್ಯಕ್ರಮವಾಗಿದೆ. ಜನರ ಹಲವು ಸಮಸ್ಯೆಗಳನ್ನು ಬಗೆ ಹರಿಸುವುದೇ ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ಜನತಾ ದರ್ಶನ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಅರ್ಜಿಗಳಿಗೆ ಅಧಿಕಾರಿಗಳು ಮಾನವೀಯತೆ ನೆಲೆಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಪರಿಹಾರ ಕಲ್ಪಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಇಲಾಖೆಗೆ ನಿತ್ಯ ನೂರಾರು ದೂರುಗಳು ಬರುತ್ತವೆ. ಜಿಲ್ಲಾಧಿಕಾರಿ ಕಚೇರಿಗೆ ವಿವಿಧ ಇಲಾಖೆಯ ಅಹವಾಲುಗಳು ಬರುತ್ತವೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಹಲವು ಸೇವೆ- ಸಮಸ್ಯೆಗಳಿಗೆ ಸ್ಪಂದಿಸಿ ನಿಗದಿತ ಅವಧಿಯಲ್ಲಿ ಸಾರ್ವಜನಿಕರಿಗೆ ಸೇವೆ ತಲುಪಿಸಲು ಈ ಜನತಾ ದರ್ಶನ ಕಾರ್ಯಕ್ರಮ ಅತ್ಯುಪಯುಕ್ತವಾಗಿದೆ.
ಮುಖ್ಯಮಂತ್ರಿಗಳ ನಿರ್ದೇಶನದಂತೆ ಒಂದೇ ವೇದಿಕೆಯಲ್ಲಿ ಹಲವಾರು ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಜನತಾ ದರ್ಶನ ಕಾರ್ಯಕ್ರಮವನ್ನು ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರತಿ ತಿಂಗಳು ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹಾಗೂ ಪ್ರತಿ ಹದಿನೈದು ದಿನಗಳಿಗೊಮ್ಮೆ ತಾಲೂಕಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜನತಾದರ್ಶನ ಕಾರ್ಯಕ್ರಮ ಹಮ್ಮಿಕೊಂಡು ಜಿಲ್ಲಾ ಮಟ್ಟದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ, ಪ್ರತಿಯೊಂದು ಸಮಸ್ಯೆಗಳಿಗೆ ದೂರದ ಬೆಂಗಳೂರಿಗೆ ಹೋಗುವುದನ್ನು ತಪ್ಪಿಸಿ ಸ್ಥಳೀಯ ಮಟ್ಟದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವನೆ ಅವರು ಮಾತನಾಡಿ, ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದು, ಸಮಸ್ಯೆಗಳಿಗೆ ಸ್ಪಂದಿಸಲಿದ್ದು, ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ನಡೆಯುವ ಜನತಾ ದರ್ಶನ ಕಾರ್ಯಕ್ರಮದ ಸಾರ್ವಜನಿಕರು ಸದುಪಯೋಗ ಪಡೆದುಕೊಂಡು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಕೊಳ್ಳಬೇಕು ಎಂದು ಹೇಳಿದರು.
ಪೆÇಲೀಸ್ ಇಲಾಖೆಯು ಸಹ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಲಿದ್ದು, ಜಿಲ್ಲೆಯ ಪ್ರತಿಯೊಂದು ಪೆÇಲೀಸ್ ಠಾಣೆಗಳಲ್ಲಿ ಸ್ಪಂದನೆ ದೊರೆಯದಿದ್ದಾಗ ಪ್ರತಿ ಠಾಣೆಯಲ್ಲಿ ಠಾಣಾಧಿಕಾರಿಗಳೊಂದಿಗೆ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳು, ಡಿವೈಎಸ್‍ಪಿ ಸೇರಿದಂತೆ ಹಿರಿಯ ಅಧಿಕಾರಿಗಳ ಮೊಬೈಲ್ ಸಂಪರ್ಕ ಸಂಖ್ಯೆ ಪ್ರದರ್ಶಿಸಲಾಗಿದೆ. ತಮ್ಮ ದೂರುಗಳನ್ನು ದಾಖಲಿಸಲು ಸಮಸ್ಯೆಗಳು ಬಂದಲ್ಲಿ ನೇರವಾಗಿ ನನ್ನ ಮೊಬೈಲ್‍ಗೂ ಕರೆ ಮಾಡಿ ತಮ್ಮ ಸಮಸ್ಯೆಗಳನ್ನು ತಿಳಿಸಬಹುದು. ಅದರಂತೆ,ಪ್ರತಿ ಠಾಣೆಯಲ್ಲಿ ಕ್ಯೂಆರ್ ಕೋಡ್ ಲಭ್ಯವಿದ್ದು, ಈ ಕ್ಯೂಆರ್ ಕೋಡ್ ಮೂಲಕವೂ ಸಹ ಸಾರ್ವಜನಿಕರು ತಮ್ಮ ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ಹೇಳಿದರು.
ಹಲವು ಸಮಸ್ಯೆಗಳ ಕುರಿತು ಮನವಿ :ಜನತಾ ದರ್ಶನ ಕಾರ್ಯಕ್ರಮದಲ್ಲಿ ಮರಣ ಪತ್ರಾನುಸಾರ ಹೆಸರು ದಾಖಲು, ಜಮೀನಿನ ಸರ್ವೇ, ತಂದೆಯ ವಿಲ್ಲಾ ಪ್ರಕಾರ ದಾಖಲಾತಿ, ವೃದ್ಧಾಪ್ಯ ವೇತನ ಸೌಲಭ್ಯ, ಮಾಜಿ ಯೋಧರಿಗೆ ನಿವೇಶನ, ನ್ಯಾಯಬೆಲೆ ಅಂಗಡಿ ಮಂಜೂರಾತಿ, ಗೃಹಲಕ್ಷ್ಮೀ ಯೋಜನೆ ಸೌಲಭ್ಯ, ರಸ್ತೆ ನಿರ್ಮಾಣ, ಕಟ್ಟಡ ಕಾರ್ಮಿಕರಿಗೆ ಪಿಂಚಣಿ, ಸೇರಿದಂತೆ ಹಲವು ಸಮಸ್ಯೆಗಳ ಪರಿಹಾರ ಕಲ್ಪಿಸುವಂತೆ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ತೋಡಿಕೊಂಡರು.
ಮನಮಿಡಿದÀ ಮಾತು:72 ವರ್ಷದ ವೃದ್ಧ ಮಹಿಳೆ ತನ್ನ ಅಳಲನ್ನು ತೋಡಿಕೊಂಡು,ನನಗೆ ನನ್ನ ಮಕ್ಕಳು ನೋಡಿಕೊಳ್ಳುತ್ತಿಲ್ಲ, ಈ ವಯಸ್ಸಿನಲ್ಲಿಯೂ ನಾನೇ ದುಡಿದು ಜೀವನ ಸಾಗಿಸುತ್ತಿದ್ದೇನೆ. ತುಂಬ ಕಷ್ಟಕರವಾಗಿದೆ. ನನಗೆ ನ್ಯಾಯ ದೊರಕಿಸಿಕೊಡಿ ಎಂದು ಜಿಲ್ಲಾಧಿಕಾರಿಗಳ ಮುಂದೆ ತನ್ನ ಸಮಸ್ಯೆ ಮುಂದಿರಿಸಿದಾಗ, ಪ್ರತಿ ತಿಂಗಳು ಮಕ್ಕಳಿಂದ ಪರಿಹಾರ ಹಾಗೂ ಆಸ್ತಿಗಳಿದ್ದರೆ ಮಕ್ಕಳಿಂದ ಆ ಆಸ್ತಿ ಹಿಂಪಡೆದು, ಪಾಲಕರಿಗೆ ಮರಳಿಸಲು ಕಾನೂನಿನಲ್ಲಿ ಅವಕಾಶವಿರುವುದರಿಂದ ಹಿರಿಯ ನಾಗರಿಕರಿಗೆ ಮಕ್ಕಳು ನೋಡಿಕೊಳ್ಳದಿದ್ದಲ್ಲಿ ಉಪವಿಭಾಗಾಧಿಕಾರಿಗಳಿಗೆ ದೂರು ಸಲ್ಲಿಸಬೇಕು. ಈ ದೂರಿನನ್ವಯ ಉಪವಿಭಾಗಾಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ. ಈ ಸಮಸ್ಯೆಗೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿ ಸ್ವಯಂ ಪ್ರಕರಣ ದಾಖಲಿಸಿ ವೃದ್ಧೆಗೆ ಪರಿಹಾರ ಕಲ್ಪಿಸಲು ಸ್ಥಳದಲ್ಲಿಯೇ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದರು.
ಕಾರ್ಯಕ್ರಮದಲ್ಲಿ ದೇವರಹಿಪ್ಪರಗಿ ಶಾಸಕರಾದ ರಾಜುಗೌಡ ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಸಿಂಧೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಹೆಚ್ಚುವರಿ ಪೆÇಲೀಸ್ ಅಧೀಕ್ಷಕ ಶಂಕರ ಮಾರಿಹಾಳ, ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದಿನ ಸೌದಾಗರ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರೆ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ ಮೆಕ್ಕಳಕಿ, ವಿಜಯಪುರ ಉಪವಿಭಾಗಾಧಿಕಾರಿ ಬಸಣ್ಣಪ್ಪ ಕಲಶೆಟ್ಟಿ,ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ ಸೇರಿದಂತೆ ವಿವಿಧ ತಹಶೀಲ್ದಾರರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.