
ಬ್ಯಾಡಗಿ,ಮಾ.19: ಸರ್ಕಾರಿ ಕಚೇರಿಗಳಲ್ಲಿ ತಮ್ಮ ವಿವಿಧ ಕೆಲಸಗಳಿಗೆ ಸಾರ್ವಜನಿಕರು ದೂರದ ಹಳ್ಳಿಗಳಿಂದ ಪಟ್ಟಣಕ್ಕೆ ಬಂದು ತೊಂದರೆ ಪಡುವುದನ್ನು ತಪ್ಪಿಸುವ ಉದ್ದೇಶದಿಂದ ಗ್ರಾಮಗಳ ವ್ಯಾಪ್ತಿಯಲ್ಲಿ “ಜಿಲ್ಲಾಧಿಕಾರಿಯ ನಡೆ, ಹಳ್ಳಿಯ ಕಡೆ” ಕಾರ್ಯಕ್ರಮ ನಡೆಸುವ ಮೂಲಕ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ರಘುನಂದನಮೂರ್ತಿ ತಿಳಿಸಿದರು.
ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದಲ್ಲಿ “ಜಿಲ್ಲಾಧಿಕಾರಿ ನಡೆ, ಹಳ್ಳಿಯ ಕಡೆ* ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ಈ ಕಾರ್ಯಕ್ರಮದಿಂದ ಗ್ರಾಮೀಣ ಪ್ರದೇಶದಲ್ಲಿನ ಸಮಸ್ಯೆಗಳನ್ನು ಪ್ರತ್ಯಕ್ಷವಾಗಿ ಕಂಡು, ಪರಿಹಾರ ಒದಗಿಸಲು ಸಾಧ್ಯವಾಗುತ್ತದೆ. ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಜೊತೆಗಿದ್ದು, ಜನರಿಂದ ವೈಯುಕ್ತಿಕ ಹಾಗೂ ಸಮುದಾಯದ ಪರವಾಗಿ ಸ್ವೀಕರಿಸಿರುವ ಅರ್ಜಿಗಳನ್ನು ಸ್ಥಳದಲ್ಲಿಯೇ ಪರಿಹಾರ ನೀಡಿ, ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳುವ ಭರವಸೆಯನ್ನು ವ್ಯಕ್ತಪಡಿಸಿದರಲ್ಲದೇ, ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಕ್ಷಯ ಶ್ರೀಧರ ಮಾತನಾಡಿ, ಮುಂಬರುವ ದಿನಗಳಲ್ಲಿ ಸಾರ್ವತ್ರಿಕ ಚುನಾವಣೆಗಳು ಬರಲಿದ್ದು, 18 ವರ್ಷ ಪೂರೈಸಿದ ಯುವ ಸಮುದಾಯ ತಪ್ಪದೇ ಮತದಾನದ ನೋಂದಣಿ ಮಾಡಿಸಿಕೊಳ್ಳಬೇಕು. ಮತದಾರರ ಯಾದಿಯಲ್ಲಿ ತಮ್ಮ ಹೆಸರು ನೋಂದಣಿ ಆಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು, ಚುನಾವಣೆ ಸಂದರ್ಭದಲ್ಲಿ ನಿಮ್ಮಗಳ ಮತದಾನ ಬಹಳ ಪವಿತ್ರವಾಗಿದ್ದು, ಯಾವುದೇ ಒತ್ತಡ, ಆಸೆ ಆಮಿಷಕ್ಕೆ ಒಳಗಾಗದಂತೆ ತಿಳಿಸಿದರಲ್ಲದೇ ಸಾರ್ವಜನಿಕರಿಗೆ ಮತದಾನದ ಪ್ರಮಾಣ ಮಾಡಿಸಿದರು.
ವಿವಿಧ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಿಂದ ಅರ್ಜಿಗಳನ್ನು ಪಡೆದುಕೊಂಡು ಪರಿಹಾರ ನೀಡುವ ಮೂಲಕ ತಮ್ಮ ಇಲಾಖೆಯಿಂದ ಜನರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಜನರಿಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಸುಮಾರು 40ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದವು. ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಹೆಣ್ಣು ಮಕ್ಕಳಿಗೆ ಸಮೃದ್ಧಿ ಸುಕನ್ಯಾ ಯೋಜನೆಯ ಪಾಸ್ ಪುಸ್ತಕಗಳನ್ನು ವಿತರಿಸಲಾಯಿತು.
ಗ್ರಾಪಂ ಅಧ್ಯಕ್ಷೆ ಲಲಿತಮ್ಮ ಗೌಡ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ, ವಿವಿಧ ಇಲಾಖೆಗಳ ಅಧಿಕಾರಿಗಳಾದ ಕೆ.ಎಚ್.ಉದಗಟ್ಟಿ, ಡಾ.ನಾಗರಾಜ ನಾಯಕ, ಚೇತನಾ ಪಾಟೀಲ, ತಹಶೀಲ್ದಾರ ಎಸ್.ಎ.ಪ್ರಸಾದ, ತಾ.ಪಂ.ಇಓ ಕೆ.ಎಂ.ಮಲ್ಲಿಕಾರ್ಜುನ, ಗ್ರೇಡ್ -2 ತಹಶೀಲ್ದಾರ ಗವಿಸಿದ್ದಪ್ಪ ದ್ಯಾಮಣ್ಣವರ, ಸುರೇಶ ಬೇಡರ. ಡಿ.ಎಲ್.ಕಲ್ಲೋಳ್ಕರ, ಕೆ.ರಾಜಣ್ಣ, ಉಪಾಧ್ಯಕ್ಷ ಈಶ್ವರ ನೇಸ್ವಿ, ಶೆಖರಗೌಡ್ರ ಗೌಡ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.