ಸಮಸ್ಯೆ ಬಂದಾಗ ಸ್ಪಂದಿಸುವುದಕ್ಕಿಂತ, ಸಮಸ್ಯೆ ಬರದಂತೆ ಮುನ್ನೆಚ್ಚರಿಕೆ ವಹಿಸಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ

ಯಾದಗಿರಿ: ಮೇ , 13: ಸಮಸ್ಯೆ ಬಂದಾಗ ಸ್ಪಂದಿಸುವುದಕ್ಕಿಂತ, ಸಮಸ್ಯೆ ಬರದಂತೆ ನೋಡಿಕೊಳ್ಳುವುದಕ್ಕೆ ಅಧಿಕಾರಿಗಳು ಮುಂಜಾಗ್ರತಾ ವಹಿಸುವುದು ಸೂಕ್ತವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬರ ನಿರ್ವಹಣೆ ಹಾಗೂ ಪೂರ್ವ ಮುಂಗಾರು ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಮುಂಗಾರು ಮಳೆ ಆರಂಭವಾಗುತ್ತಿದ್ದು, ಮಳೆಯಿಂದ ಉಂಟಾಗಬಹುದಾದ ಹಾನಿಯನ್ನು ತಡೆಯಲು ಸಂಬಂಧಿಸಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ವ್ಯಾಪಕ ಮಳೆಯಾದ ಸಂದರ್ಭದಲ್ಲಿ ಪ್ರವಾಹ, ಜನ, ಜಾನುವಾರು ಪ್ರಾಣಹಾನಿ, ವಾಸದ ಮನೆ ಹಾನಿ ಹಾಗೂ ಸಾರ್ವಜನಿಕ ಆಸ್ತಿಹಾನಿ ಯಾಗುವ ಸಾಧ್ಯತೆಗಳಿದ್ದು, ಅಂತಹ ಸಂದರ್ಭದಲ್ಲಿ ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತುರ್ತು ಕ್ರಮಕೈಗೊಳ್ಳಬೇಕು ಎಂದರು.

ಮಳೆಯಿಂದ ಜಾನುವಾರು ಪ್ರಾಣ ಹಾನಿ, ವಾಸದ ಮನೆ ಹಾನಿಯಾಗಿದ್ದಲ್ಲಿ ತಕ್ಷಣವೇ ಪರಿಹಾರ ವಿತರಣೆ ಮಾಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಅನುಸರಿಸಬಾರದು ಎಂದು ಸೂಚನೆ ನೀಡಿದರು.

ವ್ಯಾಪಕ ಮಳೆ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಜಿಲ್ಲೆಯಲ್ಲಿ ಮಳೆಯಾದರೂ ಸಹ, ಕುಡಿಯುವ ನೀರಿನ ಸಮಸ್ಯೆ ಅಲ್ಲಲ್ಲಿ ಕೇಳಿಬರುತ್ತದೆ. ಆದ್ದರಿಂದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಜಾಸ್ತಿ ಮಳೆಯಿಂದ ಪ್ರವಾಹ ಉಂಟಾಗುವ ಸಾದ್ಯತೆ ಕಂಡುಬಂದಾಗ ಅಂತಹ ಸಂದರ್ಭದಲ್ಲಿ ಕಂದಾಯ, ಜೆಸ್ಕಾಂ, ಲೋಕೋಪಯೋಗಿ, ಪಂಚಾಯಿತಿ ರಾಜ್, ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಸೇರಿದಂತೆ ಇನ್ನಿತರ ಮಹತ್ವದ ಇಲಾಖೆಗಳ ಅಧಿಕಾರಿಗಳು ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಅವರು ಸೂಚಿಸಿದರು.

ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು, ಪಿಡಿಒಗಳು ಹೆಚ್ಚಿನ ಕಾಳಜಿ ವಹಿಸಬೇಕು. ಮುಖ್ಯವಾಗಿ ಆಯಾ ತಾಲೂಕಿನ ತಹಸೀಲ್ದಾರರು ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಜಾಸ್ತಿ ಮಳೆಯಾಗುತ್ತಿದ್ದಂತೆ ಕೆಲವೆಡೆ ವಿದ್ಯುತ್ ತಂತಿಗಳು ಕೆಳಗಡೆ ಜೋತಾಡುವ ಸ್ಥಿತಿ ಇರುತ್ತದೆ. ಮಳೆಯಾದಾಗ ಈ ವಿದ್ಯತ್ ತಂತಿಗಳು ಹಾಳಾದರೆ, ಕೂಡಲೇ ಬೇರೊಂದನ್ನು ಜೋಡಿಸಲು ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ಲಭ್ಯತೆ ಇರಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚರಂಡಿಗಳನ್ನು ಶುಚಿಗೊಳಿಸಿ

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮಳೆಗಾಲದ ಸಂದರ್ಭದಲ್ಲಿ ನೀರು ಸರಾಗವಾಗಿ ಹರಿಯಲು ಎಲ್ಲಾ ಕಡೆ ಚರಂಡಿಗಳನ್ನು ಶುಚಿಯಾಗಿರಿಸಬೇಕು. ಚರಂಡಿಯಿಂದ ಕಸ ತೆಗೆದ ಕೂಡಲೇ ಅದರ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಪ್ರಕಾಶ ಕುದರಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ತಹಶೀಲ್ದಾರರು, ತಾಲೂಕು ಪಂಚಾಯತ ಇಓರವರು ಉಪಸ್ಥಿತರಿದ್ದರು.