ಸರಳ, ಅರ್ಥಪೂರ್ಣ ಗಣರಾಜ್ಯೋತ್ಸವಕ್ಕೆ ಸಿದ್ದತೆ

ಬಾಗಲಕೋಟೆ: ಜ14:ಕೋವಿಡ್-19 ಹಿನ್ನಲೆಯಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವವನ್ನು ಈ ಬಾರಿ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ ಕುರಿತ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ, 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಉಪ ಮುಖ್ಯಮಂತ್ರಿಗಳಿಂದ ಧ್ವಜಾರೋಜಹಣ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.
ಪಥಸಂಚಲನ ಕಾರ್ಯಕ್ರಮದಲ್ಲಿ ಪೋಲಿಸ್, ಗೃಹರಕ್ಷಕದಳ, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ ಸೇವಾ ದಳದವರನ್ನು ಆಹ್ವಾನಿಸಲು ತಿಳಿಸಲಾಯಿತು. ಧ್ವಜಾರೋಹಣ ವ್ಯವಸ್ಥೆ ಮಾಡಲು ಭಾರತ ಸೇವಾದಳ, ಪೋಲಿಸ್ ಇಲಾಖೆ, ತಹಶೀಲ್ದಾರ ಹಾಗೂ ಯುವಜನ ಸೇವಾ ಹಾಗೂ ಕ್ರೀಡಾಧಿಕಾರಿಗಳಿಗೆ ವಹಿಸಲಾಯಿತು. ಪೋಲಿಸ್ ಬಂದೂಬಸ್ತಿ ವ್ಯವಸ್ಥೆ ಮಾಡುವಂತೆ ಪೋಲಿಸ್ ಇಲಾಖೆಗೆ ಸೂಚಿಸಿದರು. ಶಿಷ್ಟಾಚಾರದ ಪ್ರಕಾರ ಆಮಂತ್ರಣ ಪತ್ರಿಕೆ ಮುದ್ರಿಸಲು ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಮಾಸ್ಕ್ ಕಡ್ಡಾವಾಗಿ ಧರಿಸುವ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕಾರ್ಯಕ್ರಮದಂದು ಸ್ಯಾನಿಟೈಜರ್ ವಿತರಣೆ, ಸಿಂಪಡಣೆ ವ್ಯವಸ್ಥೆ ಕೈಗೊಳ್ಳಲಾಗುವುದು. ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟ್ಯಾಜರ್ ವ್ಯವಸ್ಥೆ ಮಾಡಲು ಆರೋಗ್ಯ ಇಲಾಖೆಗೆ ತಿಳಿಸಿದರು. ಕಾರ್ಯಕ್ರಮ ಯಶಸ್ವಿಗೊಳಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗೆ ವಹಿಸಿದ ಜವಾಬ್ದಾರಿಯನ್ನು ಚಾಚೂ ತಪ್ಪದೇ ಪಾಲಿಸಲು ಸೂಚಿಸಿದರು.
ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಬಿರಾದಾರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರರು, ಗೃಹರಕ್ಷಕದಳ, ಭಾರತ ಸೇವಾದಳದವರು ಉಪಸ್ಥಿತರಿದ್ದರು.