ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಜನರಿಗೆ ತಲುಪಿಸಿ:ಪಿಡಿಒಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಕಲಬುರಗಿ,ಜು.19:ಜಿಲ್ಲಾ ಪಂಚಾಯತ್‌ ವ್ಯವಸ್ಥೆಯನ್ನು ಸದೃಢಗೊಳಿಸುವ ಸರ್ಕಾರದ ಆಶಯಗಳನ್ನು ಸಾಕಾರಗೊಳಿಸಲು ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಪಾತ್ರ ಹಿರಿದಾಗಿದ್ದು, ಸರ್ಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಗ್ರಾಮೀಣ ಜನರಿಗೆ ಯಶಸ್ವಿಯಾಗಿ ತಲುಪಿಸಲು ಬದ್ಧತೆ ತೋರಬೇಕೆಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಪ್ರತಿನಿಧಿಗಳು ಇಂದು ಬೆಂಗಳೂರಿನ ಕಚೇರಿಯಲ್ಲಿ ಸಚಿವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರೊಂದಿಗೆ ಸೌಹಾರ್ದಯುತ ಚರ್ಚೆ ನಡೆಸಿದರು.

ರಾಜ್ಯ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸುವುದು ಸೇರಿದಂತೆ 18 ಬೇಡಿಕೆಗಳನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಸಚಿವರಿಗೆ ಸಲ್ಲಿಸಿದರು.

ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಬೇಡಿಕೆಗಳ ಸಾಧಕ ಬಾಧಕಗಳನ್ನು ಪರಿಶೀಲಿಸಿ ನಿಯಮಗಳ ಅಡಿಯಲ್ಲಿ ಕಾರ್ಯರೂಪಕ್ಕೆ ತರಬಹುದಾದ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದು. ಜೊತೆಗೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಯಾವುದೇ ಸಮಸ್ಯೆಗಳಿದ್ದಲ್ಲಿ ತಮ್ಮನ್ನು ನೇರವಾಗಿ ಭೇಟಿ ಮಾಡಿ ತಿಳಿಸುವಂತೆ ಸಚಿವರು ಸೂಚಿಸಿದರು.

ಗ್ರಾಮಗಳ ಅಭಿವೃದ್ಧಿ ಜೊತೆಗೆ ಅಧಿಕಾರಿಗಳ ಕುಂದುಕೊರತೆಗಳನ್ನು ಆಲಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಜನರ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನ ನಿರಂತರವಾಗಿ ಸಾಗಲಿದೆ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಈ ಸಂದರ್ಭದಲ್ಲಿ ಹೇಳಿದರು.