ಸರ್ಕಾರದ ಯೋಜನೆಗಳನ್ನು ಶೋಷಿತರ ಮನೆ ಬಾಗಿಲಿಗೆ ತಲುಪಿಸಿ

ಚಿತ್ರದುರ್ಗ.ಜೂ.೨೧; ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ರೈತರು ಹಾಗೂ ಶೋಷಿತರ ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ  ಆಯೋಜಿಸಲಾದ ಲೀಡ್ ಬ್ಯಾಂಕ್‍ಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಸಲಹಾ ಮತ್ತು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸರ್ಕಾರದ ಪ್ರಾಯೋಜಿತ ಯೋಜನೆಗಳ ಬಗ್ಗೆ ವಿಳಂಬ ಹಾಗೂ ನಿರ್ಲಕ್ಷ್ಯ ಮಾಡಬಾರದು. ಅನೇಕ ಇಲಾಖೆಗಳ ಸಹಾಯಧನ ಸಹಿತ ಸಾಲ ನೀಡುವ ಸಾಮಾಜಿಕ ಭದ್ರತಾ ಯೋಜನೆಗಳು ಸಾಕಷ್ಟು ಲ್ಯಾಪ್ಸ್ ಆಗುತ್ತಿವೆ. ಸರ್ಕಾರದ ಪ್ರಾಯೋಜಿತ ಯೋಜನೆಗಳನ್ನು ಜಾರಿಗೆ ತರಲು ಅಧಿಕಾರಿಗಳು ಒಟ್ಟಾಗಿ ಕೆಲಸ ಮಾಡಬೇಕು. ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಹಾಗೂ ನಿರ್ಲಕ್ಷ್ಯ ಮಾಡುವ ಬ್ಯಾಂಕ್ ಶಾಖೆಗಳನ್ನು ಮುಚ್ಚಲು ಕ್ರಮ ವಹಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.  
ತ್ವರಿತವಾಗಿ ಅರ್ಜಿ ವಿಲೇವಾರಿ ಮಾಡಿ: ಸರ್ಕಾರದ ವಿವಿಧ ನಿಗಮಗಳಡಿ ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದವರ ಜೀವನಮಟ್ಟ ಸುಧಾರಣೆಗೆ ಹಲವು ಸ್ವಾವಲಂಬಿ ಯೋಜನೆಗಳಡಿ ಫಲಾನುಭವಿಗಳಿಗೆ ಸಹಾಯಯಧನ, ರೈತರಿಗೆ ಸಾಲಸೌಲಭ್ಯ, ಬೆಳೆವಿಮೆ ಪರಿಹಾರ ಸೇರಿದಂತೆ ಇಂತಹ ಪ್ರಕರಣಗಳಲ್ಲಿ ತ್ವರಿತವಾಗಿ ಅರ್ಜಿ ವಿಲೇವಾರಿಗೊಳಿಸಿ, ನೆರವು ಒದಗಿಸಲು ಸಚಿವರು ಸೂಚನೆ ನೀಡಿದರು.
ಕಳೆದ ಮೂರು ವರ್ಷಗಳಿಂದಲೂ ಅನೇಕ ಅರ್ಜಿಗಳು ಬಾಕಿ ಉಳಿದಿವೆ. ಕಳೆದ ಬಾರಿ ಸಭೆ ನಡೆಸಿ, ಸೂಚನೆ ನೀಡಿದರೂ ಒಂದು ಅರ್ಜಿಯೂ ವಿಲೇವಾರಿ ಆಗಿಲ್ಲ. ಬಡವರಿಗೆ, ಶೋಷಿತರಿಗೆ ಪರಿಹಾರ ನೀಡಲು ವಿಳಂಬ ಧೋರಣೆ ತೋರದೇ ಶೀಘ್ರವಾಗಿ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದು ಸೂಚನೆ ನೀಡಿದರು.ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯಲ್ಲಿ 457 ಅರ್ಜಿಗಳಲ್ಲಿ 187 ಅರ್ಜಿಗಳು ವಿಲೇವಾರಿಯಾಗಿದ್ದು, ಇನ್ನೂ 285 ಅರ್ಜಿಗಳು ಬ್ಯಾಂಕ್ ವ್ಯವಸ್ಥಾಪಕರ ಲಾಗಿನ್‍ನಲ್ಲಿ ಬಾಕಿ ಉಳಿದಿವೆ. ಇದರಿಂದ ರೈತರಿಗೆ ಬೆಳೆ ವಿಮೆಯ ಪರಿಹಾರ ಹಣ ಪಾವತಿಯಾಗಿಲ್ಲ. ಬ್ಯಾಂಕ್ ವ್ಯವಸ್ಥಾಪಕರು ಎರಡು-ಮೂರು ದಿನಗಳಲ್ಲಿ ಈ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ ಸಭೆಗೆ ಮಾಹಿತಿ ನೀಡಿದರು.  ಪ್ರತಿಕ್ರಿಯಿಸಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ ಅವರು ಬಾಕಿ ಇರುವ ಎಲ್ಲ ಅರ್ಜಿಗಳನ್ನು ವಿಲೇವಾರಿ ಮಾಡಿ, ಶೀಘ್ರದಲ್ಲಿ ರೈತರಿಗೆ ಬೆಳೆ ವಿಮೆ ಹಣ ಪಾವತಿಯಾಗುವಂತೆ ಅಗತ್ಯ ಕ್ರಮವಹಿಸಬೇಕು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.