ಸರ್ಕಾರದ ವಿರುದ್ಧ ಎಬಿವಿಪಿ ಆಕ್ರೋಶ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಇಂದು ಬೆಳಿಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಬೆಂಗಳೂರು,ಜು.೩೦-ಬಿಜೆಪಿ ಯುವ ನಾಯಕ ಪ್ರವೀಣ್ ಹತ್ಯೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಎಬಿವಿಪಿ ಕಾರ್ಯಕರ್ತರು, ಗೃಹ ಸಚಿವ ಆರಗ ಜ್ಞಾನೇಂದ್ರರವರ ನಿವಾಸಕ್ಕೆ ಇಂದು ಮುತ್ತಿಗೆ ಹಾಕಿ ದಾಂಧಲೆ ನಡೆಸಿರುವುದು ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ.
ಬೆಂಗಳೂರಿನ ಜಯಮಹಲ್‌ನಲ್ಲಿರುವ ಸಚಿವ ಆರಗ ಜ್ಞಾನೇಂದ್ರರವರ ನಿವಾಸಕ್ಕೆ ಮುತ್ತಿಗೆ ಹಾಕಿ, ಕಾಂಪೌಂಡ್ ಹಾರಿ, ಹೂಕುಂಡಗಳನ್ನು ಹೊಡೆದು ಚೆಲ್ಲಾಪಿಲ್ಲಿ ಮಾಡಿ ಪುಂಡಾಟ ಮೆರೆದವರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಚದುರಿಸಿ ಕೆಲವರನ್ನು ವಶಕ್ಕೆ ಪಡೆದಿದ್ದಾರೆ.
ಸಚಿವ ಅರಗ ಜ್ಞಾನೇಂದ್ರ ಅವರ ಮನೆಗೆ ಮುತ್ತಿಗೆ ಹಾಕಿದ ನೂರಾರು ಎಬಿವಿಪಿ ಕಾರ್ಯಯರ್ತರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಗೃಹ ಇಲಾಖೆಯನ್ನು ನಿಭಾಯಿಸುವುದರಲ್ಲಿ ಆರಗ ಜ್ಞಾನೇಂದ್ರ ಅವರು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ನಿಭಾಯಿಸುವಲ್ಲಿ ವಿಫಲರಾದ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಇದರ ಜೊತೆಗೆ ಎಸ್‌ಡಿಪಿಐ, ಪಿಎಫ್‌ಐ ನಿಷೇಧಿಸಬೇಕು ಎಂದು ಒತ್ತಾಯಿಸಿದ ಎಬಿವಿಪಿ ಕಾರ್ಯಕರ್ತರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಸಮರ್ಥರು ಎಂದು ಘೋಷಣೆ ಕೂಗಿದ್ದಾರೆ. ಈ ಪ್ರತಿಭಟನೆ ಅತಿರೇಕಕ್ಕೆ ಹೋಗಿದ್ದು, ಎಬಿವಿಪಿ ಕಾರ್ಯಕರ್ತರು ಗೇಟ್ ಹಾರಿ ಗೃಹ ಸಚಿವರ ನಿವಾಸಕ್ಕೆ ನುಗ್ಗಿದ್ದಾರೆ.
ಈ ವೇಳೆ ಅಲ್ಲಿದ್ದ ಪೊಲೀಸರು ಎಬಿವಿಪಿ ಕಾರ್ಯಕರ್ತರನ್ನು ಬಾಗಿಲ ಬಳಿ ತಡೆದಾಗ ಪೊಲೀಸರು ಹಾಗೂ ವಿದ್ಯಾರ್ಥಿ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ, ವಾಗ್ವಾದ ನಡೆದಿದೆ.
ಆಕ್ರೋಶಗೊಂಡ ಕೆಲ ಕಾರ್ಯಕರ್ತರು ನಿವಾಸದ ಬಳಿಯ ಹೂ ಕುಂಡಗಳನ್ನು ಪುಡಿಗೈದು ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ ಮಾಡಿದ ಪೊಲೀಸರು ನೂರಾರು ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ ಸಂದರ್ಭದಲ್ಲಿ ಸಚಿವ ಜ್ಞಾನೇಂದ್ರರವರು ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿದ್ದಾರೆ.
ಬಿಜೆಪಿಯ ಅಂಗ ಸಂಸ್ಥೆಯಾದ ಎಬಿವಿಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ತಿರುಗಿಬಿದ್ದಿರುವುದು ಸರ್ಕಾರವನ್ನು ಪೇಚಿಗೆ ಸಿಲುಕಿಸಿದೆ.