ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ನಿರ್ಬಂಧ

ಬೆಂಗಳೂರು, ಜು. ೧೫- ಇನ್ನು ಮುಂದೆ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಛಾಯಾಚಿತ್ರ ತೆಗೆಯುವುದಾಗಲೀ, ವಿಡಿಯೋ ಮಾಡುವುದಕ್ಕೆ ನಿರ್ಬಂಧ ಹೇರಲಾಗಿದೆ.
ಈ ಸಂಬಂಧ ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದ್ದು, ಈ ಆದೇಶದಂತೆ ರಾಜ್ಯ ಸರ್ಕಾರದ ಯಾವುದೇ ಇಲಾಖೆಯ ಕಚೇರಿಗಳಲ್ಲಿ ಸಾರ್ವಜನಿಕರು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡುವುದನ್ನು ನಿಷೇಧಿಸಲಾಗಿದೆ.
ಕರ್ನಾಟಕ ರಾಜ್ಯ ನೌಕರರ ಸಂಘದ ಅಧ್ಯಕ್ಷರು, ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ, ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿ ವೇಳೆಯಲ್ಲಿ ಬಂದು ಫೋಟೋ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ. ಹಾಗೂ ಇಂತಹ ಫೋಟೋ, ವಿಡಿಯೋಗಳನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಇಲಾಖೆಗೆ ಹಾಗೂ ಸರ್ಕಾರದ ಘನತೆಗೆ ಕುಂದು ಉಂಟಾಗುತ್ತಿರುವುದು ಅದರಲ್ಲಿ ವಿಶೇಷವಾಗಿದೆ. ಮಹಿಳಾ ನೌಕರರಿಗೆ ಸಮಸ್ಯೆ ಉಂಟಾಗುತ್ತಿದ್ದು, ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಕಚೇರಿ ವೇಳೆಯಲ್ಲಿ ಯಾವುದೇ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ಮಾಡುವುದನ್ನು ನಿಷೇಧಿಸುವಂತೆ ಕೋರಿದ್ದರು.
ಈ ಮನವಿಯನ್ನು ಕೂಲಂಕುಷವಾಗಿ ಪರಿಶೀಲಿಸಿ ಸರ್ಕಾರಿ ಕಚೇರಿ ವೇಳೆಯಲ್ಲಿ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ಮಾಡದಂತೆ ನಿರ್ಬಂಧಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಕೆ. ವೆಂಕಟೇಶಪ್ಪ ರಾಜ್ಯಪಾಲರ ಆಜ್ಞಾನುಸಾರ ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಕಚೇರಿಗಳಿಗೆ ಫೋಟೋ, ವಿಡಿಯೋ ನಿರ್ಬಂಧದ ಆದೇಶ ಇಂದು ಹೊರಬಿದ್ದಿದು ತತ್‌ಕ್ಷಣದಿಂದಲೇ ಈ ಆದೇಶ ಜಾರಿಯಾಗಿದೆ.
ಆದೇಶವನ್ನು ಉಲ್ಲಂಘಿಸಿ ಯಾರಾದರೂ ವಿಡೀಯೋ, ಫೋಟೋ ತೆಗೆದರೆ ಅವರ ಮೇಲೆ ಯಾವ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಬಗ್ಗೆ ಆದೇಶದಲ್ಲಿ ಯಾವುದೇ ಉಲ್ಲೇಖ ಇಲ್ಲ.