ಸರ್ಕಾರಿ ನೌಕರರಿಗೆ ಕ್ರೀಡೆಗಳು ಸಹಕಾರಿ:ಎಚ್.ಶ್ರೀನಿವಾಸ್

ಗೌರಿಬಿದನೂರು,ಜ.೨೧-ನಗರದ ನೇತಾಜಿ ಕ್ರೀಡಾಂಗಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಪಂಚಾಯಿತಿ ಇವರುಗಳ ಆಶ್ರಯದಲ್ಲಿ ೨೦೨೨-೨೦೨೩ ನೇ ಸಾಲಿನ ಸರ್ಕಾರಿ ನೌಕರರ ತಾಲ್ಲೂಕು ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ತಹಸೀಲ್ದಾರ್ ಎಚ್.ಶ್ರೀನಿವಾಸ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ತಹಸೀಲ್ದಾರ್ ಎಚ್.ಶ್ರೀನಿವಾಸ್, ಪ್ರತಿನಿತ್ಯ ಒತ್ತಡದ ನಡುವೆ ಕೆಲಸ ನಿರ್ವಹಿಸುವ ಸರ್ಕಾರಿ ನೌಕರರು ಮಾನಸಿಕ ಹಾಗೂ ದೈಹಿಕವಾಗಿ ಸದೃಢಗೊಳ್ಳಲು ಕ್ರೀಡೆಗಳು ಸಹಕಾರಿಯಾಗಿವೆ. ಪ್ರತಿಯೊಬ್ಬರೂ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಆರೋಗ್ಯವನ್ನು ಮತ್ತಷ್ಟು ವೃದ್ಧಿಸಿಕೊಳ್ಳಬೇಕಾಗಿದೆ.
ಕ್ರೀಡೆಗಳು ವ್ಯಕ್ತಿಯ ವ್ಯಕ್ತಿತ್ವ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುವ ಜೊತೆಗೆ ಮಾನಸಿಕ ಹಾಗೂ ದೈಹಿಕವಾಗಿಯೂ ಸದೃಢವನ್ನಾಗಿಸುತ್ತವೆ. ಸರ್ಕಾರಿ ನೌಕರರು ತಮ್ಮ ಮಾನಸಿಕ ಒತ್ತಡವನ್ನು ನಿವಾರಿಸಿಕೊಳ್ಳಲು ದಿನದ ಒಂದು ಗಂಟೆಯಾದರೂ ಯೋಗ, ಪ್ರಾಣಯಾಮ ಸೇರಿದಂತೆ ಇತರ ದೈಹಿಕ ಚಟುವಟಿಕೆಗಳಿಗಾಗಿ ಮೀಸಲಿಡಬೇಕು ಎಂದು ಹೇಳಿದರು.


ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಆರ್.ಹರೀಶ್ ಮಾತನಾಡಿ, ಕ್ರೀಡೆಗಳು ಮಾನವನ ಜೀವನಕ್ಕೆ ಬಹಳ ಅವಶ್ಯಕ, ಇವುಗಳು ನಮ್ಮ ದೇಹಕ್ಕೆ ಉತ್ತಮ ಆರೋಗ್ಯ ನೀಡಿ ಮನುಷ್ಯರನ್ನು ತಾಜಾಗೊಳಿಸುತ್ತವೆ. ಕ್ರೀಡಾಕೂಟಗಳು ನಮ್ಮೆಲ್ಲರ ಆರೋಗ್ಯಕ್ಕೆ ಟಾನಿಕ್ ಇದ್ದಂತೆ, ಆಸಕ್ತಿಯಿಂದ ಭಾಗವಹಿಸಿದಲ್ಲಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ಕೂಡ ಸರ್ಕಾರಿ ನೌಕರರಿಗೆ ಕ್ರೀಡಾಕೂಟಗಳನ್ನು ಆಯೋಜನೆ ಮಾಡಿದ್ದು, ಎಲ್ಲರೂ ಇದರ ಸದುಪಯೋಗಪಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.
ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಶ್ರೀನಿವಾಸಮೂರ್ತಿ ಮಾತನಾಡಿ, ಸರ್ಕಾರಿ ನೌಕರರು ಪ್ರತೀ ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಾರೆ. ಅವರು ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದರಿಂದ ಕ್ರಿಯಾಶೀಲ ಚಟುವಟಿಕೆಗೆ ಸಹಕಾರಿಯಾಗಲಿದೆ. ಸರ್ಕಾರಿ ನೌಕರರ ಚಲನಶೀಲತೆಗೆ ಕ್ರೀಡಾಚಟುವಟಿಕೆ ಅತ್ಯವಶ್ಯಕವಾಗಿದ್ದು, ಇದರಿಂದ ಅವರಲ್ಲಿನ ಉತ್ಸಾಹ ಹೆಚ್ಚಾಗಲಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಡಿ.ಎನ್.ಮಧುಸೂಧನ್ ರೆಡ್ಡಿ ಮಾತನಾಡಿ, ಮಾನಸಿಕ ಮತ್ತು ದೈಹಿಕ ಒತ್ತಡಗಳಿಂದ ಹೊರಬರಲು ಕ್ರೀಡಾಕೂಟಗಳು ಸಹಕಾರಿಯಾಗುತ್ತದೆ. ರಾಜ್ಯ ಸರ್ಕಾರಿ ನೌಕರರ ಸಂಘವು ಸದಾ ನೌಕರರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಇದೇ ವೇಳೆ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ನಾರಾಯಣಸ್ವಾಮಿ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎನ್.ಜಿ.ರೆಡ್ಡಪ್ಪ, ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್, ತಾಲ್ಲೂಕು ಕಂದಾಯ ನೌಕರರ ಸಂಘದ ಅಧ್ಯಕ್ಷ ರವಿಕುಮಾರ್, ತಾಲ್ಲೂಕು ಪಿಡಿಓ ಸಂಘದ ಅಧ್ಯಕ್ಷ ಆರ್.ಎನ್.ಸಿದ್ದರಾಮಯ್ಯ, ತಾಲ್ಲೂಕು ಉಪನ್ಯಾಸಕರ ಸಂಘದ ಅಧ್ಯಕ್ಷ ಎಂ.ಜಿ.ರವಿಚಂದ್ರ , ತಾಲ್ಲೂಕು ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಟಿ.ಕೆ.ವೆಂಕಟಮೋಹನ್, ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಲ್.ಸಿಂಹಾದ್ರಿ, ರಾಜ್ಯ ಪರಿಷತ್ ಸದಸ್ಯ ಸೋಮಸುಂದರ್, ಉಪಾಧ್ಯಕ್ಷ ಎಂ.ಎಚ್.ಮಂಜುನಾಥ್, ಎನ್.ಆರ್.ಮಂಜುನಾಥ್, ಕ್ರೀಡಾ ಕಾರ್ಯದರ್ಶಿ ಎಚ್.ವಿ.ರಾಜಶೇಖರ್ ಸೇರಿದಂತೆ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.