
ಬೀದರ್:ಫೆ.24: ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆಗಳ ಪರಿಷ್ಕರಣೆ ಹಾಗೂ ಹಳೆಯ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘವು ಮಾ. 1 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಹೇಳಿದರು.
ಬೆಂಗಳೂರಿನಲ್ಲಿ ನಡೆದ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಎಂದು ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ರಾಜ್ಯದ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಪ್ರಸಕ್ತ ಸಾಲಿನ ರಾಜ್ಯ ಬಜೆಟ್‍ನಲ್ಲಿ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ನೌಕರರಲ್ಲಿ ನಿರಾಶೆ ಮೂಡಿಸಿದೆ ಎಂದು ಹೇಳಿದರು.
ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನ ನೌಕರರು 2022 ರ ಜುಲೈ 1 ರಿಂದ ಪರಿಷ್ಕøತ ವೇತನ ಹಾಗೂ ಭತ್ಯೆಗಳಿಗೆ ಅರ್ಹರಾಗಿದ್ದಾರೆ. ಚುನಾವಣೆ ನೀತಿ ಸಂಹಿತೆ ಜಾರಿಗೆ ಬರುವ ಮುನ್ನ, ಜುಲೈ 1 ರಿಂದ ಜಾರಿಗೆ ಬರುವಂತೆ ಶೇ 40 ರಷ್ಟು ಫಿಟ್‍ಮೆಂಟ್ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಕಷ್ಟಕರವಾಗಿದೆ. ಹೀಗಾಗಿ ಎನ್.ಪಿ.ಎಸ್. ನೌಕರರನ್ನು ಓ.ಪಿ.ಎಸ್. ವ್ಯಾಪ್ತಿಗೆ ಒಳಪಡಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದರು.
ಈಗಾಗಲೇ ಪಂಜಾಬ್, ರಾಜಸ್ತಾನ್, ಛತ್ತೀಸ್‍ಗಡ್, ಜಾರ್ಖಂಡ್, ಹಿಮಾಚಲ್ ಪ್ರದೇಶ ರಾಜ್ಯಗಳಲ್ಲಿ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಿದ್ದು, ರಾಜ್ಯದಲ್ಲೂ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ವಿವಿಧ ನೌಕರರ ಸಂಘಗಳ ಪದಾಧಿಕಾರಿಗಳು ಸಂಘದ ಹೋರಾಟಕ್ಕೆ ಬೆಂಬಲ ಸೂಚಿಸಿದರು.
ರಾಜ್ಯ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶೇಕ್ ಮಹೆಬೂಬ್ ಪಟೇಲ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಭುಲಿಂಗ ತೂಗಾವೆ, ಪಿ.ಡಿ.ಒ. ಸಂಘದ ಅಧ್ಯಕ್ಷ ಸಂತೋಷ ಪಾಟೀಲ, ನಗರಸಭೆ ನೌಕರರ ಸಂಘದ ಅಧ್ಯಕ್ಷ ಅನಿಲ್ ಚಲುವಾ, ಪಶು ವೈದ್ಯಕೀಯ ಇಲಾಖೆಯ ಸಂಘದ ಡಾ. ಶಶಿಧರ, ಸರ್ವೇ ಇಲಾಖೆ ನೌಕರರ ಸಂಘದ ಪೀಟರ್, ಜೆಸ್ಕಾಂ ಸಂಘದ ವೀರಣ್ಣ ಮುದಾಳೆ, ಪದವಿಪೂರ್ವ ಉಪನ್ಯಾಸಕರ ಸಂಘದ ಅಧ್ಯಕ್ಷ ಓಂಕಾಂತ ಸೂರ್ಯವಂಶಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಸವರಾಜ ಜಕ್ಕಾ, ಕಾರ್ಯಾಧ್ಯಕ್ಷ ಡಾ. ರಾಜಕುಮಾರ ಹೊಸದೊಡ್ಡೆ, ಉಪಾಧ್ಯಕ್ಷ ಪಾಂಡುರಂಗ ಬೆಲ್ದಾರ್, ಪ್ರಧಾನ ಕಾರ್ಯದರ್ಶಿ ರಾಜಶೇಖರ ಮಂಗಲಗಿ, ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಕಪಲಾಪುರೆ ಸುದ್ದಿಗೋಷ್ಠಿಯಲ್ಲಿ ಇದ್ದರು.