ಸರ್ಕಾರಿ ಶಾಲೆಗಳು ಹೈಟೆಕ್ ಆಗಬೇಕು; ಮಹಮ್ಮದ್ ಜಿಕ್ರಿಯಾ ಸಲಹೆ 

ಸಂಜೆವಾಣಿ ವಾರ್ತೆ

ದಾವಣಗೆರೆ. ಫೆ.೧೨; ಸಿಎಂ ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿರುವ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಡಬೇಕು. ರಾಜ್ಯದಲ್ಲಿರುವ ಅನೇಕ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳಿಲ್ಲ. ಕೆಲ ಸರ್ಕಾರಿ ಶಾಲೆಗಳಂತೂ ಬೀಳುವ ಸ್ಥಿತಿಯಲ್ಲಿವೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದರೂ ಶಿಕ್ಷಕರ ಕೊರತೆ, ಕಟ್ಟಡ, ಆಟದ ಮೈದಾನ ಸೇರಿದಂತೆ ನೂರಾರು ಸಮಸ್ಯೆಗಳಿವೆ. ಇದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಅನುದಾನ ನೀಡಬೇಕು ಎಂದು ಜವಾಹರ್ ಬಾಲ್ ಮಂಚ್  ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಒತ್ತಾಯಿಸಿದ್ದಾರೆ. ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವ ಸ್ಥಿತಿ ನಿರ್ಮಾಣವಾಗಿದೆ. ಖಾಸಗಿ ಶಾಲೆಗಳಿಗಿಂತ ಉತ್ತಮ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿದ್ದರೂ ಹೆಚ್ಚಿನ ಸೌಲಭ್ಯಗಳಿಲ್ಲ. ಹೈಟೆಕ್ ಆದರೆ ಪ್ರತಿ ಪೋಷಕರೂ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುತ್ತಾರೆ. ಆಗ ಸರ್ಕಾರಿ ಶಾಲೆಗಳು ಉಳಿಯುತ್ತವೆ. ಬಡವರು, ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದವರಿಗೂ ಅನುಕೂಲವಾಗಲಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚಿನ ಮುತುವರ್ಜಿ ವಹಿಸಬೇಕಾದ ಅವಶ್ಯಕತೆ ಇದೆ ಎಂಬುದು ಶಿಕ್ಷಣ ತಜ್ಞರ ಅಭಿಪ್ರಾಯವಾಗಿದೆ. ಈ ನಿಟ್ಟಿನಲ್ಲಿ ಹಣಕಾಸು ಸಚಿವರೂ ಆದ ಸಿದ್ದರಾಮಯ್ಯರು ಕ್ರಮ ಕೈಗೊಳ್ಳುತ್ತಾರೆ ಎಂಬ ವಿಶ್ವಾಸ ಇದೆ ಎಂದು ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಶೌಚಾಲಯ, ಬಯಲು, ಶಾಲೆ ಕೊಠಡಿ ಸೇರಿದಂತೆ ಸ್ವಚ್ಛತಾ ಕಾರ್ಯಕ್ಕೆ ಕೆಲ ಶಿಕ್ಷಕರು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಈ ಬಗ್ಗೆ ಕಠಿಣ ಕಾನೂನು ಜಾರಿಗೊಳಿಸಬೇಕು. ಈ ಸಂಬಂಧ ಬಜೆಟ್ ಅಧಿವೇಶನದಲ್ಲಿಯೇ ವಿಧೇಯಕ ಮಂಡನೆ ಮಾಡಿದರೆ ಮಕ್ಕಳ ದುರ್ಬಳಕೆ ತಡೆಯಬಹುದು. ಮಕ್ಕಳ ದುರ್ಬಳಕೆ ಮಾಡಿಕೊಳ್ಳುವವರ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕಿದೆ. ಶಿಕ್ಷೆ ಹಾಗೂ ಕೆಲಸದಿಂದಲೇ ವಜಾಗೊಳಿಸುವಂಥ ಶಿಕ್ಷೆ ವಿಧಿಸುವಂಥ ಕಾನೂನು ಬಂದರೆ ಇಂಥ ಅನಿಷ್ಟಗಳಿಗೆ ಸಂಪೂರ್ಣ ಬ್ರೇಕ್ ಹಾಕಬಹುದು ಎಂದು ಮೊಹಮ್ಮದ್ ಜಿಕ್ರಿಯಾ ಅಭಿಪ್ರಾಯಪಟ್ಟಿದ್ದಾರೆ. ಸಮಯಕ್ಕೆ ಸರಿಯಾಗಿ ಮಕ್ಕಳಿಗೆ ಪಠ್ಯಪುಸ್ತಕ, ಶೂ ವಿತರಿಸಬೇಕು. ಹೆಣ್ಣು ಮಕ್ಕಳಿಗೆ ಬೈಸಿಕಲ್ ನೀಡುವ ಯೋಜನೆ ಮರು ಜಾರಿಗೊಳಿಸಬೇಕು. ಮಕ್ಕಳಿಗೆ ಪೌಷ್ಠಿಕ ಆಹಾರ ಮೊಟ್ಟೆ, ಗುಣಮಟ್ಟದ ಮಧ್ಯಾಹ್ನದ ಬಿಸಿಯೂಟ ನೀಡುವತ್ತ ಗಮನ ನೀಡಬೇಕು. ಭಾಗ್ಯಲಕ್ಷ್ಮೀ ಸೇರಿದಂತೆ ಒಳ್ಳೆಯ ಕಾರ್ಯಕ್ರಮಗಳನ್ನು ರೂಪಿಸಬೇಕು. ಅದೇ ರೀತಿಯಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿ ವ್ಯವಸ್ಥೆ ಬಲಪಡಿಸಬೇಕು ಎಂದು ಆಗ್ರಹಿಸಿದ್ದಾರೆ.