ಸರ್ದಾರ್ ವಲ್ಲಭಭಾಯಿ ಪಟೇಲರಿಂದ ಹೈದ್ರಾಬಾದ್ ಕರ್ನಾಟಕಕ್ಕೆ ಮುಕ್ತಿ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಸೆ.17 :ಹೈದರಾಬಾದ್ ಸಂಸ್ಥಾನಕ್ಕೆ ಸೇರಿದ್ದ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಯಾದಗಿರಿ, ಗುಲ್ಬರ್ಗ ಹಾಗೂ ಬೀದರ್ ಜಿಲ್ಲೆಗಳನ್ನು ಭಾರತದ ಒಕ್ಕೂಟ ವ್ಯವಸ್ಥೆಗೆ ಸೇರಿಸಲು ಹಗಲಿರುಳು ಶ್ರಮಿಸಿದವರು ಅಂದಿನ ಕೇಂದ್ರ ಸರ್ಕಾರದ ಗೃಹಮಂತ್ರಿಯಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲರು ಎಂದು ಕರ್ನಾಟಕ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆಯ  ಜಿಲ್ಲಾ ಘಟಕದ ಅಧ್ಯಕ್ಷ ರವಿಚೇಳ್ಳಗುರ್ಕಿ ಹೇಳಿದರು.
ತಾಲ್ಲೂಕಿನ ಸಂಜೀವರಾಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಹಮ್ಮಿಕೊಂಡಿದ್ದ 75ನೇ ಹೈದರಾಬಾದ್ ಕರ್ನಾಟಕ ವಿಮೋಚನ ದಿನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ದೇಶಕ್ಕೆ 1947 ರಲ್ಲಿ ಸ್ವಾತಂತ್ರ್ಯ ಬಂದರೂ ಕೂಡ ನಮ್ಮ ಏಳು ಜಿಲ್ಲೆಯ ಜನರಿಗೆ ಸ್ವಾತಂತ್ರ್ಯ ಬಂದಿರಲಿಲ್ಲ. ಏಕೆಂದರೆ ಈ ಜಿಲ್ಲೆಗಳು ಹೈದರಾಬಾದ್ ನಿಜಾಮನ ಆಳ್ವಿಕೆಗೆ ಒಳಪಟ್ಟಿದ್ದವು.
ಪಟೇಲ್ ಅವರ ಹೋರಾಟ ಹಾಗೂ ದೂರ ದೃಷ್ಟಿಯಿಂದಾಗಿ 1948 ಸೆಪ್ಟೆಂಬರ್ 17ರಂದು ನಿಜಾಮನ ಆಳ್ವಿಕೆಯಿಂದ ಮುಕ್ತಿ ಪಡೆದು, ಭಾರತ ಒಕ್ಕೂಟ ವ್ಯವಸ್ಥೆಗೆ ಒಳಪಟ್ಟವು.
ಅದರ ಪರಿಣಾಮವಾಗಿ 371ಜೆ ವಿಧಿ ಜಾರಿಗೆ ಬಂದು ನಮ್ಮ ಏಳು ಜಿಲ್ಲೆಯ ಜನರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗ ಆಕಾಂಕ್ಷಿಗಳಿಗೆ ವರದಾನವಾಗಿದೆ ಎಂದು ಹೇಳಿದರು.
ಶಾಲೆಯ ಎಸ್. ಡಿ.ಎಂ.ಸಿ.ಅಧ್ಯಕ್ಷ ದೊಡ್ಡ ಕುಮಾರ ಅವರು ಧ್ವಜಾರೋಹಣ ನೆರವೇರಿಸಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಬಸಮ್ಮ ಕಾರ್ಯಕ್ರಮ ಉದ್ಘಾಟಿಸಿ, ಕ್ರೀಡೆಯಲ್ಲಿ,ವಲಯ ಮಟ್ಟದಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿ ವಿದ್ಯಾರ್ಥಿಗಳು ಉತ್ತಮವಾಗಿ ಓದಿ 371ಜೆ ವಿಧಿಯ ಅನುಕೂಲ ಪಡೆಯಬೇಕು ಎಂದರು.
ಶಿಕ್ಷಕರಾದ ಬಸವರಾಜ, ದಿಲ್ಷಾದ್ ಬೇಗಂ, ಚನ್ನಮ್ಮ, ಸುಮತಿ, ಸುಧಾ, ವೈಶಾಲಿ, ಶ್ವೇತಾ, ಉಮ್ಮೆಹಾನಿ, ಶಶಮ್ಮ, ರಾಮಾಂಜಿನೇಯ ಹಾಗೂ ವಿದ್ಯಾರ್ಥಿ ಪ್ರತಿನಿಧಿ ಮಹೇಶ ಮುಂತಾದವರು ಉಪಸ್ಥಿತರಿದ್ದರು.