ಸಹಕಾರ ಕ್ಷೇತ್ರದಲ್ಲಿ ರಾಜ್ಯವನ್ನು ಮುಂಚೂಣಿಗೆ ತರಲು ಕ್ರಮ-ಎಸ್ ಟಿಎಸ್

ಚಿಕ್ಕಬಳ್ಳಾಪುರ ನ.೧೯:ಸಹಕಾರ ಕ್ಷೇತ್ರದಲ್ಲಿ ಕರ್ನಾಟಕವು ರಾಷ್ಟ್ರದಲ್ಲಿಯೇ ಮೊದಲ ಸ್ಥಾನದಲ್ಲಿ ನಿಲ್ಲುವಂತೆ ಮಾಡುತ್ತೇವೆ. ಈ ನಿಟ್ಟಿನಲ್ಲಿ ಪೂರಕ ಕಾರ್ಯಕ್ರಮಕ್ಕೆ ಈಗಾಗಲೇ ಚಾಲನೆ ನೀಡಿದ್ದೇವೆ. ನಾವು ಅನೇಕ ಯೋಜನೆಗಳ ಮೂಲಕ ಹೆಜ್ಜೆಗಳನ್ನಿಟ್ಟಿದ್ದೇವೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ೬೭ನೇ ಅಖಿಲ ಭಾರತ ಸಹಕಾರ ಸಪ್ತಾಹ ೨೦೨೦ರ ನಾಲ್ಕನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಆತ್ಮನಿರ್ಭರ ಯೋಜನೆಯಡಿ ಸಾರ್ವಜನಿಕರಿಗೆ ಆರ್ಥಿಕ ಬಲ ತುಂಬುವ ಕಾರ್ಯಕ್ಕೆ ಸಹಕಾರ ಇಲಾಖೆ ಮೂಲಕ ಕರ್ನಾಟಕದಲ್ಲಿಯೇ ಮೊದಲು ಚಾಲನೆ ನೀಡಿರುವುದಾಗಿ ಕೇಂದ್ರ ಮಂತ್ರಿಗಳಾದ ಪ್ರಹ್ಲಾದ್ ಜೋಶಿ ಅವರು ತಿಳಿಸಿದ್ದು, ನಮಗೆ ಹೆಮ್ಮೆಯ ವಿಷಯವಾಗಿದೆ ಎಂದು ಸಚಿವರು ತಿಳಿಸಿದರು.
ಆತ್ಮನಿರ್ಭರ ಯೋಜನೆಯಡಿ ರಾಜ್ಯ ಸರ್ಕಾರ ಹಾಗೂ ಸಹಕಾರ ಇಲಾಖೆ ನೇತೃತ್ವದಲ್ಲಿ ಆರ್ಥಿಕ ಸ್ಪಂದನ ಕಾರ್ಯಕ್ರಮಕ್ಕೆ ಇತ್ತೀಚೆಗೆ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಚಾಲನೆ ನೀಡಿದರು. ಇದರ ಮೂಲಕ ೩೯,೩೦೦ ಕೋಟಿ ರೂಪಾಯಿ ಸಾಲ ವಿತರಣೆ ಗುರಿಯನ್ನು ಹಾಕಿಕೊಳ್ಳಲಾಗಿದೆ. ಆರ್ಥಿಕ ಸ್ಪಂದನವನ್ನು ೪ ವಿಭಾಗಗಳಾಗಿ ವಿಂಗಡಿಸಿ ಚಾಲನೆ ನೀಡಿದ್ದೇವೆ. ಬೆಂಗಳೂರು, ಮೈಸೂರು, ಕಲಬುರಗಿ ಹಾಗೂ ಬೆಳಗಾವಿ ವಿಭಾಗಗಳ ಮೂಲಕ ಈಗಾಗಲೇ ಸಾಲ ವಿತರಣೆ ಮಾಡಲು ಚಾಲನೆ ನೀಡಲಾಗಿದೆ. ಎಲ್ಲ ಕಡೆಗಳಲ್ಲೂ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದು ಸಚಿವರು ತಿಳಿಸಿದರು.
೧೫ ಲಕ್ಷ ರೈತರಿಗೆ ೧೦ ಸಾವಿರ ಕೋಟಿ ರೂ. ಸಾಲ ವಿತರಣೆ
ಕೋವಿಡ್ ಸಂದರ್ಭ ಎದುರಾದ ಹಿನ್ನೆಲೆಯಲ್ಲಿ ರೈತರಿಗೆ ಪ್ರಸಕ್ತ ಸಾಲಿನಲ್ಲಿ ಸಾಲ ನೀಡುವುದು ಬಹಳ ಕಷ್ಟ ಎಂದೇ ಅಂದಾಜಿಸಲಾಗಿತ್ತು. ಕಳೆದ ವರ್ಷ ನೀಡಲಾಗಿದ್ದ ೧೩೫೦೦ ಕೋಟಿಯಷ್ಟು ಸಾಲವನ್ನೂ ಸಹ ನೀಡಲು ಕಷ್ಟವಾಗಬಹುದು ಎಂಬ ಆತಂಕದ ನಡುವೆಯೂ ನಾವು ೨೪ ಲಕ್ಷ ರೈತರಿಗೆ ೧೫,೩೦೦ ಕೋಟಿ ರೂಪಾಯಿ ಸಾಲ ವಿತರಣೆ ಗುರಿ ಹಾಕಿಕೊಂಡೆವು. ಅದರನ್ವಯ ಈವರೆಗೆ ಅಂದರೆ ನವೆಂಬರ್ ೧೬ರ ವರೆಗೆ ೧೫,೨೨,೦೭೬ ರೈತರಿಗೆ ೯೯೪೫.೮೨ ಕೋಟಿ ರೂಪಾಯಿ ಸಾಲವನ್ನು ನೀಡಿದ್ದೇವೆ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.
ಕೋವಿಡ್ ೧೯ರ ಸಂಕಷ್ಟದ ಕಾಲದಲ್ಲಿ ಲಾಭದಲ್ಲಿರುವ ಸಹಕಾರ ಸಂಸ್ಥೆಗಳಿಂದ ದೇಣಿಗೆ ಸಂಗ್ರಹಿಸಿ ೫೩ ಕೋಟಿ ರೂಪಾಯಿಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಟ್ಟಿದ್ದೇವೆ. ಇನ್ನು ಕೊರೋನಾ ವಾರಿಯರ್ಸ್ ಗಳಾದ ೪೨೬೦೦ ಆಶಾ ಕಾರ್ಯಕರ್ತೆಯರಿಗೂ ಸಹ ತಲಾ ೩೦೦೦ ದಂತೆ ಒಟ್ಟು ೧೨.೭೫ ಕೋಟಿ ರೂಪಾಯಿಯನ್ನು ವಿತರಣೆ ಮಾಡಿದ್ದೇವೆ. ಇದು ನೂರಕ್ಕೆ ನೂರರಷ್ಟು ಯಶಸ್ವಿಯಾಗಿದ್ದಕ್ಕೆ ಸಂತಸವಿದೆ ಎಂದು ಸಚಿವರು ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ಅವರು ಮಾತನಾಡಿ, ಸಹಕಾರ ಅಂದರೆ ಆರ್ಥಿಕ ಸಮೃದ್ಧಿ. ಒಂದು ಕುಟುಂಬ ಆರ್ಥಿಕವಾಗಿ ಬಲಗೊಂಡರೆ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ರಂಗದಲ್ಲಿ ಮುಂದೆ ಬರುತ್ತದೆ. ಹೀಗೆ ಬಲಗೊಳಿಸುವ ಕಾರ್ಯವನ್ನು ಸಹಕಾರ ಇಲಾಖೆ ಮಾಡುತ್ತಿದೆ ಎಂದು ತಿಳಿಸಿದರು.
ಕೋವಿಡ್ ದುಸ್ಥಿತಿಯ ವೇಳೆ ಆರ್ಥಿಕ ಪರಿಸ್ಥಿತಿ ಅಷ್ಟಾಗಿ ಉತ್ತಮವಾಗಿರಲಿಲ್ಲ. ಹೀಗಾಗಿ ಕಳೆದ ಬಾರಿ ರೈತರಿಗೆ ೧೩೫೦೦ ಕೋಟಿ ರೂಪಾಯಿ ಸಾಲ ನೀಡಲಾಗಿತ್ತು. ಆದರೆ, ಈ ಬಾರಿ ಅಷ್ಟು ಪ್ರಮಾಣದ ಸಾಲ ನೀಡಿಕೆ ಕಷ್ಟ ಎಂಬ ಪರಿಸ್ಥಿತಿ ಉಂಟಾಗಿತ್ತು. ಹೀಗಿದ್ದರೂ ಸಹಕಾರ ಸಚಿವರಾದ ಸೋಮಶೇಖರ್ ಅವರು ೧೫೩೦೦ ಕೋಟಿ ರೂಪಾಯಿ ಸಾಲ ನೀಡಿಕೆ ಗುರಿಯನ್ನು ಹಾಕಿಕೊಂಡು ಸಾಲ ನೀಡುವಲ್ಲಿ ಶ್ರಮವಹಿಸುತ್ತಿದ್ದಾರೆ ಎಂದು ತಿಳಿಸಿದರು.
ನಗರಾಭಿವೃದ್ಧಿ ಸಚಿವರಾದ ಬಿ.ಎ. ಬಸವರಾಜು ಅವರು ಮಾತನಾಡಿ, ಸಹಕಾರ ಸಚಿವರಾದ ಸೋಮಶೇಖರ್ ಅವರು ಅನೇಕ ಉತ್ತಮ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ. ಜೊತೆಗೆ ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವರಾದ ಡಾ. ಸುಧಾಕರ್ ಅವರು ಅಭಿವೃದ್ಧಿ ಪೂರಕ ಕೆಲಸ ಮಾಡುತ್ತಿದ್ದು, ನಗರಾಭಿವೃದ್ಧಿ ಸಂಬಂಧ ೭೭ ಕೋಟಿ ರೂ. ಅನುದಾನವನ್ನು ಪ್ರಸ್ತಾಪಿಸಿದ್ದು, ಇದಕ್ಕೆ ನಾನು ಒಪ್ಪಿಗೆ ಸೂಚಿಸಿದ್ದೇನೆ. ನಗರಾಭಿವೃದ್ಧಿಗೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ತಿಳಿಸಿದರು.
ಸಂಸದರಾದ ಬಚ್ಚೇಗೌಡ ಮಾತನಾಡಿ, ಕೃಷಿ ಚಟುವಟಿಕೆಗೆ ಪೂರಕವಾಗಿ ಸಹಕಾರ ಇಲಾಖೆ ಕೆಲಸ ಮಾಡುತ್ತಿದೆ. ರೈತರಿಗೆ ಆರ್ಥಿಕ ನೆರವು ನೀಡಿ ಕೃಷಿ ಚಟುವಟಿಕೆಗೆ ಬೆನ್ನೆಲುಬಾಗಿ ನಿಲ್ಲುವಲ್ಲಿ ರಾಷ್ಟ್ರದಲ್ಲಿಯೇ ಕರ್ನಾಟಕವು ಮೂರನೇ ಸ್ಥಾನದಲ್ಲಿದ್ದು, ಅದು ಸಚಿವರಾದ ಸೋಮಶೇಖರ್ ಅವರ ಅವಧಿಯಲ್ಲಿ ಒಂದನೇ ಸ್ಥಾನಕ್ಕೆ ಬರುವಂತಾಗಲಿ ಎಂದು ತಿಳಿಸಿದರು.