ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ

ಬೀದರ್:ಜೂ.5: ಇಲ್ಲಿಯ ಅರುಣೋದಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.

ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಪ್ರೋತ್ಸಾಹಿಸಲಾಯಿತು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮೂವರು ಮಕ್ಕಳು ಸಾಧನೆ ತೋರಿದ ಪ್ರಯುಕ್ತ ಪಾಲಕ ಸುಭಾಷ್ ಪಾಟೀಲ ಅವರನ್ನೂ ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಾಮಾನ್ಯ ಜ್ಞಾನವನ್ನೂ ಪಡೆದುಕೊಳ್ಳಬೇಕು. ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಋಷಿಕೇಶ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕುಶಾಲ್ ಪಾಟೀಲ ಗಾದಗಿ ಸಲಹೆ ಮಾಡಿದರು.

ಛಲವಿದ್ದರೆ ಸಾಧನೆಗೆ ಯಾವುದೂ ಅಡ್ಡಿ ಆಗುವುದಿಲ್ಲ. ಮಾಜಿ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ ಮೊದಲಾದವರು ಇದಕ್ಕೆ ನಿದರ್ಶನವಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ನಿಕಟಪೂರ್ವ ಅಧ್ಯಕ್ಷ ಪ್ರೊ. ಸಿದ್ರಾಮಪ್ಪ ಮಾಸಿಮಾಡೆ ನುಡಿದರು.

ಶಾಲೆ ಆಡಳಿತಾಧಿಕಾರಿ ಸಂತೋಷಕುಮಾರ ಮಂಗಳೂರೆ, ಪ್ರೌಢಶಾಲೆ ಮುಖ್ಯಶಿಕ್ಷಕಿ ಈಶ್ವರಿ ಬೇಲೂರೆ, ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಬಸವರಾಜ ಮುಗುಟಾಪುರೆ ಇದ್ದರು.

ನೀಲಮ್ಮ ಗಜಲೆ ನಿರೂಪಿಸಿದರು. ಸಾರಿಕಾ ಬಿರಾದಾರ ವಂದಿಸಿದರು.