ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ವತಿಯಿಂದ 2 ದಿನಗಳ ಕಾರ್ಯಾಗಾರ

ಮೈಸೂರು: ಜ.13:- ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ವತಿಯಿಂದ ಜನವರಿ 18 ಮತ್ತು 19 ರಂದು 2 ದಿನಗಳ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು ವಿವಿಧ ರಾಜ್ಯಗಳಿಂದ ಗಣ್ಯರು ಕಾರ್ಯಾಗಾರದ ನಿಮಿತ್ತ ಮೈಸೂರಿಗೆ ಆಗಮಿಸುತ್ತಿದ್ದು, ವ್ಯವಸ್ಥಿತವಾಗಿ ಕಾರ್ಯಾಗಾರವನ್ನು ಆಯೋಜಿಸಿ ಎಂದು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ. ರಾಕೇಶ್ ಕುಮಾರ್ ಅವರು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯಾಗಾರದ ಕುರಿತು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ, ಒಡಿಸ್ಸಾ, ಪುದುಚೇರಿ, ಲಕ್ಷದೀಪ, ಹಾಗೂ ಕರ್ನಾಟಕ ರಾಜ್ಯಗಳಿಂದ ಕ್ಯಾಬಿನೇಟ್ ಮಂತ್ರಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಭಾರತ ಸರ್ಕಾರದ ವಿವಿಧ ಅಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ. ಸಮಿತಿಯ ಅಧಿಕಾರಿಗಳು ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ಹಂಚಿಕೆ ಮಾಡಿರುವ ಕಾರ್ಯವನ್ನು ವ್ಯವಸ್ಥಿತವಾಗಿ ನಿರ್ವಹಿಸಿ ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳಾದ ಕೆ ವಿ ರಾಜೇಂದ್ರ ಅವರು ಮಾತನಾಡಿ ಶಿಷ್ಠಾಚಾರ, ಭದ್ರತೆ, ವಾಹನ, ವೇದಿಕೆ, ಊಟೋಪಚಾರ, ಸ್ವಾಗತ ಮತ್ತು ಆಮಂತ್ರಣ ವಸತಿ, ಸಾರಿಗೆ, ಡಿಜಿಟಲ್ ಪ್ರಚಾರ, ಮೈಸೂರು ದರ್ಶನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಸಮಿತಿಗಳಿಗೆ ಅಧಿಕಾರಿಗಳನ್ನು ಹಂಚಿಕೆ ಮಾಡಲಾಗಿದ್ದು, ಅದರಂತೆ ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ನಿಯೋಜಿಸಿರುವ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಸಮಿತಿಗಳ ಜವಾಬ್ದಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ನೋಡಿಕೊಳ್ಳಿ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರುಗಳಾದ ಸತ್ಯಶ್ರೀ ಮತ್ತು ಗಣೇಶಪ್ಪ, ಜಂಟಿ ನಿರ್ದೇಶಕರಾದ ಮಾಲತಿ, ಮೈಸೂರು ಮೆಡಿಕಲ್ ಕಾಲೇಜಿನ ಮುಖ್ಯ ಆಡಳಿತಾಧಿಕಾರಿಗಳಾದ ರಕ್ಷಿತ್ ಹಾಗೂ ಪರಿಶಿಷ್ಟ ವರ್ಗಗಳ ಇಲಾಖೆಯ ಯುವಜನ ಸಮನ್ವಯಾಧಿಕಾರಿಗಳಾದ ಮುನಿರಾಜು ಉಪಸ್ಥಿತರಿದ್ದರು.