
ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು, ಸೆ. ೧೧- ರಾಜ್ಯ ಸರ್ಕಾರವು ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆಗಳನ್ನು ಮಾನವೀಯತೆಯಿಂದ ಪರಿಶೀಲಿಸಬೇಕು. ಅವರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಇಂದು ಬೆಂಗಳೂರಿನಲ್ಲಿ ನಡೆದಿರುವ ಖಾಸಗಿ ಸಾರಿಗೆ ಬಂದ್‌ನ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಈ ಬಂದ್‌ನಿಂದ ಸರ್ಕಾರಿ ಸಾರಿಗೆಗ ಪರ್ಯಾಯವಾದ ಖಾಸಗಿ ಸಾರಿಗೆ ಜಾಲ ಸಂಪೂರ್ಣವಾಗಿ ಸ್ಥಗಿತವಾಗಿದೆ. ವಿಮಾನ ನಿಲ್ದಾಣಕ್ಕೆ ತೆರಳುವವರು, ಶಾಲಾ ಮಕ್ಕಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಪ್ರತಿಷ್ಠೆ ಪಕ್ಕಕ್ಕಿಟ್ಟು, ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆ ಈಡೇರಿಸಬೇಕು. ಅವರ ಬೇಡಿಕೆಗಳು ಈಡೇರಿಸಲಾಗದ ಅಸಾಧ್ಯ ಬೇಡಿಕೆಗಳಲ್ಲ. ಅವರಿಗೂ ಕುಟುಂಬಗಳಿವೆ ಎಂಬುದನ್ನು ಸರ್ಕಾರ ಮರೆಯಬಾರದು ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.
ರಾಜ್ಯ ಸರ್ಕಾರದ ಗ್ಯಾರಂಟಿಗಳ ಅಡ್ಡ ಪರಿಣಾಮದ ತೀವ್ರತೆ ಜನರಿಗೆ ತಟ್ಟುತ್ತಿದೆ. ಸರ್ಕಾರಿ ಸೌಲಭ್ಯಗಳ ಹಂಚಿಕೆಯಲ್ಲಿ ಅಸಮಾನತೆ, ಪಕ್ಷಪಾತ ಅಜಾಗರಕತೆ ಸೃಷ್ಟಿಸಿದೆ. ಅವೈಜ್ಞಾನಿಕ ಅರೆಬೆಂದ ಶಕ್ತಿ ಯೋಜನೆಯ ಫಲವಾಗಿ ಇಂದು ಖಾಸಗಿ ಸಂಚಾರ ವ್ಯವಸ್ಥೆ ಬುಡು ಮೇಲಾಗಿದೆ. ಸಾಲ ಸೂಲ ಮಾಡಿ ಕ್ಯಾಬ್, ಆಟೋ ಓಡಿಸಿಕೊಂಡು ಬದುಕುತ್ತಿದ್ದವರು ಬೀದಿ ಪಾಲಾಗಿದ್ದಾರೆ.ಸರ್ಕಾರಿ ಬಸ್ ಜಾಲವನ್ನು ಸರ್ಕಾರ ಹಾಳು ಮಾಡಿದೆ. ಅನೇಕರ ಬದುಕಿಗೆ ಗ್ಯಾರಂಟಿ ಇಲ್ಲದಂತೆ ಮಾಡಿದೆ ಎಂದು ಟೀಕಿಸಿದ್ದಾರೆ. ಗ್ಯಾರಂಟಿ ಬಾಧಿತರ ಬದುಕಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿರುವ ಅವರು, ಕಾಟಾಚಾರಕ್ಕೆ ಕರೆದು ಮಾತನಾಡುವುದಲ್ಲ. ವಾಸ್ತವತೆಗೆ ತಕ್ಕಂತೆ ಕಷ್ಟದಲ್ಲಿರುವವರಿಗೆ ನೆರವಾಗಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.