ಸಾರಿಗೆ ಸಿಬ್ಬಂದಿಗೆ ವಸತಿ ಗೃಹ ನಿರ್ಮಿಸಿ

ಬೀದರ್:ನ.21: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವಸತಿಗೃಹ, ಅತಿಥಿ ಗೃಹ ಹಾಗೂ ಕಲ್ಯಾಣ ಮಂಟಪ ನಿರ್ಮಿಸಿಕೊಡಬೇಕು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಒತ್ತಾಯಿಸಿದ್ದಾರೆ.

ಕಲಬುರ್ಗಿಯಲ್ಲಿ ಶುಕ್ರವಾರ ಸಾರಿಗೆ ಸಚಿವರೂ ಆದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಈ ಕುರಿತು ಮನವಿ ಪತ್ರ ಸಲ್ಲಿಸಿದ್ದಾರೆ.

ಜಿಲ್ಲಾ ಕೇಂದ್ರ ಬೀದರ್‍ನಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ಕಚೇರಿ, ಬೀದರ್ ಘಟಕ-1, ಬೀದರ್ ಘಟಕ-2 ಕಚೇರಿ, ವಿಭಾಗೀಯ ಕಾರ್ಯಾಗಾರಗಳು ಇವೆ. ಬಹಳಷ್ಟು ಅಧಿಕಾರಿಗಳು ಹಾಗೂ ಸಿಬ್ಬಂದಿ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಸಿಬ್ಬಂದಿಗೆ, ವಸತಿಗೃಹ, ಅತಿಥಿ ಗೃಹ ಹಾಗೂ ಕಲ್ಯಾಣ ಮಂಟಪ ಇಲ್ಲದ ಕಾರಣ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಗಮನ ಸೆಳೆದರು.

ಮನೆ ಬಾಡಿಗೆ ದುಬಾರಿಯಾಗಿದೆ. ಮಕ್ಕಳ ಮದುವೆ ಹಾಗೂ ಇತರ ಕಾರ್ಯಕ್ರಮಗಳಿಗಾಗಿ ಕಲ್ಯಾಣ ಮಂಟಪ ಬಾಡಿಗೆ ಭರಿಸುವುದೂ ಕಷ್ಟಕರವಾಗಿದೆ. ಹೀಗಾಗಿ ಸಿಬ್ಬಂದಿ ವಸತಿ ಗೃಹ, ಅತಿಥಿ ಗೃಹ ಹಾಗೂ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಬೇಡಿಕೆ ಮಂಡಿಸಿದರು.

ಎನ್‍ಇಕೆಆರ್‍ಟಿಸಿ ಅಧ್ಯಕ್ಷ ರಾಜಕುಮಾರ ಪಾಟೀಲ ತೆಲ್ಕೂರ್, ಕೆಕೆಆರ್‍ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ್, ಶಾಸಕ ಬಸವರಾಜ ಮತ್ತಿಮೂಡ್, ಎಂಎಸ್‍ಐಎಲ್ ನಿರ್ದೇಶಕ ಬಾಬುವಾಲಿ, ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಾಬುರಾವ್ ಕಾರಬಾರಿ, ಮುಖಂಡ ಗುರುನಾಥ ಜ್ಯಾಂತಿಕರ್ ಇದ್ದರು.