ಸಾರ್ವಜನಿಕರಿಗೆ ನೀರಿನ ಶೇಖರಣೆ, ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಿ: ಡಾ.ಕೆ.ವಿ.ರಾಜೇಂದ್ರ

ಸಂಜೆವಾಣಿ ನ್ಯೂಸ್
ಮೈಸೂರು,ಮೇ23:- ನೀರಿನ ಮೂಲಗಳು ಕಲುಷಿತಗೊಳ್ಳದಂತೆ ಎಚ್ಚರ ವಹಿಸಬೇಕು. ಕುಡಿಯುವ ನೀರಿÀ£ ಮೂಲಗಳಿಗೆ ಕಲುಷಿತ ನೀರು ಸೇರ್ಪಡೆಯಾಗುತ್ತಿರುವ ಬಗ್ಗೆ ದೂರು ಬಂದಲ್ಲಿ ತಕ್ಷಣ ಆಯಾ ತಾಲೂಕಿನ ತಹಶೀಲ್ದಾರ್, ಕಾರ್ಯ ನಿರ್ವಹಣಾಧಿಕಾರಿ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಕಲುಷಿತ ನೀರು ಶುದ್ಧ ನೀರಿನ ಮೂಲಗಳಿಗೆ ಸೇರದಂತೆ ತಡೆಯುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.
ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯಾ ತಾಲೂಕಿನ ತಹಶೀಲ್ದಾರ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ, ಮಹಾನಗರ ಪಾಲಿಕೆಯ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಹಾಗೂ ನಗರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಕುಡಿಯುವ ನೀರು ಪೂರೈಕೆ ಸಂಬಂಧ ಸಭೆ ನಡೆಸಿ ಮಾತನಾಡಿದ ಅವರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಗ್ರಾಮ ಸ್ವಚ್ಛತೆ ಕುರಿತು ಗ್ರಾಮದ ಕೆಲವು ವಾರ್ಡ್‍ಗಳಲ್ಲಿನ ಚರಂಡಿ ನಿರ್ವಹಣೆ ಹಾಗೂ ಸ್ವಚ್ಛತೆಯ ಬಗ್ಗೆ ಅಧಿಕಾರಿಗಳು ಅಗತ್ಯವಾಗಿ ಕ್ರಮವಹಿಸಬೇಕು ಎಂದು ತಿಳಿಸಿದರು.
ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಗ್ರಾಮದಲ್ಲಿ ನೈರ್ಮಲ್ಯ ಕಾಪಾಡಲು ನೀರು ಗಂಟಿ, ಆಶಾ ಕಾರ್ಯಕರ್ತೆಯರು ಗ್ರಾಮದ ಪ್ರತಿ ಮನೆಗೂ ಭೇಟಿ ನೀಡಿ ನೀರಿನ ಶೇಖರಣೆ ಹಾಗೂ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಹವಾಮಾನ ಬದಲಾವಣೆ ಮತ್ತಿತರ ಕಾರಣಗಳಿಂದ ಕರಳು ಬೇನೆ (ಗ್ಯಾಸ್ಟ್ರೋ ಎಂಟರೈಟಿಸ್) ಸೇರಿದಂತೆ ಕರುಳು ಸಂಬಂಧಿ ರೋಗಕ್ಕೀಡಾಗುವವರಿಗಾಗಿ ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ 5 ಬೆಡ್ ಕಾಯ್ದಿರಿಸಬೇಕು. ಈ ಸಂಬಂಧ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳು ದಾಖಲಾದರೆ ಸಂಬಂಧಪಟ್ಟ ತಾಲೂಕು ಆಸ್ಪತ್ರೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಹೋಟೆಲ್‍ಗಳಲ್ಲಿ, ರಸ್ತೆ ಬದಿಯ ಪಾನಿಪುರಿ ಇನ್ನಿತರ ಫಾಸ್ಟ್ ಫುಡ್ ಸೆಂಟರ್ ಗಳಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ತಿಳಿಸಬೇಕು. ಜತೆಗೆ ಶುದ್ಧ ಕುಡಿಯುವ ನೀರನ್ನು ಗ್ರಾಹಕರಿಗೆ ನೀಡಬೇಕು ಹಾಗೂ ಬಿಸಿ ನೀರು ನೀಡಬೇಕು ಎಂದು ಸಲಹೆ ನೀಡಬೇಕು ಎಂದರು.
ಎತ್ತರ ಇರುವ ಬೋರ್ವೆಲ್‍ಗಳ ಸುತ್ತಲು ಪ್ಲಾಟ್ ಫಾರಂ ನಿರ್ಮಿಸಿ ಚರಂಡಿ ನೀರು ಹೋಗದಂತೆ ತಡೆಯಬೇಕು. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ ಸಹಾಯವಾಣಿ 0821-252 6355 ಅಥವಾ ಸಂ. 0821-2423800, 1077 ಕಂಟ್ರೋಲ್ ರೂಂ ನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಕಾರ್ಯಪಾಲಕ ಅಭಿಯಂತರರು ಹಾಗೂ ಎಲ್ಲಾ ತಾಲೂಕಿನಲ್ಲಿ ತಹಶೀಲ್ದಾರ್ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.