ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಒದಗಿಸಿ:ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

(ಸಂಜೆವಾಣಿ ವಾರ್ತೆ)
ವಿಜಯಪುರ:ಆ.11: ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗುರುವಾರ ದೇವರಹಿಪ್ಪರಗಿ ತಾಲೂಕಾ ಕಚೇರಿ, ಪಟ್ಟಣ ಪಂಚಾಯತ್ ಕಚೇರಿ, ರೈತ ಸಂಪರ್ಕ ಕೇಂದ್ರ, ಪಟ್ಟಣ ಪಂಚಾಯತ್ ಹೊಸ ಕಟ್ಟಡ, ಹೊಸದಾಗಿ ನಿರ್ಮಿಸಲುದ್ದೇಶಿಸಿರುವ ಮಿನಿವಿಧಾನಸೌಧದ ಸ್ಥಳ ಪರಿಶೀಲನೆ ನಡೆಸಿದ ಅವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಚಾಲ್ತಿಯಲ್ಲಿರುವ ತಾಲೂಕಿನ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಪಟ್ಟಣ ಪಂಚಾಯತ್ ನೂತನ ಕಟ್ಟಡ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ತಾಲೂಕಿನಾದ್ಯಂದ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ಮೂಲಕ ಯಾವುದೇ ಸಾರ್ವಜನಿಕರಿಗೆ ತೊಂದರೆಯಾಗದಂತೆ ಅವರ ದೂರು-ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕರ ದೂರುಗಳಿಗೆ ನಿಗದಿತ ಕಾಲಾವಧಿಯಲ್ಲಿ ಪರಿಹಾರ ಒದಗಿಸಬೇಕು. ಸಾರ್ವಜನಿಕರನ್ನು ಪದೇ ಪದೇ ಕಚೇರಿಗೆ ಅಲೆದಾಟ ತಪ್ಪಿಸಿ ಅವರ ದೂರುಗಳನ್ನು ಆಲಿಸಿ ಸಮಸ್ಯೆಗಳನ್ನು ಇತ್ಯರ್ಥಪಡಿಸಿಬೇಕು. ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಕಾರ್ಯನಿರ್ವಹಣೆಯಲ್ಲಿ ನ್ಯೂನ್ಯತೆಗಳು ಕಂಡು ಬಂದಲ್ಲಿ ಶೀಘ್ರದಲ್ಲಿ ಸರಿಪಡಿಸಿಕೊಂಡು ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯ ಸರ್ಕಾರದ 5 ಗ್ಯಾರಂಟಿಗಳ ಸದುಪಯೋಗವಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಅರ್ಹರಿಗೆ ಯೋಜನೆ ಲಾಭ ದೊರಕಿಸಲು ಕಾರ್ಯನಿರ್ವಹಿಸಬೇಕು. ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವ್ಯತ್ಯವಾಗದಂತೆ ನೋಡಿಕೊಳ್ಳಬೇಕು. ಅನುಷ್ಠಾನ ಕಾರ್ಯದಲ್ಲಿ ಸಾರ್ವಜನಿಕರ ಸಹಕಾರ ಪಡೆದುಕೊಂಡು ಪರಿಣಾಮಕಾರಿಯಾಗಿ ಯೋಜನೆಗಳ ಅನುಷ್ಠಾನ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದ ಅವರು, ತಾಲೂಕಾ ಕಚೇರಿಗಾಗಿ ಹೊಸದಾಗಿ ಜಾಗೆ ಗುರುತಿಸುವ ಕಾರ್ಯ ನಡೆದಿದೆ. ಈಗಾಗಲೇ ಒಂದರೆಡು ಸ್ಥಳ ಗುರುತಿಸಲಾಗಿದೆ. ಸಾರ್ವಜನಿಕರ ಅನುಕೂಲ ಗಮನದಲ್ಲಿಟ್ಟುಕೊಂಡು ಸೂಕ್ತ ಜಾಗ ಗುರುತಿಸಿ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ದೇವರಹಿಪ್ಪರಗಿ ತಹಶೀಲ್ದಾರ ಪ್ರಕಾಶ, ಶಿರಸ್ತೇದಾರ ಎಂ.ಕೆ.ದೇಸಾಯಿ, ಕೃಷಿ ಇಲಾಖೆ ಅಧಿಕಾರಿಗಳು, ಸೇರಿದಂತೆ ತಾಲೂಕಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.