ಸಿಂಗನೋಡಿ ಗ್ರಾ.ಪಂಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭೇಟಿ, ಪರಿಶೀಲನೆ

ರಾಯಚೂರು,ಸೆ.೦೨- ತಾಲೂಕಿನ ಸಿಂಗನೋಡಿ ಗ್ರಾಮ ಪಂಚಾಯತಿಯಲ್ಲಿರುವ ನರೇಗಾ ಯೋಜನೆಯಡಿ ಅನುಷ್ಠಾನಗೊಳಿಸಲಾದ ಕಾಮಗಾರಿಗಳನ್ನು ಹಾಗೂ ಗ್ರಾಮದ ಆರೋಗ್ಯ ಕೇಂದ್ರಕ್ಕೆ ಅಬಕಾರಿ ಆಯುಕ್ತ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಜೆ.ರವಿಶಂಕರ ಅವರು ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಸೆ.೦೧ರ(ಶುಕ್ರವಾರ) ತಾಲೂಕನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿರುವ ನರೇಗಾ ಕಾಮಗಾರಿಗಳನ್ನು ಪರಿಶೀಲಿಸಿದರು ಮತ್ತು ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ, ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಮತ್ತು ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.
ಆರೋಗ್ಯ ಮತ್ತು ಕ್ಷೇಮಾ ಕೇಂದ್ರಕ್ಕೆ ಭೇಟಿ ನೀಡಿ ಔಷಧಗಳ ಲಭ್ಯತೆ ಇರುವ ಬಗ್ಗೆ ಪರಿಶೀಲನೆ ಮಾಡಿದರು. ನಂತರ ಮುರಾರ್ಜಿ ಶಾಲೆಗೆ ತೆರಳಿ ಮಕ್ಕಳ ಕಲಿಕಾ ಬಗ್ಗೆ ಪರಿಶೀಲನೆ ನಡೆಸಿದರು. ತದನಂತರ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ, ಗ್ರಾಮದಲ್ಲಿರುವ ಸರಕಾರಿ ಪ್ರೌಢ ಶಾಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಂಡಿರುವ ಅಡುಗೆ ಕೋಣೆ, ಭೋಜನಾಲಯ ಮತ್ತು ಆಟದ ಮೈದಾನ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ರಾಯಚೂರು ಜಿ.ಪಂ ಯೋಜನಾ ನಿರ್ದೇಶಕರು ಪ್ರಕಾಶ.ವಿ, ರಾಯಚೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಪವಾರ್, ಡಿ.ಹೆಚ್.ಒ ಸುರೇಂದ್ರ ಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹನುಮಂತಪ್ಪ, ನರೇಗಾ ಸಿಬ್ಬಂದಿಗಳು ಹಾಗೂ ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.