ವಿಜಯಪುರ:ಎ.13: ವಿಧಾನ ಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ 33-ಸಿಂದಗಿ ವಿಧಾನಸಭಾ ಮತಕ್ಷೇತ್ರದ ಚುನಾವಣಾಧಿಕಾರಿಗಳಾದ ಶಿದ್ರಾಮ ಮಾರಿಹಾಳ ಅವರ ನೇತೃತ್ವದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯು ಬುಧವಾರ ಸಿಂದಗಿಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಜರುಗಿತು.
ಸಿದ್ರಾಮ ಮಾರಿಹಾಳ ಅವರು ಮಾತನಾಡಿ, ಏ.13 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಸಲು ಚುನಾವಣಾಧಿಕಾರಿಗಳ ಕಚೇರಿಯಿಂದ 100 ಮೀ. ವ್ಯಾಪ್ತಿಯೊಳಗೆ ಅಭ್ಯರ್ಥಿಯು ಒಳಗೊಂಡು 5 ಜನರಿಗೆ ಹಾಗೂ 3 ವಾಹನಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ನಾಮಪತ್ರ ಸಲ್ಲಿಸಲು ನಾಳೆ (ಏ.13) ಬೆಳಿಗ್ಗೆ 11 ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ನಾಮಪತ್ರ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ 10000/- ಹಾಗೂ ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳು ರೂ 5000/-ಗಳಂತೆ ಠೇವಣಿ ಮೊತ್ತ ಭರಿಸಿ ರಶೀದಿಯನ್ನು ಪಡೆದು ನಾಮಪತ್ರದೊಂದಿಗೆ ಸಲ್ಲಿಸುವಂತೆ ತಿಳಿಸಿದರು.
ಮಾದರಿ ನೀತಿ ಸಂಹಿತೆಯನ್ನು ಪಾಲಿಸುವಂತೆ ಹೇಳಿದರು. ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿಗಳು,ವಿವಿಧ ರಾಜಕೀಯ ಪಕ್ಷದ ಪ್ರತಿನಿಧಿಗಳು ಈ ಸಂದರ್ಭ ಉಪಸ್ಥಿತರಿದ್ದರು.