ಸಿಂಧೂರಿ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದೇ: ಸಾ.ರಾ.ಮಹೇಶ್

ಮೈಸೂರು. ಜೂ.9: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದೇನೆಯೇ ಹೊರತು ಎಂದೂ ಅವರನ್ನು ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡುವಂತೆ ಒತ್ತಾಯ ಮಾಡಿಲ್ಲ ಎಂದು ಶಾಸಕ ಸಾ.ರಾ.ಮಹೇಶ್ ಸ್ಪಷ್ಟಪಡಿಸಿದರು.
ತಮ್ಮ ಮೈಸೂರಿನ ಕಛೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು ಅಂದಿನ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳ ನಡುವೆ ಉಂಟಾದ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ಸರ್ಕಾರಿ ನಿಯಮಾವಳಿಗಳಂತೆ ವರ್ಗಾವಣೆ ಮಾಡಲಾಗಿದೆ ಎಂದರು.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಮೈಸೂರು ಜಿಲ್ಲೆಯಿಂದ ವರ್ಗಾವಣೆಯಾಗಿ ನಿರ್ಗಮಿಸುವ ಸಂದರ್ಭದಲ್ಲಿ ತಮ್ಮ ಕರ್ತವ್ಯ ಲೋಪ ಮತ್ತು ವೈಫಲ್ಯಗಳನ್ನು ಮುಚ್ಚಿಡುವ ಪ್ರಯತ್ನದಲ್ಲಿ ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಮೈಸೂರು ನಗರ ವ್ಯಾಪ್ತಿಯಲ್ಲಿ ಭೂ ಒತ್ತುವರಿಯನ್ನು ತೆರವುಗೊಳಿಸಲು ಪ್ರಯತ್ನಿಸಿದ್ದೇ ಕಾರಣ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿರುತ್ತಾರೆ.
ಆದರೆ ವಾಸ್ತವದಲ್ಲಿ ಇವರ ಎಂಟು ತಿಂಗಳ ಅಧಿಕಾರಾವಧಿಯಲ್ಲಿ ನ್ಯಾಯಾಲಯದ ಆದೇಶದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದವರು ಕೇರ್ಗಳ್ಳಿ ಗ್ರಾಮದ ಕೆರೆಯ ಹೂಳೆತ್ತುವ ಕಾರ್ಯವನ್ನು ಕೈಗೊಂಡಿರುವುದನ್ನು ಹೊರತುಪಡಿಸಿ ಇಡೀ ಮೈಸೂರು ನಗರ ವ್ಯಾಪ್ತಿಯಲ್ಲಿ ಒಂದೇ ಒಂದು ಗುಂಟೆ ಒತ್ತುವರಿಯನ್ನು ತೆರವುಗೊಳಿಸುವ ಪ್ರಯತ್ನವನ್ನು ಮಾಡಿರುವುದಿಲ್ಲ. ಪ್ರಸ್ತುತದಲ್ಲಿಯೂ ಕೂಡ ಅವರು ಸರ್ಕಾರಿ ಸೇವೆಯಲ್ಲಿಯೇ ಇದ್ದಾರೆ.
ಹಾಗಾಗಿ ಅವರು ಭೂ ಒತ್ತುವರಿಗೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸಿದ್ದರೆ ಆ ಮಾಹಿತಿಗಳ ಆಧಾರದ ಮೇಲೆ ಎಲ್ಲೆಲ್ಲಿ, ಯಾರು, ಯಾರು ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿದ್ದಾರೆ. ಆ ಅಕ್ರಮದಲ್ಲಿ ಭಾಗಿಯಾಗಿರುವವರು ಯಾರು ಎಂಬ ಮಾಹಿತಿಯನ್ನು ರೋಹಿಣಿ ಸಿಂಧೂರಿಯವರಿಂದ ಪಡೆದು ಆ ಬಗ್ಗೆ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯೊಬ್ಬರ ನೇತೃತ್ವದ ಸಮಿತಿಯಿಂದ ತನಿಖೆ ನಡೆಸಿ ಭೂ ಒತ್ತುವರಿಯ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಇಲ್ಲದಿದ್ದರೆ ಅವರ ಆರೋಪಗಳು ಸುಳ್ಳು ಎಂದು ಸಾಬೀತಾಗುತ್ತದೆ. ಅವರ ಲೋಪಗಳನ್ನು ಮುಚ್ಚಿಡಲು ಈ ರೀತಿ ವೃಥಾ ಆರೋಪಗಳನ್ನು ಮಾಡಿರುತ್ತಾರೆಂದು ಮನದಟ್ಟಾಗುತ್ತದೆ. ಹಾಗಾಗಿ ತಕ್ಷಣದಲ್ಲೇ ಈ ಬಗ್ಗೆ ಸಮಿತಿಯೊಂದನ್ನು ರಚಿಸಿ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದರು.