ಸಿಂಧೂರಿ – ಶಿಲ್ಪಾ ಬಿಕ್ಕಟ್ಟು ಸಿಎಸ್ ಪ್ರವೇಶ

ಮೈಸೂರು, ಜೂ.೪- ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ನಗರ ಪಾಲಿಕೆ ಆಯುಕ್ತರಾದ ಶಿಲ್ಪಾ ನಾಗ್ ನಡುವೆ ಮಾತಿನ ಸಮರ ಮುಂದುವರಿದಿರುವ ಬೆನ್ನಲ್ಲೆ,ಬಿಕ್ಕಟ್ಟು ಶಮನಕ್ಕೆ ಸರ್ಕಾರ ಮುಖ್ಯಕಾರ್ಯದರ್ಶಿ ರವಿಕುಮಾರ್ ಅವರು ಮೈಸೂರು ಭೇಟಿ ನೀಡಲಿದ್ದು ಎರಡು ದಿನದಲ್ಲಿ ಸಮಸ್ಯೆ ಇತ್ಯರ್ಥವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಇಬ್ಬರು ಅಧಿಕಾರಿಗಳ ನಡುವೆ ಜಟಾಪಟಿ ತಾರಕಕ್ಕೇರಿ ನಿನ್ನೆ ಶಿಲ್ಪಾ ನಾಗ್ ಅವರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮೈಸೂರು ನಗರ ಪಾಲಿಕೆ ಆಯುಕ್ತರ ಹುದ್ದೆ ಮತ್ತು ಐಪಿಎಸ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು,
ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಜಿಲ್ಲೆಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳ ನಡುವೆ ತಲೆದೋರಿರುವ ಬಿಕ್ಕಟ್ಟಿನ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದಿದ್ದೇನೆ. ಎಲ್ಲವೂ ಶೀಘ್ರ ಬರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್ ಯಾವುದೇ ಕಾರಣಕ್ಕೂ ಶಿಲ್ಪಾನಾಗ್ ಅವರ ರಾಜೀನಾವೆಯನ್ನು ಅಂಗೀಕರಿಸವುದಿಲ್ಲ. ಅವರೊಬ್ಬ ಸಮರ್ಥ ಅಧಿಕಾರಿಯಾಗಿದ್ದು, ರಾಜೀನಾಮೆ ವಾಪಸ್ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಕೊರೊನಾ ಸೋಂಕಿನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಇಬ್ಬರು ಅಧಿಕಾರಿಗಳ ನಡುವೆ ಭಿನ್ನಾಭಿಪ್ರಾಯ ತಲೆದೋರಿದೆ. ಸಮಸ್ಯೆ ಇತ್ಯರ್ಥಕ್ಕೆ ಪ್ರಯತ್ನಿಸುತ್ತೇನೆ ಎಂದು ಹೇಳಿದರು.
ಮೈಸೂರಿಸನಲ್ಲಿ ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಸಾಕಷ್ಟು ಸವಾಲಗುಳಿವೆ. ಜಿಲ್ಲೆಯಲ್ಲಿ ಅಧಿಕಾರಿಗಳು ಸಾಧ್ಯವಾದಷ್ಟು ಕೆಲಸ ಮಾಡುತ್ತಿದ್ದಾರೆ. ಇಂತಹ ಕಠಿಣ ಸಂದರ್ಭದಲ್ಲಿ ಎಲ್ಲ ಪಕ್ಷ ಬೇಧ ಮರೆತು ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.