ಸಿಇಓ ಶಶಿಧರ್ ಕುರೇರ್ ರವರಿಗೆ ಬೀಳ್ಕೊಡುಗೆ

ಜಿಲ್ಲೆಯ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಬೇಕು – ಡಿಸಿ
ರಾಯಚೂರು,ಆ.೪- ರಾಯಚೂರು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಶಿಧರ್ ಕುರೇರ್ ಅವರು ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ವರ್ಗಾವಣೆಯಾದ ಹಿನ್ನೆಲೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ವತಿಯಿಂದ ಗುರುವಾರ ಸಂಜೆ ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆತ್ಮೀಯ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಭಾರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಚಂದ್ರಶೇಖರ್ ನಾಯಕ ರವರು ಸರ್ಕಾರಿ ನೌಕರಿಯಲ್ಲಿ ಕೆಲಸ ಮಾಡುತ್ತಿರುವ ನಾವುಗಳಿಗೆ ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ವರ್ಗಾವಣೆಯಾಗಿ ಹೋಗುವುದು ಸರ್ವ ಸಾಮಾನ್ಯ ಆದರೆ ನಾವು ಕರ್ತವ್ಯ ನಿವರ್ಹಿಸಿದ ಜಿಲ್ಲೆಯಲ್ಲಿ ನಮ್ಮ ಹೆಸರು ಶಾಶ್ವತವಾಗಿ ಜನರ ಮನಸ್ಸಿನಲ್ಲಿ ಉಳಿಯುವಂತೆ ಮಾಡುವುದು ಅಧಿಕಾರಿಗಳ ಆದ ಕರ್ತವ್ಯವಾಗಿರುತ್ತದೆ. ಸರ್ಕಾರದ ಯೋಜನೆಗಳನ್ನು ಸಹ ಜನರಿಗೆ ತಲುಪಿಸುವುದು, ಕೆಲಸಕ್ಕಾಗಿ ಕಚೇರಿಗೆ ಬರುವ ಜನ ಸಾಮಾನ್ಯರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳುವಂತೆ ಮಾಡಬೇಕು.
ನಾವು ಇರುವ ಅವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು. ದಾಖಲೆಗಳನ್ನು ಭದ್ರವಾಗಿ ಇರಿಸಿಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಶಿಧರ್ ಕುರೇರ್ ಅವರು ಮಾತನಾಡಿ, ಪ್ರಾಮಾಣಿಕ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಸಮಸ್ಯೆ ಇದ್ದರು ಎದೆಗುಂದದೆ ಆತ್ಮ ವಿಶ್ವಾಸದಿಂದ ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು. ನನಗೆ ಕೆಲಸ ಮಾಡಲು ಸಹಕಾರ ನೀಡಿದ ಎಲ್ಲಾರಿಗೂ ಧನ್ಯವಾದಗಳು. ಬಾಕಿಯಿರುವ ಎಲ್ಲಾ ಕೆಲಸವನ್ನು ಬೇಗನೆ ಪೂರ್ಣಗೊಳಿಸುವಂತೆ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಸಿಇಒರವರೊಂದಿಗೆ ಕೆಲಸ ಮಾಡಿರುವ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿ, ಅವರ ಕಾರ್ಯವನ್ನು ಗುಣಗಾನ ಮಾಡಿದರು.
ವೇದಿಕೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿಗಳು, ಅಪರ ಜಿಲ್ಲಾಧಿಕಾರಿ ದುಗೇಶ್, ಅರಣ್ಯ ಇಲಾಖೆಯ ಅಧಿಕಾರಿಗಳು ಇದ್ದರು.
ಜಿ.ಪಂ ಉಪಕಾರ್ಯದರ್ಶಿ ಶಶಿಕಾಂತ ಶಿವಪುರೆ ಅವರು ಸ್ವಾಗತಿಸಿದರು.
ಜಿ.ಪಂ.ಯೋಜನಾ ನಿರ್ದೇಶಕರು, ಯೋಜನಾಧಿಕಾರಿಗಳು, ಮುಖ್ಯ ಲೆಕ್ಕಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ, ತಾಲೂಕ ಮಟ್ಟದ
ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.