ಸಿಇಟಿ ರ್‍ಯಾಂಕ್ ವಿವಾದ ಹೈಕೋರ್ಟ್‌ಗೆ ಮೇಲ್ಮನವಿ

ಸಿಇಟಿ ರ್‍ಯಾಂಕಿಂಗ್ ಗೊಂದಲ ಕುರಿತಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣರವರು ಇಂದು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಆಯುಕ್ತ ಪಿ. ಪ್ರದೀಪ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಇದ್ದಾರೆ.

ಬೆಂಗಳೂರು, ಸೆ. ೫- ಸಿಇಟಿ ಬರೆದಿರುವ ಪುನರಾವರ್ತಿತ ವಿದ್ಯಾರ್ಥಿಗಳಿಗೆ ರ್ಯಾಂಕ್ ನೀಡುವಾಗ ದ್ವಿತೀಯ ಪಿಯುಸಿ ಮತ್ತು ಸಿಇಟಿ ಅಂಕಗಳನ್ನು ಪರಿಗಣಿಸಿ ಹೊಸದಾಗಿ ರ್ಯಾಂಕ್ ಪಟ್ಟಿ ಪ್ರಕಟಿಸುವಂತೆ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್‌ನಾರಾಯಣ ಹೇಳಿದರು.
ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಇಂದು ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಕಾನೂನು ತಜ್ಞರ ಜತೆ ಸಭೆ ನಡೆಸಿ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೀರ್ಪು ನೀಡಿರುವ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಮುಂದೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಬೇಕೋ ಅಥವಾ ಮೇಲ್ಮನವಿ ಸಲ್ಲಿಸಬೇಕೋ ಎಂಬುದನ್ನು ವಕೀಲರು ತೀರ್ಮಾನಿಸುತ್ತಾರೆ. ತ್ವರಿತವಾಗಿ ಯಾವುದು ಆಗುತ್ತದೋ ಅದನ್ನು ಮಾಡಲು ಸೂಚಿಸಿದ್ದೇನೆ ಎಂದರು.
೨೦೨೦-೨೧ ರಲ್ಲಿ ಪಿಯುಸಿ ತೇರ್ಗಡೆಯಾಗಿ, ಈ ವರ್ಷವೂ ಸಿಇಟಿ ಬರೆದಿರುವ ೨೪ ಸಾವಿರ ಅಭ್ಯರ್ಥಿಗಳ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ರ್ಯಾಂಕಿಂಗ್ ಪಟ್ಟಿಯನ್ನ ಬಿಡುಗಡೆ ಮಾಡಬೇಕು ಎಂದು ಹೈಕೋರ್ಟ್ ನೀಡಿರುವ ತೀರ್ಪಿನಿಂದ ಈ ವರ್ಷದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ. ಹೀಗಾಗಿ ಈ ತೀರ್ಪನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಹೈಕೋರ್ಟ್ ತೀರ್ಪನ್ನು ಪಾಲಿಸಿದರೆ ಈ ವರ್ಷ ಸಿಇಟಿ ಬರೆದಿರುವ ೧.೫೦ ಲಕ್ಷ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ರ್ಯಾಂಕ್ ಪಟ್ಟಿಯಲ್ಲೂ ದೊಡ್ಡ ಪ್ರಮಾಣದಲ್ಲಿ ಏರುಪೇರಾಗುತ್ತದೆ. ಹಾಗಾಗಿ ಮತ್ತೆ ನ್ಯಾಯಾಲಯದ ಮೊರೆ ಹೋಗಲು ತೀರ್ಮಾನ ಮಾಡಿದ್ದೇವೆ ಎಂದರು.
ನ್ಯಾಯಾಲಯದ ಮೆಲ್ಟಿಟರೇಲಿದ್ದ ವಿದ್ಯಾರ್ಥಿಗಳು ಯಾವುದೊ ಒಂದು ತಾಂತ್ರಿಕ ಅಂಶಕ್ಕೆ ಅಂಟಿಕೊಂಡಿದ್ದಾರೆ. ಕಳೆದ ವರ್ಷ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕೈಗೊಂಡ ತೀರ್ಮಾನವನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳಬೇಕಿತ್ತು. ಹೋದ ವರ್ಷ ವಿದ್ಯಾರ್ಥಿಗಳ ಬಗ್ಗೆ ನಮಗ ಅಸಮಾಧಾನ ಇಲ್ಲ. ಯಾರಿಗೂ ಅನ್ಯಾಯವಾಗದಂತೆ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ಎಲ್ಲವು ನಿಗದಿತ ಕಾಲ ಮಿತಿಯಲ್ಲೇ ನಡೆಯಲಿದೆ ಎಂದರು.ಈ ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಲಕ್ಷ್ಮಿಮಹೇಶ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಸಿ. ಪ್ರದೀಪ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕಿ ರಮ್ಯಾ ಸೇರಿದಂತೆ ಕಾನೂನು ತಜ್ಞರು ಪಾಲ್ಗೊಂಡಿದ್ದರು.