ಸಿಎಂಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್

ನವದೆಹಲಿ, ಏ. ೮- ದೇಶದಲ್ಲಿ ಕೊರೊನಾ ಸೋಂಕು ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅದರ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ಸಂಜೆ ೬.೩೦ಕ್ಕೆ ಎಲ್ಲಾ ರಾಜ್ಯಗಳ, ಮುಖ್ಯಮಂತ್ರಿಗಳ ಸಭೆ ನಡೆಸಲಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದು, ಸೋಂಕು ಹೆಚ್ಚುತ್ತಿರುವ ಮಹಾರಾಷ್ಟ್ರ, ಕರ್ನಾಟಕ, ಪಂಜಾಬ್, ಹರಿಯಾಣ, ಚಂಡೀಘಡ, ಛತ್ತೀಸ್ ಗಢ, ತಮಿಳುನಾಡು, ಕೇರಳ, ಮಧ್ಯಪ್ರದೇಶ ಸೇರಿದಂತೆ, ಸೋಂಕು ಹೆಚ್ಚುತ್ತಿರುವ ೧೧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಿಗಿಭದ್ರತೆ ಕೈಗೊಳ್ಳಲು ಸೂಚನೆ ನೀಡಲಾಗಿದೆ.
ಈಗಾಗಲೇ ಸೋಂಕು ಹೆಚ್ಚುತ್ತಿರುವ ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ಜಾರಿಮಾಡಲಾಗಿದೆ. ಮಧ್ಯಪ್ರದೇಶ ರಾಜ್ಯದ ನಗರ ಪ್ರದೇಶಗಳಲ್ಲಿ ಲಾಕ್ ಡೌನ್ ಮಾಡಲಾಗಿದೆ. ಜೊತೆಗೆ ಅನೇಕ ರಾಜ್ಯಗಳು, ಸೋಂಕು ತಡೆಗಟ್ಟಲು ಬಿಗಿಕ್ರಮಗಳನ್ನು ಕೈಗೊಂಡಿದ್ದು, ಇತರೆ ರಾಜ್ಯಗಳೂ ಕೂಡ ಕ್ರಮ ಕೈಗೊಳ್ಳುವಂತೆ ಸೂಚಿಸುವ ಸಾಧ್ಯತೆಗಳು ಇವೆ.
ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ೧೮ ವರ್ಷ ದಾಟಿದ ಎಲ್ಲರಿಗೂ ಲಸಿಕೆ ಹಾಕಲು ಅವಕಾಶ ಮಾಡಿಕೊಡುವಂತೆ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರು, ಈಗಾಗಲೇ ಪ್ರಧಾನಿ ಅವರಿಗೆ ಮನವಿ ಮಾಡಿದ್ದು, ಇಂದು ನಡೆಯುವ ಸಭೆಯಲ್ಲಿ ಮತ್ತೊಮ್ಮೆ ಈ ವಿಷಯವನ್ನು ಪ್ರಸ್ತಾಪಿಸಿ ಅವಕಾಶ ನೀಡುವಂತೆ ಮನವಿ ಮಾಡಲಿದ್ದಾರೆ.
ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಲಹೆ, ಅಭಿಪ್ರಾಯ ಆಲಿಸಿದ ನಂತರ, ಪ್ರಧಾನಿ ನರೇಂದ್ರ ಅವರು, ಸೋಂಕು ಹೆಚ್ಚುತ್ತಿರುವ ರಾಜ್ಯಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸುವ ಸಾಧ್ಯತೆಗಳು ಇವೆ ಎಂದು ಹೇಳಲಾಗಿದೆ.
ಈ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೂ ಕೂಡ ಪಾಲ್ಗೊಳ್ಳಲಿದ್ದಾರೆ.

ಮಮತಾ ಗೈರು
ಇಂದು ಸಂಜೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರೆದಿರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗೈರುಹಾಜರಾಗಲು ನಿರ್ಧರಿಸಿದ್ದಾರೆ. ಲಸಿಕೆಯನ್ನು ಕೇಂದ್ರ ಸರ್ಕಾರ ಸಮರ್ಪಕವಾಗಿ ವಿತರಣೆ ಮಾಡಿಲ್ಲ ಎಂದು ಆರೋಪ ಹೊರಿಸಿರುವ ಅವರು, ಸಭೆಯಿಂದ ದೂರು ಉಳಿಯಲು ನಿರ್ಧರಿಸಿದ್ದಾರೆ.
ಜೊತೆಗೆ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಪ್ರಕ್ರಿಯೆ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವೆ ಆರೋಪ – ಪ್ರತ್ಯಾರೋಪ ನಡೆಯುತ್ತಿವೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಂಜೆ ನಡೆಯುವ ಸಭೆಗೆ ಗೈರಾಗಲು ಮುಂದಾಗಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪರವಾಗಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಆಲಾಪನ್ ಬಂಡೋಪಾಧ್ಯಾಯ ಅವರು, ಪ್ರಧಾನಿ ಅವರು ಕರೆದಿರುವ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳು ಇವೆ.