ಸಿಎಂಗೆ ಕೊರೊನಾ ಡೆಲ್ಲಿ ಭೇಟಿ ರದ್ದು

ಬೆಂಗಳೂರು,ಆ.೬- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಅವರ ಇಂದಿನ ದೆಹಲಿ ಪ್ರವಾಸ ರದ್ದಾಗಿದೆ.
ಇಂದು ಬೆಳಿಗ್ಗೆ ೧೧.೩೦ಕ್ಕೆ ಬೆಂಗಳೂರಿನಿಂದ ಮುಖ್ಯಮಂತ್ರಿಗಳು ದೆಹಲಿಗೆ ಪ್ರಯಾಣಿದಬೇಕಿತ್ತು. ಆದರೆ, ಕೊರೊನಾ ಕಾರಣದಿಂದ ಅವರ ಎರಡು ದಿನಗಳ ದೆಹಲಿ ಭೇಟಿ ರದ್ದು ಮಾಡಿ ಮನೆಯಲ್ಲೇ ಐಸೋಲೇಷನ್‌ಗೆ ಒಳಗಾಗಿದ್ದಾರೆ.
ಕೊರೊನಾ ಸೋಂಕು ದೃಢಪಟ್ಟಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನನಗೆ ಇಂದು ಕೋವಿಡ್-೧೯ ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿ ಪ್ರವಾಸ ರದ್ದಾಗಿರುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
ಕೋವಿಡ್‌ನ ಲಕ್ಷಣಗಳು ತಮಗೆ ಕಂಡು ಬಂದ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದೆ. ಕೊರೊನಾ ದೃಢಪಟ್ಟಿದೆ. ಮನೆಯಲ್ಲೇ ಐಸೋಲೇಷನ್‌ಗೆ ಒಳಪಟ್ಟಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರೂ ಕೊರೊನಾ ಪರೀಕ್ಷೆಗೆ ಒಳಗಾಗಿ ಅಲ್ಲಿಯವರೆಗೂ ಐಸೋಲೇಷನ್‌ನಲ್ಲಿರಿ ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
ಈ ವರ್ಷದಲ್ಲಿ ಬೊಮ್ಮಾಯಿ ಅವರು ೨ನೇ ಬಾರಿಗೆ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.
ಕಳೆದ ಜನವರಿ ತಿಂಗಳಿನಲ್ಲೂ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು,
ಇಂದು ದೆಹಲಿಗೆ ತೆರಳಬೇಕಿದ್ದ ಮುಖ್ಯಮಂತ್ರಿಗಳು, ಸಂಜೆ ದೆಹಲಿಯಲ್ಲಿ ನಡೆಯಲಿರುವ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೆಹಲಿಯಲ್ಲೇ ವಾಸ್ತವ್ಯ ಹೂಡಿ ನಾಳೆ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡು ನಾಳೆ ರಾತ್ರಿ ಬೆಂಗಳೂರಿಗೆ ವಾಪಸ್ಸಾಗಬೇಕಿತ್ತು. ಹಾಗೆಯೇ, ದೆಹಲಿ ಭೇಟಿ ಸಂದರ್ಭದಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡುವ ಕಾರ್ಯಕ್ರಮ ಇತ್ತು. ಈಗ ಇವೆಲ್ಲ ರದ್ದಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.
ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ ನಟರಾದ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಹಲವು ಸಚಿವರು, ಗಣ್ಯರು ಪಾಲ್ಗೊಂಡಿದ್ದರು. ನಂತರ ಚಿತ್ರಕಲಾ ಪರಿಷತ್‌ನಲ್ಲಿ ಜವಳಿ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿಗಳು, ನಂತರ ಕೃಷ್ಣಾದಲ್ಲಿ ರಾಷ್ಟ್ರೀಯ ಬಿಜೆಪಿಯ ಹರ್ ಘರ್ ತಿರಂಗ ವೀಡಿಯೋ ಸಂವಾದದಲ್ಲೂ ಪಾಲ್ಗೊಂಡು ವಿವಿಧ ಉದ್ದಿಮೆಗಳ ಆರಂಭಕ್ಕೆ ಅನುಮತಿ ನೀಡುವ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ ಸಭೆಯಲ್ಲೂ ಭಾಗವಹಿಸಿದ ನಂತರ ರಾಜ್ಯಮಟ್ಟದ ಪ್ರಥಮ ದಿಶಾ ಸಮಿತಿ ಸಭೆಯಲ್ಲೂ ಪಾಲ್ಗೊಂಡಿದ್ದರು.
ನಂತರ ಸಂಜೆ ಜ್ಞಾನಭಾರತಿ ಆವರಣದಲ್ಲಿ ನಡೆದ ಸೆಂಟರ್ ಆಪ್ ಎಕ್ಸಲೆನ್ಸ್ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲೂ ಪಾಲ್ಗೊಂಡಿದ್ದರು.
ಆರೋಗ್ಯ ವಿಚಾರಿಸಿದ ಬಿಎಸ್‌ವೈ
ಕೋವಿಡ್ ಸೋಂಕಿಗೆ ಒಳಗಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ಸಚಿವರುಗಳು, ಶಾಸಕರು ದೂರವಾಣಿಯಲ್ಲಿ ಮಾತನಾಡಿ ಆರೋಗ್ಯ ವಿಚಾರಿಸಿ, ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ.
ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಮಾಹಿತಿ ಗೊತ್ತಾಗುತ್ತಿದ್ದಂತೆಯೇ ಇಂದು ಬೆಳಿಗ್ಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ದೂರವಾಣಿ ಕರೆ ಮಾಡಿ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದರು. ಹಾಗೆಯೇ ಸಚಿವರುಗಳಾದ ವಿ. ಸೋಮಣ್ಣ, ಆರ್. ಅಶೋಕ್, ಡಾ. ಕೆ. ಸುಧಾಕರ್, ಡಾ. ಅಶ್ವತ್ಥ ನಾರಾಯಣ, ಕೆ. ಗೋಪಾಲಯ್ಯ, ಹಾಲಪ್ಪ ಆಚಾರ್, ಪ್ರಭು ಚೌಹಾಣ್, ಬಿ.ಸಿ ನಾಗೇಶ್ ಸೇರಿದಂತೆ ಹಲವು ಸಚಿವರುಗಳು ಮುಖ್ಯಮಂತ್ರಿಗಳಿಗೆ ದೂರವಾಣಿ ಮಾಡಿ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು.ಕೋವಿಡ್ ಸೋಂಕಿಗೆ ಒಳಗಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಆರ್‌ಟಿ ನಗರದ ತಮ್ಮ ನಿವಾಸದಲ್ಲೇ ಐಸೋಲೇಷನ್‌ಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿದ್ದಾರೆ.