ಸಿಎಂ ಜತೆ ಚರ್ಚಿಸಿ ಶಾಲೆಗಳ ಆರಂಭ

ಬೆಂಗಳೂರು, ಜು. ೨೨- ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲೆಬೇಕಾಗುತ್ತದೆ. ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸಲಾಗುವುದು. ಅದಕ್ಕೂ ಮೊದಲು ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಲಸಿಕೆ ನೀಡಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿದರು.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಗಳನ್ನು ಯಾವತ್ತಿದ್ದರೂ ತೆರೆಯಲೇಬೇಕು. ಶಾಶ್ವತವಾಗಿ ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ಸಾಧ್ಯವಿಲ್ಲ. ಇದರಿಂದ ಮಕ್ಕಳ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಹಾಗಾಗಿ ಎಲ್ಲವನ್ನು ಅಳೆದು,ತೂಗಿ ಶಾಲೆ ಆರಂಭದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದರು.
ವೈದ್ಯಕೀಯ ಕ್ಷೇತ್ರದ ಪರಿಣಿತರು, ಶಿಕ್ಷಣ ತಜ್ಞರು ಎಲ್ಲರ ಅಭಿಪ್ರಾಯಗಳನ್ನು ಪಡೆದೇ ಶಾಲೆ ಆರಂಭದ ಬಗ್ಗೆ ತೀರ್ಮಾನ ಮಾಡುತ್ತೇವೆ. ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸಲಾಗುವುದು ಎಂದರು.
ಶಾಲೆಗಳ ಆರಂಭಕ್ಕೂ ಮುನ್ನ ಎಲ್ಲ ಶಾಲೆಗಳ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಆದ್ಯತೆ ಮೇರೆಗೆ ಕೊರೊನಾ ಲಸಿಕೆ ನೀಡಲಾಗುವುದು. ಅರ್ಹ ಫಲಾನುಭವಿಗಳ ಪಟ್ಟಿಯನ್ನು ಶಿಕ್ಷಣ ಇಲಾಖೆ ಮತ್ತು ಜಿಲ್ಲಾಡಳತಗಳ ಸಮನ್ವಯದೊಂದಿಗೆ ಕ್ರಿಯಾಯೋಜನೆ ರೂಪಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ಫಲಾನುಭವಿಗಳ ಸಂಖ್ಯೆ ಮತ್ತು ಲಸಿಕೆ ಲಭ್ಯತೆ ಆಧರಿಸಿ ಆಯಾ ಶಾಲೆಗಳ ಆವರಣದಲ್ಲೇ ಲಸಿಕಾ ಶಿಬಿರವನ್ನು ಆಯೋಜಿಸಲಾಗುವುದು ಎಂದು ಅವರು ಹೇಳಿದರು.
ರಾಜ್ಯದಲ್ಲಿ ಕೊರೊನಾ ೨ನೇ ಅಲೆಯನ್ನು ತಡೆಯಲು ಎಲ್ಲ ಸಿದ್ಧತೆಗಳನ್ನು ನಡೆಸಲಾಗಿದೆ. ಪ್ರತಿದಿನವೂ ಶೇ. ೫ ರಷ್ಟು ಸೋಂಕು ಪಾಸಿಟಿವ್ ಪ್ರಕರಣಗಳನ್ನು ಜಿನೋಮಿನ್ ಝಿಕ್ವೆನ್ಸ್ ತಪಾಸಣೆಗೊಳಪಡಿ ವೈರಸ್ ಡೆಲ್ಟಾ ಪ್ಲಸ್ ಅಥವಾ ಹೊಸ ರೂಪಾಂತರ ಆಗಿದೆಯೇ ಎಂಬುದನ್ನು ಪತ್ತೆ ಹಚ್ಚುವತ್ತ ಗಮನ ನೀಡಿದ್ದೇವೆ. ಎಲ್ಲವನ್ನು ಐಸಿಎಂಆರ್ ಗಮನಕ್ಕೆ ತರಲಾಗುತ್ತಿದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಈಗಾಗಲೇ ಮಾತನಾಡಿದ್ದೇನೆ. ಈ ಬಗ್ಗೆ ಹೆಚ್ಚು ಮಾತನಾಡುವುದು ಬೇಡ ಎಂದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಹೈಕಮಾಂಡ್‌ನ ತೀರ್ಮಾನಕ್ಕೆ ಎಲ್ಲರೂ ಬದ್ಧ ಎಂದರು.