ಸಿಎಂ ಬದಲಾವಣೆ ಪ್ರಶ್ನೆ ಇಲ್ಲ: ಬಿ.ಎಸ್.ವೈ ಸ್ಪಷ್ಟನೆ

ತುಮಕೂರು, ನ.12, ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸ್ಪಷ್ಟಪಡಿಸಿದ್ದಾರೆ.
ಬಿಟ್ ಕಾಯಿನ್ ಪ್ರಕರಣ ರಾಜ್ಯ ಸರ್ಕಾರದ ಪಾಲಿಗೆ ಬಿಸಿ ತುಪ್ಪವಾಗಿ ಪರಿಣಮಿಸಿರುವ ಬೆನ್ನಲ್ಲೇ ಯಡಿಯೂರಪ್ಪ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಯಡಿಯೂರಪ್ಪ ಅವರು ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬಿಟ್‌ಕಾಯಿನ್ ಪ್ರಕರಣದ ಬಗ್ಗೆ ಮೌನ ಮುರಿದರು.
ಬಿಟ್ ಕಾಯಿನ್ ಪ್ರಕರಣ ಪ್ತಧಾನಿಯವರ ಗಮನಕ್ಕೂ ಬಂದಿದೆ. ಖಂಡಿತಾ ಈ ಬಗ್ಗೆ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಖುತ್ತಾರೆ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಯಾಗಿ ಮುಂದುವರೆಯುತ್ತಾರೆ ಎಂದು ಅವರು ಸ್ಪಷ್ಟಪಡಿಸಿದರು.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ದೆಹಲಿ ಭೇಟಿ ಕೈಗೊಂಡಿರುವ ಕುರಿತು ಮಾಹಿತಿ ನೀಡಿರುವ ಯಡಿಯೂರಪ್ಪ, ಶೆಟ್ಟರ್ ಜತೆ ಮಾತನಾಡಿದ್ದೇನೆ. ಅವರು ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ ತೆರಳಿದ್ದಾರೆ ಎಂದು ತಿಳಿಸಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯನ್ನು ಸಾರಸಗಟಾಗಿ ತಳ್ಳಿಹಾಕಿದರು.