ಸಿಎಂ ವಜಾ ಮಾಡಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಸಿದ್ದು ಆಗ್ರಹ

ಬೆಂಗಳೂರು,ಏ.೧- ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧ ಹಿರಿಯ ಸಚಿವ ಕೆ.ಎಸ್ ಈಶ್ವರಪ್ಪ ಮಾಡಿರುವ ಆರೋಪ ರಾಜ್ಯದ ಆಡಳಿತ ವ್ಯವಸ್ಥೆ ಕುಸಿದು ಬಿದ್ದಿರುವುದಕ್ಕೆ ಸಾಕ್ಷಿಯಾಗಿದೆ. ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶಿಸಿ ಮುಖ್ಯಮಂತ್ರಿ ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸ್ಸು ಮಾಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ರಾಜ್ಯದ ಬಿಜೆಪಿ ಸರ್ಕಾರದಲ್ಲಿ ನಡೆದಿರುವ ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ಅಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕರಾಗಿ ತಾವು ಮಾಡಿರುವ ಆರೋಪಗಳಿಗೆ ಈಶ್ವರಪ್ಪ ಸಾಕ್ಷ್ಯ ಒದಗಿಸಿ ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಚಿವ ಈಶ್ವರಪ್ಪ ಅವರು ಯಾವುದೇ ಒತ್ತಡಕ್ಕೆ ಮಣಿಯದೆ ಮಾತಿಗೆ ಬದ್ಧರಾಗಿ ಉಳಿಯಬೇಕು. ರಾಜಕೀಯ ಹಿತಾಸಕ್ತಿಗಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಅವರು ಸಾರಿದ್ದಾರೆ. ಇದಕ್ಕಾಗಿ ಈಶ್ವರಪ್ಪ ಅವರನ್ನು ಅಭಿನಂದಿಸುತ್ತೇನೆ ಎಂದರು.
ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣಾಇವೃದ್ಧಿ ಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ. ಇದು ಸರ್ಕಾರದ ಪ್ರತಿಯೊಂದು ಇಲಾಖೆಯಲ್ಲಿನ ಕರ್ಮಕಾಂಡ, ಬಿಜೆಪಿ ವರಿಷ್ಠರು ಈಶ್ವರಪ್ಪವರ ಬಾಯಿ ಮುಚ್ಚಿಸಲು ಪ್ರಯತ್ನಿಸದೆ ಇತರ ಸಚಿವರು ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ರಾಜ್ಯಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಕೊರೊನಾ ವೈರಸ್ ಕಾರಣ ಅಲ್ಲ. ಈ ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರದ ವೈರಸ್ ಕಾರಣ ಎಂಬುದನ್ನು ಈಶ್ವರಪ್ಪ ಅವರು ತಮ್ಮ ಸಂಶೋಧನೆ ಮೂಲಕ ಬಹಿರಂಗಗೊಳಿಸಿದ್ದಾರೆ ಎಂದು ಹೇಳಿದ್ದಾರೆ.ಪ್ರಧಾನಿ ನರೇಂದ್ರಮೋದಿ ಅವರು “ನಾ ಖಾವೂಂಗಾ ನಾ ಖಾನೆ ದೋಂಗಾ” ಎಂಬ ಘೋಷಣೆಯನ್ನು “ಮೈ ಬೀ ಖಾವೂಂಗಾ ತುಮ್ ಬೀ ಖಾವೋ” ಎಂದು ಬದಲಿಸಿಬಿಡಿ ಎಂದು ಹೇಳಿರುವ ಸಿದ್ದರಾಮಯ್ಯ, ಸಚಿವ ಈಶ್ವರಪ್ಪ ಅವರು ಕಳುಹಿಸಿರುವ ಸರ್ಕಾರದ ಜಾತಕಪತ್ರವನ್ನು ಪರಿಶೀಲಿಸಿ ನೀವೆ ರಾಜ್ಯಕ್ಕೆ ಭ್ರಷ್ಟಾಚಾರದ ರೇಟಿಂಗ್ ಕೊಟ್ಟುಬಿಡಿ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಆಪರೇಷನ್ ಕಮಲದ ತನಿಖೆಗೆ ಹೈಕೋರ್ಟ್ ಹಸಿರು ನಿಶಾನೆ ನೀಡಿರುವುದು ಬಿಜೆಪಿ ಸರ್ಕಾರ ಆಪರೇಷನ್ ಕಮಲ ಎಂಬ ಅನೈತಿಕ ಚಟುವಟಿಕೆಯ ಅಕ್ರಮ ಶಿಶು ಎಂಬ ಆರೋಪವನ್ನು ಪುಷ್ಠೀಕರಿಸಿದೆ. ಈ ಕಮಲ ಕಾರ್ಯಾಚರಣೆಯಲ್ಲಿ ವಿನಿಮಯಗೊಂಡ ಕೊಟ್ಯಂತರ ರೂ.ಗಳ ಆಮಿಷದ ಬಗ್ಗೆಯೂ ಸಮಗ್ರ ತನಿಖೆಯಾಗಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.