ಸಿದ್ದು ದೆಹಲಿಗೆ ಮುರ್ಮು, ಶಾ ಭೇಟಿ

ಬೆಂಗಳೂರು,ಜೂ.೨೧:ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇಂದು ದೆಹಲಿಗೆ ತೆರಳಿದ್ದು, ದೆಹಲಿಯಲ್ಲಿ ಅವರು ರಾಷ್ಟ್ರಪತಿ ದ್ರೌಪದಿಮುರ್ಮು ಹಾಗೂ ಕೇಂದ್ರ ಸಚಿವ ಅಮಿತ್ ಶಾರವರನ್ನು ಭೇಟಿ ಮಾಡುವರು.
ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇಂದು ಬೆಳಿಗ್ಗೆ ೯.೫೦ಕ್ಕೆ ತೆರಳಬೇಕಾಗಿತ್ತಾದರೂ ಅವರ ಪತ್ನಿ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಪತ್ನಿಯ ಆರೋಗ್ಯ ವಿಚಾರಿಸಿ ಬೆಳಿಗ್ಗೆ ೧೧.೩೦ಕ್ಕೆ ಹೆಚ್‌ಎಎಲ್ ವಿಮಾನನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದರು.
ಅಕ್ಕಿಗೆ ಖರೀದಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ನಡೆದಿರುವ ವಾಕ್ಸಮರದ ನಡುವೆಯೇ
ದೆಹಲಿಯಲ್ಲಿಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ವಿವಿಧ ಕೇಂದ್ರ ಸಚಿವರುಗಳನ್ನು ಭೇಟಿ ಮಾಡುತ್ತಿರುವುದು ಕುತೂಹಲ ಮೂಡಿಸಿದೆ. ಹಾಗೆಯೇ ರಾಷ್ಟ್ರಪತಿ ದ್ರೌಪದಿಮುರ್ಮು ಅವರನ್ನು ಭೇಟಿ ಮಾಡುವರು.
ಮುಖ್ಯಮಂತ್ರಿ ಸಿದ್ದರಾಮಯ್ಯರವರ ಜತೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸಹ ದೆಹಲಿಗೆ ತೆರಳಿದ್ದು, ಅವರು ಕೇಂದ್ದರ ಆಹಾರ ಸಚಿವರನ್ನು ಭೇಟಿ ಮಾಡಿ ರಾಜ್ಯಕ್ಕೆ ಅನ್ನಭಾಗ್ಯ ಯೋಜನೆಯಡಿ ವಿತರಿಸಲು ಹೆಚ್ಚುವರಿ ಅಕ್ಕಿ ನೀಡುವಂತೆ ಮನವಿ ಮಾಡುವರು. ಇಂದು ರಾತ್ರಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಕ್ಕೆ ವಾಪಸ್ ಆಗುವರು.