ಸಿದ್ದು ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು,ಸೆ.೮-ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವೇಳೆ ಅಂದಿನ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಯತ್ನ ಸಂಬಂಧ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಮೊದಲ ಆರೋಪಿ ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡುವಂತೆ ಕಾಂಗ್ರೆಸ್ ಪ್ರತಿಭಟನೆ ಮಾಡಿತ್ತು. ಆ ವೇಳೆ ಅಂದಿನ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ಸಂಬಂಧ ಕಾಂಗ್ರೆಸ್ ನಾಯಕರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ರದ್ದು ಕೋರಿ ಸಿದ್ದರಾಂಯ್ಯ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ೨೦೨೨ ಏಪ್ರಿಲ್ ೧೪ರಂದು ನಡೆದಿದ್ದ ಪ್ರತಿಭಟನೆ ಸಂಬಂಧ ಮಹಿಳಾ ಪಿಎಸ್‌ಐ ಜಾಹೀದಾ ನೀಡಿರುವ ದೂರು ಆಧರಿಸಿ ಸ್ವಯಂ ಪ್ರಕರಣ ದಾಖಲಾಗಿತ್ತು. ಈ ಕೇಸ್‌ಗೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಪೊಲಿಸರು ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು. ಅಂದಿನ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ವಿ.ಎಸ್. ಉಗ್ರಪ್ಪ, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಸೇರಿದಂತೆ ಒಟ್ಟು ೩೬ ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಾಗಿತ್ತು.