
ಹುಮನಾಬಾದ್ :ಆ.19: ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿರುವ ಸಿದ್ದರಾಮಯ್ಯ ಅಧಿಕಾರ ಮುಗಿಯುವವರೆಗೂ ಸಿಎಂ ಸೀಟ್ ಬಿಡುವುದಿಲ್ಲ. ಡಿ.ಕೆ. ಶಿವಕುಮಾರ ಸಿಎಂ ಆಗಲ್ಲ ಎಂದು ಶಾಸಕ ಬಸವರಾಜ ಪಾಟೀಲ್ ಯತ್ನಾಳ ಹೇಳಿದರು.
ಹುಮನಾಬಾದ್ ತಾಲೂಕಿನ ಹಳ್ಳಿಖೇಡ (ಬಿ) ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವ ಮೂಲಕ ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ರಚನೆ ಆಗುವುದು ಖಚಿತ. ಬಳಿಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಜೈಲಿಗೆ ಹೋಗುವುದು ಮಾತ್ರ ಪಕ್ಕ ಎಂದರು.
ಬಿಜೆಪಿ ಪಕ್ಷಕ್ಕೆ ಆಗಮಿಸಿದ ವಲಸಿಗರು ಬೇರೆ ಯಾವುದೇ ಪಕ್ಷಕ್ಕೆ ಹೋಗುತ್ತಿಲ್ಲ. ಮತ್ತು ಅವರ ನಡುವೆ ಹಾಗೂ ಬಿ.ಎಸ್. ಯಡಿಯೂರಪ್ಪ ಹಾಗೂ ನಮ್ಮ ನಡುವೆ ಯಾವುದೇ ಗೊಂದಲಗಳಿಲ್ಲ. ನಾವೆಲ್ಲರೂ ಅಣ್ಣ ತಮ್ಮರಂತೆ ಇದ್ದೆವೇ, ಶ್ರಾವಣ ಮಾಸ ಮುಗಿದ ನಂತರ ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕರ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ ಎಂದರು.
ಈ ಸಂದರ್ಭದಲ್ಲಿ ಹುಮನಾಬಾದ್ ಶಾಸಕ ಡಾ. ಸಿದ್ದು ಪಾಟೀಲ್, ಬಸವಕಲ್ಯಾಣ ಶಾಸಕ ಶರಣು ಸಲಗರ, ಮಾಜಿ ಶಾಸಕ ಸುಭಾಷ ಕಲ್ಲೂರ್ ಸೇರಿ ಅನೇಕರಿದ್ದರು.