ಸಿದ್ಧರಾಮಯ್ಯರವರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ತಾಲ್ಲೂಕಿನಿಂದ 3 ಸಾವಿರ ಯುವಜನರು ಭಾಗಿ

ಕೆ.ಆರ್.ಪೇಟೆ: ಜು.31:- ದಾವಣಗೆರೆಯಲ್ಲಿ ಆಗಸ್ಟ್ 3 ರಂದು ನಡೆಯಲಿರುವ ರಾಜ್ಯ ವಿಧಾನಸಭೆಯ ವಿಪಕ್ಷನಾಯಕ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಕೆ.ಆರ್.ಪೇಟೆ ತಾಲ್ಲೂಕಿನಿಂದ ಕನಿಷ್ಠ 3 ಸಾವಿರ ಯುವಜನರು ಭಾಗವಹಿಸಲಿದ್ದಾರೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಚಿಕ್ಕೋನಹಳ್ಳಿ ಚೇತನ್ ಕುಮಾರ್ ತಿಳಿಸಿದರು.
ಅವರು ಇಂದು ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಯುವಕಾಂಗ್ರೆಸ್ ಪದಾಧಿಕಾರಿಗಳ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ರಾಜ್ಯದ ಮುಖ್ಯಮಂತ್ರಿಯಾಗಿ ರಾಜ್ಯವನ್ನು ಅಭಿವೃದ್ಧಿಯ ಪಥದತ್ತ ಮುನ್ನಡೆಸಿದ ಸಿದ್ಧರಾಮಯ್ಯ ಅವರು ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಕೆಲಸ ಮಾಡಿದ ಮಾದರಿ ನಾಯಕ. ದಕ್ಷ ಮತ್ತು ಪ್ರಾಮಾಣಿಕ ಆಡಳಿತ ನೀಡಿ ದನಿಯಿಲ್ಲದ ಹಾಗೂ ತುಳಿತಕ್ಕೊಳಗಾದ ಶೋಷಿತ ವರ್ಗಗಳು ಹಾಗೂ ಹಿಂದುಳಿದ ವರ್ಗಗಳ ಜನರಿಗೆ ವಿವಿಧ ಜನಪರ ಕಾರ್ಯಕ್ರಮಗಳ ಮೂಲಕ ಶಕ್ತಿ ತುಂಬಿದ್ದಾರೆ. 75 ವರ್ಷಗಳ ಜೀವನದಲ್ಲಿ 50 ವರ್ಷಗಳಿಗೂ ಹೆಚ್ಚು ಕಾಲ ಸಮಾಜದ ಉನ್ನತಿಗೆ ಸಚಿವರಾಗಿ, ಮುಖ್ಯಮಂತ್ರಿಯಾಗಿ, ವಿಪಕ್ಷ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ. ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಅಡಿಯಲ್ಲಿ ಸರ್ವಜನಾಂಗದ ಶಾಂತಿಯ ತೋಟದ ನಿರ್ಮಾಣಕ್ಕೆ ಒತ್ತು ನೀಡಿ ಕೆಲಸ ಮಾಡಿರುವ ಸಿದ್ಧರಾಮಯ್ಯ ಅವರಿಗೆ ಕೃತಜ್ಞತೆ ಸಮರ್ಪಿಸಲು ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಿದ್ಧರಾಮೋತ್ಸವದ ಹೆಸರಿನಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ದಾವಣಗೆರೆಯಲ್ಲಿ ಆಚರಿಸುತ್ತಿದ್ದಾರೆ. ಕೆ.ಆರ್.ಪೇಟೆ ತಾಲ್ಲೂಕಿನಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಅಭಿಮಾನಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಚೇತನ್ ಕುಮಾರ್ ಮನವಿ ಮಾಡಿದರು.
ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಠಿಸುವುದಾಗಿ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಕೊಟ್ಟ ಮಾತಿನಂತೆ ನಡೆದುಕೊಳ್ಳದೆ ದೇಶದ ಯುವಜನರನ್ನು ವಂಚಿಸಿದ್ದಾರೆ. ಖಾಗೀಕರಣಕ್ಕೆ ಒತ್ತು ನಿಡಿ ಯುವಕರು ಉದ್ಯೋಗ ಕಳೆದುಕೊಂಡು ಬೀದಿ ಪಾಲಾಗುವಂತೆ ಮಾಡಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಸಿ ಜನಸಾಮಾನ್ಯರ ಬದುಕು ಬೀದಿಗೆ ಬೀಳುವಂತೆ ಮಾಡಿದ್ದಾರೆ. ಮೋದಿಗೆ ಮತಹಾಕಿದ್ದರ ದುಷ್ಪರಿಣಾಮ ದೇಶದಲ್ಲಿ ಈಗಾಗಲೇ ಕಾಣಿಸಿಕೊಂಡಿದ್ದು ಯುವಕರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಚೇತನ್ ಕುಮಾರ್ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಯುವಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ದೇವರಹಳ್ಳಿ ಮಹೇಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಹರಪುರ ದೀಪಕ್ ಗೌಡ, ಮಾಕವಳ್ಳಿ ಸುಮಿತ್, ಹೊಸಹೊಳಲು ಪ್ರವೀಣ್, ಪದಾಧಿಕಾರಿಗಳಾದ ಹೆಚ್.ವರುಣಗೌಡ, ಬೀರವಳ್ಳಿ ಧೀಮಂತ್ ಗೌಡ, ಇಲಿಯಾಸ್ ಅಹಮ ದ್, ನವೀನ್ ಸಾಗರ್, ತೇಗನಹಳ್ಳಿ ಪವನ್ ಮತ್ತಿತರರು ಉಪಸ್ಥಿತರಿದ್ದರು.