
ಕಲಬುರಗಿ.ಮಾ.07: ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ವಿಧಾನಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರಿಗೆ ಕೊಲೆ ಬೆದರಿಕೆ ಹಾಕಿರುವ ರಾಜ್ಯದ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಇದೇ ಮಾರ್ಚ್ 10ರಂದು ಬೆಂಗಳೂರಿನ ಫ್ರೀಡಮ್ ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಮಹಾಂತೇಶ್ ಕೌಲಗಿ ಅವರು ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಸಾತನೂರಿನಲ್ಲಿ ಜರುಗಿದ ಬಹಿರಂಗ ಸಭೆಯಲ್ಲಿ ಸಚಿವ ಅಶ್ವತ್ಥನಾರಾಯಣ್ ಅವರು ಟಿಪ್ಪುಸುಲ್ತಾನ್ ಕೊಂದ ಹಾಗೆ ಸಿದ್ಧರಾಮಯ್ಯ ಅವರಿಗೆ ಮುಗಿಸಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದರೂ ಸಹ ಪೋಲಿಸರು ಅವರ ವಿರುದ್ಧ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ದೂರಿದರು.
ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಎಲ್ಲ ಸಮಾಜಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅಂಥವರ ವಿರುದ್ಧ ಇಂತಹ ಹೇಳಿಕೆ ನೀಡಿರುವ ಉನ್ನತ ಶಿಕ್ಷಣ ಸಚಿವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.
ಈಗಾಗಲೇ ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಸಚಿವರ ವಿರುದ್ಧ ದೂರು ದಾಖಲಾಗಿದೆ. ಆದಾಗ್ಯೂ, ಯಾವುದೇ ಕಾನೂನು ಕ್ರಮಗಳನ್ನು ಕೈಗೊಂಡಿಲ್ಲ. ಸಚಿವರಿಗೊಂದು ಕಾನೂನು, ಜನಸಾಮಾನ್ಯರಿಗೊಂದು ಕಾನೂನು ಇದೆಯೇ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.
ಅದೇ ರೀತಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಅವಹೇಳನವನ್ನು ಪದೇ ಪದೇ ಮಾಡುತ್ತಿದ್ದಾರೆ. ಇದು ಸಲ್ಲದು. ಇಂತಹ ಹೀನ ರಾಜಕಾರಣದ ವಿರುದ್ಧ ಎಲ್ಲರೂ ಪ್ರತಿಭಟಿಸಬೇಕಾಗಿದೆ. ಅದಕ್ಕಾಗಿಯೇ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನಾ ಧರಣಿಯಲ್ಲಿ ರಾಜ್ಯದ ವಿವಿಧೆಡೆಯಿಂದ ಸುಮಾರು 15 ಲಕ್ಷ ಜನರು ಪಾಲ್ಗೊಳ್ಳುವರು ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕೋಲಿ ಕಬ್ಬಲಿಗ ಎಸ್‍ಟಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಲಚ್ಚಪ್ಪ ಜಮಾದಾರ್, ಮಲ್ಲಿಕಾರ್ಜುನ್ ಪೂಜಾರಿ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಭೀಮಶಾ ಖನ್ನಾ, ರೇವಣಸಿದ್ದಪ್ಪ ಮುಗಟಿ ಮುಂತಾದವರು ಉಪಸ್ಥಿತರಿದ್ದರು.