ಸುರಕ್ಷತೆ ಪಾಲಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ

ಬೆಂಗಳೂರು, ಮಾ. ೨೭- ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದ್ದು, ಸುರಕ್ಷತಾ ಕ್ರಮಗಳನ್ನು ಪಾಲನೆ ಮಾಡದಿದ್ದರೆ ಅಪಾಯ ತಪ್ಪಿದ್ದಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ರಾಜ್ಯದಲ್ಲೂ ದಿನದಿಂದ ದಿನಕ್ಕೆ ಸೋಂಕು ಹೆಚ್ಚಳವಾಗುತ್ತಿದೆ. ಹಲವು ರಾಜ್ಯಗಳಲ್ಲಿ ಕೊರೊನಾ ೨ನೇ ಅಲೆ ಆರಂಭವಾಗಿದೆ. ಹಾಗಾಗಿ ಹೆಚ್ಚು ಜನ ಸೇರುವ ಜಾತ್ರೆ, ಸಮಾರಂಭ, ಸಮಾವೇಶ ಕಾರ್ಯಕ್ರಮಗಳಿಗೆ ನಿರ್ಬಂಧ ಹಾಕಲೇ ಬೇಕಿದೆ ಎಂದರು.
ದೇಶದಲ್ಲಿ ಸೋಂಕು ಹೆಚ್ಚಾಗುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ, ಕೇರಳ, ಪಂಜಾಬ್ ನಂತರದ ಸ್ಥಾನ ರಾಜ್ಯದ್ದಾಗಿದೆ. ರಾಜ್ಯದಲ್ಲೂ ೮-೧೦ ದಿನಗಳಿಂದ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದೆ ಎಂದರು.
ಕಳೆದ ೧೫ ದಿನಗಳಲ್ಲಿ ಕೇರಳ, ಮಹಾರಾಷ್ಟ್ರ, ಪಂಜಾಬ್‌ಗಳಲ್ಲಿ ಕರ್ನಾಟಕಕ್ಕಿಂತ ಹೆಚ್ಚು ಸೋಂಕು ಪ್ರಕರಣಗಳು ದಾಖಲಾಗುತ್ತಿವೆ. ಈ ರಾಜ್ಯಗಳಲ್ಲಿ ಕೊರೊನಾ ೨ನೇ ಅಲೆ ಆರಂಭವಾಗಿದೆ. ಹಾಗಾಗಿ ರಾಜ್ಯದಲ್ಲಿ ೨ನೇ ಅಲೆಯನ್ನು ನಿಯಂತ್ರಿಸಲು ಕಠಿಣ ಕ್ರಮಗಳು ಜಾರಿಯಾಗಬೇಕಿದೆ. ಸರ್ಕಾರ ಈಗಾಗಲೇ ಕಠಿಣ ಕ್ರಮಗಳನ್ನು ಜಾರಿ ಮಾಡಿದೆ. ಜನ ಅಪಾಯದಿಂದ ಪಾರಾಗಲು ಕೊರೊನಾ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡರೆ ಕೊರೊನಾ ನಿಯಂತ್ರಣ ಸಾಧ್ಯ ಎಂದರು.
ಜನರ ಸಹಾಕರವಿಲ್ಲದೆ ಸೋಂಕು ನಿಯಂತ್ರಣ ಅಸಾಧ್ಯ. ಜನ ನಿರ್ಲಕ್ಷ ಮಾಡದೆ ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರದ ಜತೆ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.
ರಾಜ್ಯದಲ್ಲಿ ಇದುವರೆಗೂ ೩೪ ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ. ಏಪ್ರಿಲ್ ೧ ರಿಂದ ೪೫ ವರ್ಷ ಮೇಲ್ಪಟ್ಟವರಿಗೂ ಲಸಿಕೆ ನೀಡಲಾಗುವುದು ಎಂದು ಅವರು ಹೇಳಿದರು.
ರಾಜ್ಯದಲ್ಲಿ ಲಸಿಕೆಯ ಕೊರತೆ ಇಲ್ಲ. ೨-೩ ದಿನಗಳಲ್ಲಿ ೧೨.೫ ಲಕ್ಷ ಡೋಸಿ ಲಸಿಕೆ ರಾಜ್ಯಕ್ಕೆ ಬರಲಿದೆ ಎಂದು ಅವರು ಹೇಳಿದರು.