ಸುರಿಯುವ ಮಳೆಯಲ್ಲಿಯೇ ವಿದ್ಯಾರ್ಥಿಗಳ ಪ್ರತಿಭಟನೆ

ಕಲಬುರಗಿ,ಜು.18-ಕಾಲೇಜಿಗೆ ಹತ್ತಿರವಿರುವ ವಸತಿ ನಿಲಯದಲ್ಲಿ ಇರಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಬೇಕು ಮತ್ತು ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಸತಿ ನಿಲಯದ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿ ವಿವಿಧ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ಸುರಿಯುವ ಮಳೆಯನ್ನು ಲೆಕ್ಕಿಸದೆ ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು.
ಎಬಿವಿಪಿ ನಗರ ಕಾರ್ಯದರ್ಶಿ ತಾಯಪ್ಪ ಯಾದವ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸಮಾಜ ಕಲ್ಯಾಣ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಅನೇಕ ಕಾಲೇಜಿನ ವಿದ್ಯಾರ್ಥಿಗಳಿಗೆ ವಸತಿ ನಿಲಯ ಮತ್ತು ಅವರು ಅಭ್ಯಾಸ ಮಾಡುತ್ತಿರುವ ಕಾಲೇಜಿಗೆ 8-10 ಕಿ.ಮೀ. ಅಂತರವಿರುವುದರಿಂದ ತೊಂದರೆಯಾಗುತ್ತಿದೆ. ಇದರಿಂದ ಸರಿಯಾದ ಸಮಯಕ್ಕೆ ತರಗತಿಗೆ ಹಾಜರಾಗಲು ಆಗುತ್ತಿಲ್ಲ. ಅಲ್ಲದೆ ಸರಿಯಾದ ಸಮಯಕ್ಕೆ ಬಸ್ಸಿನ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳಿಗೆ ಕಾಲೇಜಿಗೆ ಹತ್ತಿರವಿರುವ ವಸತಿ ನಿಲಯಕ್ಕೆ ವರ್ಗಾಯಿಸಬೇಕು, ಅದೇ ರೀತಿ ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಂದು ವರ್ಷದಿಂದ ಯಾವುದೇ ವಸತಿ ನಿಲಯದಲ್ಲಿ ಇರಲು ಅವಕಾಶ ಸಿಕ್ಕಿಲ್ಲ. ವಿದ್ಯಾರ್ಥಿಗಳು 40-50 ಕಿ.ಮೀ.ದೂರದಲ್ಲಿರುವ ಗ್ರಾಮಗಳಿಂದ ನಗರ ಪ್ರದೇಶಕ್ಕೆ ವಿದ್ಯಾಭ್ಯಾಸಕ್ಕಾಗಿ ಆಗಮಿಸುತ್ತಿದ್ದು, ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಿದ್ದರೂ ಅವರಿಗೆ ಅವಕಾಶ ಸಿಕ್ಕಿಲ್ಲ. ಈ ವಿದ್ಯಾರ್ಥಿಗಳಿಗೆ ವಸತಿ ನಿಲಯದಲ್ಲಿರಲು ಅವಕಾಶ ಮಾಡಿಕೊಟ್ಟು ಅವರ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಮನವಿಪತ್ರದಲ್ಲಿ ಒತ್ತಾಯಿಸಲಾಗಿದೆ.