ಸುಳ್ಯ ಬ್ಲಾಕ್ ಕಾಂಗ್ರೆಸ್‌ನಿಂದ ಮಾಜಿ ಪ್ರಧಾನಿ ಇಂದಿರಾಗಾಂಧಿ ಪುಣ್ಯಸ್ಮರಣೆ

ಸುಳ್ಯ, ನ.೧- ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಯವರ ಪುಣ್ಯಸ್ಮರಣೆ ಕಾರ್ಯಕ್ರಮ ಹಾಗೂ ಕಾಂಗ್ರೆಸ್ ಸಮಿತಿ ಗ್ರಾಮ ಪಂಚಾಯತ್ ಚುನಾವಣೆ ಉಸ್ತುವಾರಿಗಳ ಮತ್ತು ಗ್ರಾಮ ಅಧ್ಯಕ್ಷರುಗಳು, ಸಾಮಾಜಿಕ ಜಾಲತಾಣ ವಿಭಾಗದ ಸಂಯೋಜಕರ ಸಭೆ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ ವಹಿಸಿದ್ದರು. ಇಂದಿರಾಗಾಂಧಿ ಪುಣ್ಯಸ್ಮರಣೆಯ ಬಗ್ಗೆ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಕೆ.ಪಿ.ಸಿ.ಸಿ ಮಾಜಿ ಕಾರ್ಯದರ್ಶಿ ಎಂ ವೆಂಕಪ್ಪ ಗೌಡ, ಕರ್ನಾಟಕ ಅರೆಭಾಷೆ ಮತ್ತು ಸಾಹಿತ್ಯ-ಸಂಸ್ಕೃತಿ ಅಕಾಡೆಮಿಯ ಮಾಜಿ ಅಧ್ಯಕ್ಷ ಪಿ.ಸಿ ಜಯರಾಮ್ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಸೇವಾದಳ ತಾಲೂಕು ಸಮಿತಿ ರಚಿಸುವ ಹಿನ್ನೆಲೆಯಲ್ಲಿ ತಾಲೂಕಿನ ಪ್ರತಿ ಬೂತ್ ಮಟ್ಟದಿಂದ ಇಬ್ಬರು ಕಾರ್ಯಕರ್ತರನ್ನು ಸದಸ್ಯರನ್ನಾಗಿ ಆಯ್ಕೆಗೊಳಿಸಿ ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಮತ್ತು ತಾಲೂಕು ಸಮಿತಿಗೆ ಕಳುಹಿಸಿಕೊಡಬೇಕೆಂದು ಸೇವಾದಲ ಅಧ್ಯಕ್ಷ ಗೋಕುಲ್ ದಾಸ್ ಕೆ ಹೇಳಿದರು.
ವೇದಿಕೆಯಲ್ಲಿ ಮಾಜಿ ನಗರ ಪಂಚಾಯತ್ ಅಧ್ಯಕ್ಷ ಶಂಶುದ್ದಿನ್ ಎಸ್, ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಬೆಟ್ಟ ರಾಜರಾಮ ಭಟ್ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್ ಗಂಗಾಧರ, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ.ಜೆ ಉಪಸ್ಥಿತರಿದ್ದರು. ಸಭೆಯಲ್ಲಿ ಗ್ರಾಮ ಪಂಚಾಯತ್ ಚುನಾವಣಾ ಉಸ್ತುವಾರಿಗಳು, ಗ್ರಾಮ ಸಮಿತಿಯ ಅಧ್ಯಕ್ಷರು, ಹಾಗೂ ಸಾಮಾಜಿಕ ಜಾಲತಾಣ ಸಂಯೋಜಕರು ಭಾಗವಹಿಸಿದ್ದರು.