ಸೂರತ್ ಆಸ್ಪತ್ರೆಯಲ್ಲಿ ಬೆಂಕಿ ದುರಂತ ೧೬ ಮಂದಿ ಪಾರು

ಸೂರತ್ ಏ. ೨೬- ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕ ಹರಡುತ್ತಿರುವ ಬೆನ್ನಲ್ಲೇ ಆಸ್ಪತ್ರೆಗಳಲ್ಲಿ ಸಂಭವಿಸುತ್ತಿರುವ ಅಗ್ನಿದುರಂತ ಪ್ರಕರಣಗಳು ಗಾಯದ ಮೇಲೆ ಬರೆ ಎಳೆದಂತಾಗಿದೆ. ಗುಜರಾತ್ ನ ಸೂರತ್‌ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ ೧೩ ಮಂದಿ ಕೊರೊನಾ ಸೋಂಕಿತರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.
ಮಹಾರಾಷ್ಟ್ರದ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ ೧೩ ಸೋಂಕಿತರು ಮೃತಪಟ್ಟಿದ್ದರು. ಇದರ ಬೆನ್ನ ಹಿಂದೆಯೇ ಗುಜರಾತ್ ನ ಆಸ್ಪತ್ರೆಯಲ್ಲಿ ಬೆಂಕಿ ದುರಂತ ಸಂಭವಿಸಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.
ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಏಕಾ ಏಕಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಆತಂಕ ಪರಿಸ್ಥಿತಿ ನಿರ್ಮಾಣವಾಗಿತ್ತು. ತಕ್ಷಣವೇ ಐಸಿಯುನಲ್ಲಿದ್ದ ರೋಗಿಗಳನ್ನು ಬೇರೆ ಕಡೆ ಸ್ಥಳಾಂತರಿಸಲಾಯಿತು. ಹೀಗಾಗಿ ಎಲ್ಲ ಹದಿನಾರು ಮಂದಿರೋಗಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಯುಷ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ರೋಗಿಗಳನ್ನು ಸಕಾಲದಲ್ಲಿ ಸ್ಥಳಾಂತರಿಸಿದ್ದರಿಂದ ಸಂಭವಿಸಬಹುದಾಗಿದ್ದ ಅನಾಹುತದಿಂದ ರೋಗಿಗಳು ಪಾರಾದರು.
ಐಸಿಯುನಲ್ಲಿ ಎಸಿ ಸ್ಪೋಟಗೊಂಡಿದ್ದರಿಂದ ಈ ಅವಘಡ ಸಂಭವಿಸಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.