ಸೆ.17ರಂದು ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ


ಬಳ್ಳಾರಿ,ಸೆ.12: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ಸೆ.17ರಂದು ನಗರದ ಡಾ.ರಾಜ್‍ಕುಮಾರ್ ರಸ್ತೆಯ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜಿನ ಮೈದಾನದ ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಇದಕ್ಕೆ ಬೇಕಾದ ಎಲ್ಲ ರೀತಿಯ ಸಿದ್ಧತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಸೋಮವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಉತ್ಸವ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳಿಗೆ ವಹಿಸಲಾದ ಜವಾಬ್ದಾರಿಯನ್ನು ಅತ್ಯಂತ ಸಮರ್ಪಕವಾಗಿ ನಿರ್ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಮೈದಾನದ ಸ್ವಚತೆಯ ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಲ್ಯಾಣ ಕರ್ನಾಟಕ ಉತ್ಸವವನ್ನು ಜಿಲ್ಲಾಡಳಿತದ ವತಿಯಿಂದ ಅತ್ಯಂತ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಸ್ವಾಗತ ಸಮಿತಿ, ವೇದಿಕೆ ಸಮಿತಿ, ಸನ್ಮಾನ ಸಮಿತಿ, ಸ್ವಚ್ಛತೆ ಮತ್ತು ಕುಡಿಯುವ ನೀರಿನ ಸಮಿತಿ, ವಿದ್ಯುತ್ ಸಮಿತಿ, ದೀಪಾಲಂಕಾರ ಸಮಿತಿ, ಲಘು ಉಪಹಾರ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಿ, ಜವಾಬ್ದಾರಿಗಳನ್ನು ವಹಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ಇದೇ ಸಂದರ್ಭದಲ್ಲಿ ನೀಡಿದರು.
ಎಲ್ಲಾ ಶಾಲಾ-ಕಾಲೇಜುಗಳಿಂದ ವಿದ್ಯಾರ್ಥಿಗಳು ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಅಪರ ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ಸೂಚಿಸಿದರು.
ಕ.ಕ ಉತ್ಸವ ಕಾರ್ಯಕ್ರಮ ನಡೆಯುವ ಮೈದಾನದಲ್ಲಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದ ಅವರು, ಕಲ್ಯಾಣ ಕರ್ನಾಟಕ ಉತ್ಸವ ದಿನದಂದು ಜರುಗಲಿರುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದರಿಂದ ಶಾಲಾ ಮಕ್ಕಳು, ಸಣ್ಣ ಮಕ್ಕಳು ಬರುವುದರಿಂದ ಜನಸಂದಣಿ, ವಾಹನ ಸಂಚಾರವನ್ನು ಕ್ರಮಬದ್ಧಗೊಳಿಸಲು ಹಾಗೂ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಆಯೋಜಿಸಬೇಕು ಎಂದರು.
ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದಲ್ಲಿಯೂ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲು ಆಯಾ ತಾಲೂಕು ಮಟ್ಟದ ತಹಸೀಲ್ದಾರರು ಹಾಗೂ ಇಲಾಖಾ ಅಧಿಕಾರಿಗಳು ಕ್ರಮ ವಹಿಸಬೇಕು ಹಾಗೂ ಜಿಲ್ಲಾ ಮಟ್ಟದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನುರಪ್ಪ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.